ಬೆಂಗಳೂರು : ರಾಜ್ಯದಲ್ಲಿ ಮಳೆ ಕೊರತೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಗುರುತಿಸಲಾಗಿದೆ ಎಂದು ಕಂದಾಯ ಸಚಿವರೂ ಆಗಿರುವ ಡಿಸಿಎಂ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೂನ್ 1ರಿಂದ ಈವರೆಗೆ ರಾಜ್ಯದಲ್ಲಿ 666 ಮಿ.ಮೀ. ಮಳೆಯಾಗಬೇಕಾಗಿದ್ದರೂ ಕೇವಲ 464 ಮಿ.ಮೀ. ಮಳೆಯಾಗಿದೆ. ಒಳನಾಡು ಕರ್ನಾಟಕದಲ್ಲಿ ಶೇ.33ರಷ್ಟು, ದಕ್ಷಿಣ ಒಳನಾಡಿನಲ್ಲಿ ಶೇ.41ರಷ್ಟು ಹಾಗೂ ಕರಾವಳಿ ಭಾಗದಲ್ಲಿ ಶೇ.24ರಷ್ಟು ಮಳೆ ಕೊರತೆಯಾಗಿದೆ ಎಂದು ಹೇಳಿದರು. ರಾಜ್ಯದ 190 ತಾಲ್ಲೂಕುಗಳಲ್ಲಿ ಮಳೆ ಕೊರತೆಯಾಗಿದ್ದು, 13 ತಾಲ್ಲೂಕುಗಳಲ್ಲಿ ಮಳೆಯ ತೀವ್ರ ಕೊರತೆ ಕಂಡುಬಂದಿದೆ. ಜಿಲ್ಲಾಧಿಕಾರಿಗಳ ವರದಿ ಆಧಾರದ ಮೇಲೆ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಗುರುತಿಸಲಾಗಿದೆ ಎಂದು ಪರಮೇಶ್ವರ್ ತಿಳಿಸಿದರು.
ಒಟ್ಟು 134 ತಾಲ್ಲೂಕುಗಳಲ್ಲಿ ಬರ ಘೋಷಣೆಗೆ ಪೂರಕ ಅಂಶಗಳಿದ್ದು, ಈ ಪ್ರದೇಶಗಳಿಗೆ ತಂಡಗಳನ್ನು ಕಳುಹಿಸಿ ಪರಿಶೀಲನೆ ನಡೆಸಲಾಗಿದೆ. ಪರಿಶೀಲನೆಯಲ್ಲಿ 89 ತಾಲ್ಲೂಕುಗಳಲ್ಲಿ ತೀವ್ರ ಬರ ಹಾಗೂ 12 ತಾಲ್ಲೂಕುಗಳಲ್ಲಿ ಸಾಧಾರಣ ಬರ ಪರಿಸ್ಥಿತಿ ಕಂಡುಬಂದಿದೆ ಎಂದು ಅವರು ಹೇಳಿದರು. ರಾಜ್ಯಕ್ಕೆ ಬರ ಪರಿಹಾರ ಒದಗಿಸುವಂತೆ ಕೇಂದ್ರ ಸರ್ಕಾರದ ಮೊರೆ ಹೋಗಲಾಗುವುದು. ಈ ಸಂಬಂಧ ಕೇಂದ್ರ ಸಚಿವರನ್ನು ಭೇಟಿ ಮಾಡಿ ಪರಿಹಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಡಿಸಿಎಂ ಪರಮೇಶ್ವರ್ ತಿಳಿಸಿದರು.
