Tuesday, January 20, 2026

ಸತ್ಯ | ನ್ಯಾಯ |ಧರ್ಮ

ಸಿಎಂ ಸೇರಿದಂತೆ 140 ಶಾಸಕರು ನನ್ನ ಬೆಂಬಲಕ್ಕೆ ಇದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

  • ಸಿಎಂ ಹಾಗೂ ನಾನು ಏನು ಮಾತನಾಡಿದ್ದೇವೆ ಎಂದು ನಮಗೆ ಗೊತ್ತು
  • ಒಂದೇ ಬಾರಿಗೆ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಚಿಂತನೆ
  • ಕಾಲವೇ ಎಲ್ಲದಕ್ಕೂ ಉತ್ತರ ನೀಡಲಿದೆ

ಬೆಂಗಳೂರು : “ಸಿಎಂ ಸೇರಿ ಕಾಂಗ್ರೆಸ್ ಪಕ್ಷದ 140 ಶಾಸಕರೂ ನನ್ನ ಬೆಂಬಲಕ್ಕೆ ಇದ್ದಾರೆ. ನಮ್ಮ ನಡುವೆ ಏನು ಚರ್ಚೆಯಾಗಿದೆ ಎಂದು ನಮಗೆ ಗೊತ್ತು, ಇದನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

ನಿಮ್ಮ ಬೆಂಬಲಿಗರು ಹೈಕಮಾಂಡ್ ತೀರ್ಮಾನದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ ಎಂದು ಕೇಳಿದಾಗ, “ಯಾರು ಹೇಳಿದರು? 140 ಶಾಸಕರು ಕೂಡ ನನ್ನ ಬೆಂಬಲಿಗರೇ. ಸಿಎಂ ಸಿದ್ದರಾಮಯ್ಯ ಅವರು ಕೂಡ ನನಗೆ ಬೆಂಬಲವಾಗಿದ್ದಾರೆ. ನಾನು ಹಾಗೂ ಸಿಎಂ ಅವರು ಏನು ಮಾತನಾಡಿದ್ದೇವೆ ಎಂದು ನಿಮಗೆ ಗೊತ್ತಿದೆಯಾ? ರಾಹುಲ್ ಗಾಂಧಿ ಸಮ್ಮುಖದಲ್ಲಿ ನಾವು ಏನು ಮಾತನಾಡಿಕೊಂಡಿದ್ದೇವೆ, ಹೈಕಮಾಂಡ್ ಸಮ್ಮುಖದಲ್ಲಿ ಏನು ಮಾತನಾಡಿದ್ದೇವೆ, ಎಲ್ಲ ಕೂತು ಏನು ತೀರ್ಮಾನ ಮಾಡಿದ್ದೇವೆ ಎಂದು ನಮಗೆ ಗೊತ್ತಿದೆ. ಈ ವಿಚಾರವನ್ನು ನಿಮ್ಮ ಮುಂದೆ ಬಹಿರಂಗವಾಗಿ ಚರ್ಚೆ ಮಾಡಲು ಸಾಧ್ಯವೇ? ಕಾಲವೇ ಎಲ್ಲದಕ್ಕೂ ಉತ್ತರ ನೀಡಲಿದೆ” ಎಂದರು.

ದೆಹಲಿ ಭೇಟಿ ಬಗ್ಗೆ ಕೇಳಿದಾಗ, “ನಾವು ದೆಹಲಿಗೆ ಹೋಗುವುದೇ ರಾಜಕೀಯ, ಪಕ್ಷ ಹಾಗೂ ಸರ್ಕಾರದ ಕೆಲಸಗಳಿಗೆ. ಮಾಧ್ಯಮಗಳು ರಾಹುಲ್ ಗಾಂಧಿ ಭೇಟಿಯಾಗಿಲ್ಲ ಎಂದು ಬರೆದಿದ್ದೀರಿ. ಒಂದು ದಿನ ನಾವು ಜೊತೆಯಲ್ಲಿ ಕೂತು ಚರ್ಚೆ ಮಾಡಿರುವ ಫೋಟೋ ವರದಿ ಮಾಡಿದ್ದೀರಿ, ಮರುದಿನ ಭೇಟಿಯೇ ಆಗಿಲ್ಲ ಎಂದು ಹೇಳುತ್ತಿದ್ದೀರಿ. ಈ ವಿಚಾರದಲ್ಲಿ ಕಾಲ ಉತ್ತರ ನೀಡಲಿದೆ ಎಂದು ಹೇಳಿದ್ದೇನೆ. ಇದರ ಹೊರತಾಗಿ ನಾನು ಬೇರೆ ವಿಚಾರ ಚರ್ಚೆ ಮಾಡುವುದಿಲ್ಲ” ಎಂದು ತಿಳಿಸಿದರು.

ಹೈಕಮಾಂಡ್ ಒಳ್ಳೆಯ ಸುದ್ದಿ ನೀಡಲಿದೆ ಎಂದು ನಿಮ್ಮ ಸಹೋದರ ಹೇಳಿದ್ದಾರೆ ಎಂದು ಕೇಳಿದಾಗ, “ನನ್ನ ತಮ್ಮ, ನಮ್ಮ ಕಾರ್ಯಕರ್ತರು, ಮಾಧ್ಯಮಗಳು ಕೂಡ ಹೇಳುತ್ತಿವೆ” ಎಂದರು.

ಏಪ್ರಿಲ್ ತಿಂಗಳಲ್ಲಿ ಒಳ್ಳೆಯ ಸುದ್ದಿ ಬರಲಿದೆ ಎಂಬ ಚರ್ಚೆ ಬಗ್ಗೆ ಕೇಳಿದಾಗ, “ನೋಡೋಣ, ಈಗ ಆ ಮಾತು ಯಾಕೆ?” ಎಂದು ತಿಳಿಸಿದರು.

ರಾಜಕೀಯಕ್ಕಾಗಿ ದಾವೋಸ್ ಪ್ರವಾಸ ಕೈಬಿಟ್ಟಿರುವುದು ಸರಿಯಲ್ಲ ಎಂಬ ಬಿಜೆಪಿ ನಾಯಕರ ಟೀಕೆ ಬಗ್ಗೆ ಕೇಳಿದಾಗ, “ಅವರ ಮಾತಿನಲ್ಲಿ ಅರ್ಥವಿದೆ. ತಪ್ಪು ಎಂದು ನಾನು ಹೇಳುವುದಿಲ್ಲ. ನಾಳೆ ಬೆಳಗ್ಗೆ ಈ ಪ್ರಶ್ನೆ ಕೇಳಿ” ಎಂದು ಉತ್ತರಿಸಿದರು.

*ಒಂದೇ ಬಾರಿಗೆ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಚಿಂತನೆ:*

ಜಿಬಿಎ ಚುನಾವಣೆ ಸಂಬಂಧಿಸಿದಂತೆ ಇಂದು ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ್ದು, ಪಾಲಿಕೆ ಚುನಾವಣೆಗಳು ಯಾವಾಗ ನಡೆಯಬಹುದು ಎಂದು ಕೇಳಿದಾಗ, “ನ್ಯಾಯಾಲಯ ಆದೇಶ ನೀಡಿದೆ. ನಮ್ಮ ಸರ್ಕಾರ ಸಂವಿಧಾನದ 73, 74ನೇ ತಿದ್ದುಪಡಿಗೆ ಬದ್ಧವಾಗಿದೆ. ಯುವಕರಿಗೆ ಅಧಿಕಾರ ನೀಡಬೇಕು, ಹೊಸ ಪೀಳಿಗೆ ಅಧಿಕಾರಕ್ಕೆ ಬರಬೇಕು. ಈಗ ಐದು ಪಾಲಿಕೆಗಳಿಂದ 369 ವಾರ್ಡ್ ಗಳನ್ನು ರಚಿಸಲಾಗಿದೆ. ಇನ್ನು ಬೆಂಗಳೂರಿನ ಹೊರವಲಯವನ್ನು ಪಾಲಿಕೆ ವ್ಯಾಪ್ತಿಗೆ ಸೇರಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಯುತ್ತಿದೆ. ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆ ನಡೆಸಲು ನಮ್ಮ ಸರ್ಕಾರ ತೀರ್ಮಿನಿಸಿದೆ. ಇವುಗಳಿಗೆ ಇದ್ದ ಮೀಸಲಾತಿ ಸಮಸ್ಯೆ ಬಗೆಹರಿಸಲು ಸಿಎಂ ಹಾಗೂ ಸಚಿವರು ತಿಳಿಸಿದ್ದಾರೆ. ಗ್ರಾಮ ಪಂಚಾಯ್ತಿ ಚುನಾವಣೆಗಳನ್ನೂ ಪಕ್ಷದ ಚಿಹ್ನೆ ಮೇಲೆ ನಡೆಸಬೇಕು ಎಂದು ಅನೇಕರು ಸಲಹೆ ನೀಡಿದ್ದು, ನಾವಿನ್ನೂ ಆ ಬಗ್ಗೆ ತೀರ್ಮಾನ ಮಾಡಿಲ್ಲ. ಒಂದೇ ಬಾರಿಗೆ ಎಲ್ಲವನ್ನು ನಡೆಸಲು ಚಿಂತನೆ ನಡೆಯುತ್ತಿದೆ” ಎಂದರು.

ಈ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮತಯಂತ್ರ ಹೊರತಾಗಿ ಮತಪತ್ರ ಬಳಸುವ ಬಗ್ಗೆ ಕೇಳಿದಾಗ, “ನನಗೂ ಈ ಬಗ್ಗೆ ಮಾಹಿತಿ ಬಂದಿದೆ. ಇದು ರಾಜ್ಯ ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ. ಮತಪತ್ರ ಬಳಸುವುದರಲ್ಲಿ ತಪ್ಪೇನು ಇಲ್ಲ. ಯಾವ ರೂಪದಲ್ಲಿ ಚುನಾವಣೆ ನಡೆಸಲಾಗುವುದು ಎಂಬುದಕ್ಕಿಂತ ಮತದಾನ ನಡೆಯುವುದು ಬಹಳ ಮುಖ್ಯ. ಈಗ ಕರಡು ಮತದಾರರ ಪಟ್ಟಿ ಬಿಡುಗಡೆಯಾಗಿದ್ದು, ನಾವು ಈಗಾಗಲೇ ಬಿಎಲ್ಎಗಳ ಸಿದ್ಧತೆ ಮಾಡಿಕೊಂಡಿದ್ದೇವೆ. ಯಾವುದೇ ಮತದಾರರ ಹೆಸರು ಪಟ್ಟಿಯಲ್ಲಿ ಬಿಟ್ಟುಹೋಗಿದ್ದರೆ ಅವರಿಗೆ ಮತ್ತೆ ಅವಕಾಶ ಕಲ್ಪಿಸಬೇಕು ಹಾಗೂ ಅವರ ಹಕ್ಕನ್ನು ಅವರಿಗೆ ನೀಡಬೇಕು. ಅಧಿಕಾರಿಗಳ ಕಾರ್ಯದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಅದಕ್ಕಾಗಿಯೇ ಇರುವ ಕಾನೂನು ಚೌಕಟ್ಟಿನಲ್ಲಿ ಚುನಾವಣಾ ಆಯೋಗ ಕೆಲಸ ಮಾಡಲಿದೆ” ಎಂದು ತಿಳಿಸಿದರು.

ಕೇಂದ್ರ ಚುನಾವಣಾ ಆಯೋಗದ ಮೇಲೆ ಅನುಮಾನದಿಂದ ಮತಪತ್ರ ಬಳಸಲಾಗುವುದೇ ಎಂದು ಕೇಳಿದಾಗ, “ಚುನಾವಣೆ ಮಾಡಲು ನಾವ್ಯಾರು? ಚುನಾವಣೆ ನಡೆಸುತ್ತಿರುವುದು ಚುನಾವಣಾ ಆಯೋಗ. ರಾಜ್ಯ ಚುನಾವಣಾ ಆಯೋಗ ನಮ್ಮ ಸರ್ಕಾರದ ನಿಯಂತ್ರಣಕ್ಕೆ ಬರುವುದಿಲ್ಲ. ಅವರೇ ಏನು ಮಾಡಬೇಕು ಎಂದು ತೀರ್ಮಾನ ಮಾಡುತ್ತಾರೆ” ಎಂದರು.

ಡಿಜಿಪಿ ರಾಮಚಂದ್ರ ಅವರು ಮಹಿಳೆಯರ ಜೊತೆ ಕಚೇರಿಯಲ್ಲಿ ಅಶ್ಲೀಲವಾಗಿ ವರ್ತಿಸಿರುವ ಅನೇಕ ವಿಡಿಯೋ ವೈರಲ್ ಆಗಿವೆ ಎಂದು ಕೇಳಿದಾಗ, “ನನಗೆ ಈ ಬಗ್ಗೆ ಮಾಹಿತಿ ಇಲ್ಲ. ಈ ಬಗ್ಗೆ ಗೃಹ ಸಚಿವರು ಹಾಗೂ ಮುಖ್ಯಮಂತ್ರಿಗಳನ್ನು ಕೇಳಿ” ಎಂದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page