ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಹೆಡದಾಳು ಬಳಿ ಬುಧವಾರ ಬೆಳಗ್ಗೆ ಕಾಡಾನೆ ದಾಳಿಯಿಂದ ಮೃತಪಟ್ಟ 29 ವರ್ಷದ ಕೂಲಿ ಕಾರ್ಮಿಕ ಮಹಿಳೆ ಮೀನಾ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ 15 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದು, ಪರಿಹಾರ ಚೆಕ್ಕನ್ನು ಕೂಡಲೇ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಹಿಳೆಯ ಸಾವಿಗೆ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಮೂಡಿಗೆರೆಯಲ್ಲಿ ಜಿಲ್ಲಾಧಿಕಾರಿ, ಎಸ್ಪಿ ಹಾಗೂ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳು ತುರ್ತು ಸಭೆ ನಡೆಸಿ ಕಾಡಾನೆಗಳನ್ನು ಮರಳಿ ಕಾಡಿಗೆ ಕಳುಹಿಸಿ ಹಾವಳಿ ತಪ್ಪಿಸಿದ್ದಾರೆ.
ಕೂಡಲೇ ಕಾಡಾನೆಗಳನ್ನು ಕಾಡಿಗೆ ಕಳುಹಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸಿಎಂ ಸ್ಪಷ್ಟ ಸೂಚನೆ ನೀಡಿದ್ದಾರೆ.
ಮೀನಾ ಮೃತದೇಹದೆದುರು ಕುಳಿತು ಹೋರಾಟ ನಡೆಸುತ್ತಿರುವ ಪ್ರತಿಭಟನಾಕಾರರೊಂದಿಗೆ ಮುಖ್ಯಮಂತ್ರಿಗಳು ದೂರವಾಣಿ ಮೂಲಕ ಮಾತನಾಡಿ, ಆನೆ ದಾಳಿ ತಪ್ಪಿಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು.
ಅರಣ್ಯ ಸಚಿವರೂ ಆಗಮಿಸಿ ರಕ್ಷಣಾ ಕ್ರಮಗಳ ಕುರಿತು ಸಭೆ ನಡೆಸಲಿದ್ದಾರೆ. ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಕಾಫಿ ತೋಟಗಳಿಗೆ ಕಾಡಾನೆಗಳು ನುಗ್ಗುತ್ತಿವೆ.
ರೈಲ್ವೆ ಬೇಲಿ ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕಾರ್ಯಪಡೆಗೆ ಸೂಚಿಸಲು ಅರಣ್ಯ ಸಚಿವರೊಂದಿಗೆ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಕಾಡಾನೆಗಳನ್ನು ಗುಂಡಿಕ್ಕಿ ಕೊಲ್ಲಬೇಕು ಎಂಬ ಸ್ಥಳೀಯರು ಹಾಗೂ ಪ್ರತಿಭಟನಾಕಾರರ ಒತ್ತಾಯಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು ಅವರನ್ನು ಸಂತೈಸಿ, ಆ ನಿಟ್ಟಿನಲ್ಲಿ ಆಲೋಚಿಸಬೇಡಿ ಎಂದು, ಇತರ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.