Home ಅಪಘಾತ ತಮಿಳುನಾಡಿನ ವಿರುದುನಗರ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 16 ಮಹಿಳೆಯರು ಸೇರಿದಂತೆ 23 ಸಾವು

ತಮಿಳುನಾಡಿನ ವಿರುದುನಗರ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 16 ಮಹಿಳೆಯರು ಸೇರಿದಂತೆ 23 ಸಾವು

0

ಚೆನ್ನೈ: ತಮಿಳುನಾಡಿನ ವಿರುದುನಗರ ಜಿಲ್ಲೆಯ ಕತ್ತನಾರ್‌ಪಟ್ಟಿ ಗ್ರಾಮದ ಬಳಿ ಇರುವ ವನಜ ಪಟಾಕಿ ಕಾರ್ಖಾನೆಯಲ್ಲಿ ಭಾನುವಾರ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 23 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತರ ಪೈಕಿ 16 ಮಂದಿ ಮಹಿಳೆಯರು ಸೇರಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವಿರುದುನಗರ ಜಿಲ್ಲಾಧಿಕಾರಿ ಎನ್.ಓ. ಸುಖಪತ್ರ ಅವರು ನೀಡಿದ ಮಾಹಿತಿಯ ಪ್ರಕಾರ, ಅವಘಡದ ಸ್ಥಳದಿಂದ ರಕ್ಷಣಾ ಸಿಬ್ಬಂದಿ ಇದುವರೆಗೆ 23 ಮೃತದೇಹಗಳನ್ನು ಹೊರತೆಗೆದಿದ್ದಾರೆ. ಗಾಯಗೊಂಡ ಆರು ಮಂದಿಯನ್ನು ವಿರುದುನಗರ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಮೃತಪಟ್ಟವರಲ್ಲಿ 19 ಮಂದಿಯನ್ನು ಗುರುತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಾರ್ಖಾನೆಯು ನಾಗ್ಪುರದ ಪೆಟ್ರೋಲಿಯಂ ಮತ್ತು ಸ್ಫೋಟಕಗಳ ಸುರಕ್ಷತಾ ಸಂಸ್ಥೆಯ (PESO) ಪರವಾನಗಿಯನ್ನು ಹೊಂದಿತ್ತು. “ಕಾರ್ಮಿಕರು ರಾಸಾಯನಿಕಗಳನ್ನು ಮಿಶ್ರಣ ಮಾಡುತ್ತಿದ್ದಾಗ ಸ್ಫೋಟ ಸಂಭವಿಸಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸ್ಫೋಟದ ತೀವ್ರತೆ ಎಷ್ಟು ಭೀಕರವಾಗಿತ್ತೆಂದರೆ, ಮೂರು ಕೊಠಡಿಗಳು ಸಂಪೂರ್ಣವಾಗಿ ಧ್ವಂಸಗೊಂಡಿದ್ದು, ಪಕ್ಕದ ಕಟ್ಟಡಗಳಿಗೂ ಹಾನಿಯಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದಾಗ ಮತ್ತೊಂದು ಸ್ಫೋಟ ಸಂಭವಿಸಿದ್ದರಿಂದ ಹಲವರು ಗಾಯಗೊಂಡಿದ್ದಾರೆ. ಸುಮಾರು 100ಕ್ಕೂ ಹೆಚ್ಚು ಕಾರ್ಮಿಕರು ಘಟನಾ ಸ್ಥಳದಲ್ಲಿ ಇದ್ದರು ಎಂದು ತಿಳಿದುಬಂದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಗಂಟೆಗಳ ಕಾಲ ಶ್ರಮಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.

ಈ ದುರ್ಘಟನೆಯ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸಲು ಇಬ್ಬರು ಸಚಿವರನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.

You cannot copy content of this page

Exit mobile version