ಹೊಸ ದೆಹಲಿ: ಭಾರತದ 30 ಮುಖ್ಯಮಂತ್ರಿಗಳಲ್ಲಿ 12 (ಶೇ 40) ಮಂದಿಯ ಮೇಲೆ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಸಂಸ್ಥೆ ಬಹಿರಂಗಪಡಿಸಿದೆ.
ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ತಮ್ಮ ವಿರುದ್ಧ ಅತಿ ಹೆಚ್ಚು ಅಂದರೆ 89 ಪ್ರಕರಣಗಳಿವೆ ಎಂದು ಸ್ವತಃ ಘೋಷಿಸಿಕೊಂಡಿದ್ದಾರೆ. ತಮಿಳುನಾಡಿನ ಸಿಎಂ ಎಂ.ಕೆ.ಸ್ಟಾಲಿನ್ ತಮ್ಮ ಮೇಲೆ 47 ಕ್ರಿಮಿನಲ್ ಪ್ರಕರಣಗಳಿರುವುದಾಗಿ ಹೇಳಿದ್ದಾರೆ. ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮೇಲೆ 19, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ 13, ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮೇಲೆ ಐದು ಪ್ರಕರಣಗಳು ದಾಖಲಾಗಿವೆ. ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಹಿಮಾಚಲ ಪ್ರದೇಶದ ಸಿಎಂ ಸುಖ್ವಿಂದರ್ ಸಿಂಗ್ ಮೇಲೆ ತಲಾ ನಾಲ್ಕು ಪ್ರಕರಣಗಳಿವೆ.
ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮೇಲೆ ಎರಡು ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮೇಲೆ ಒಂದು ಪ್ರಕರಣ ದಾಖಲಾಗಿದೆ. ಹತ್ತು ಮುಖ್ಯಮಂತ್ರಿಗಳ ಮೇಲೆ ಕೊಲೆ ಯತ್ನ, ಅಪಹರಣ, ಲಂಚ, ಕ್ರಿಮಿನಲ್ ಬೆದರಿಕೆ ಮುಂತಾದ ಗಂಭೀರ ಆರೋಪಗಳಿರುವ ಪ್ರಕರಣಗಳು ದಾಖಲಾಗಿವೆ. ದೇಶದ 30 ಮುಖ್ಯಮಂತ್ರಿಗಳು ಚುನಾವಣಾ ಸಮಯದಲ್ಲಿ ಸಲ್ಲಿಸಿದ ಅಫಿಡವಿಟ್‌ಗಳ ಆಧಾರದ ಮೇಲೆ ADR ಈ ವಿವರಗಳನ್ನು ಬಹಿರಂಗಪಡಿಸಿದೆ.
ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿರುವ ಮುಖ್ಯಮಂತ್ರಿಗಳಲ್ಲಿ ಚಂದ್ರಬಾಬು ನಾಯ್ಡು ಮತ್ತು ಫಡ್ನವಿಸ್ ಹೊರತುಪಡಿಸಿ ಉಳಿದವರೆಲ್ಲರೂ ವಿರೋಧ ಪಕ್ಷಗಳಿಗೆ ಸೇರಿದವರಾಗಿದ್ದಾರೆ. ಗಂಭೀರ ಅಪರಾಧ ಪ್ರಕರಣದಲ್ಲಿ 30 ಅಥವಾ ಅದಕ್ಕಿಂತ ಹೆಚ್ಚು ದಿನಗಳ ಕಾಲ ಜೈಲಿನಲ್ಲಿರುವ ಪ್ರಧಾನಮಂತ್ರಿ, ಮುಖ್ಯಮಂತ್ರಿಗಳು, ಕೇಂದ್ರ ಮತ್ತು ರಾಜ್ಯ ಸಚಿವರನ್ನು ಅಧಿಕಾರದಿಂದ ವಜಾಗೊಳಿಸುವ ಮಸೂದೆಯನ್ನು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸಿರುವ ಸಂದರ್ಭದಲ್ಲಿ ಈ ಮಾಹಿತಿ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.