Friday, June 14, 2024

ಸತ್ಯ | ನ್ಯಾಯ |ಧರ್ಮ

ಬೆಳಗಾವಿ ಗಡಿ ವಿವಾದ| ವಿರೋಧ ಪಕ್ಷಗಳ ವಿಶ್ವಾಸ ತೆಗೆದುಕೊಳ್ಳುವುದು ರಾಜ್ಯದ ಹಿತಾಸಕ್ತಿಗೆ ಪ್ರಯೋಜನಕಾರಿ: ಸಿದ್ದರಾಮಯ್ಯ

ಬೆಳಗಾವಿ: ಬೆಳಗಾವಿ ಗಡಿ ವಿವಾದದ ಬಗ್ಗೆ ಮಹಾರಾಷ್ಟ್ರ ಸರ್ಕಾರ ಭರದಿಂದ ಸಿದ್ಧತೆ ನಡೆಸುತ್ತರಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ರಾಜ್ಯದ ಹಿತಾಸಕ್ತಿಗೆ ಬೆಂಬಲವಾಗಿ ವಿರೋಧ ಪಕ್ಷಗಳ ವಿಶ್ವಾಸ ತೆಗೆದುಕೊಳ್ಳುವುದು ಪ್ರಯೋಜನಕಾರಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಬೆಳಗಾವಿ ಗಡಿ ವಿವಾದದ ಬಗ್ಗೆ ಮಹಾರಾಷ್ಟ್ರ ಸರ್ಕಾರ ವಿಶೇಷ ಆಸಕ್ತಿ ತೋರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಎಚ್ಚೆತ್ತುಕೊಂಡು ತಕ್ಷಣ ಸರ್ವಪಕ್ಷಗಳ ಸಭೆ ಕರೆದು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಬೇಕು ಎಂದು ಬಸವರಾಜ ಬೊಮ್ಮಾಯಿ ಅವರಿಗೆ ತಿಳಿಸಿದ್ದಾರೆ.

ಬೆಳಗಾವಿ ಗಡಿ ವಿವಾದದ ಬಗ್ಗೆ ನವಂಬರ್ 23ರಂದು ಸುಪ್ರೀಂ ಕೋರ್ಟ್ ನಡೆಸಲಿರುವ ವಿಚಾರಣೆಯನ್ನು ಎದುರಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಭರದಿಂದ ಸಿದ್ಧತೆ ನಡೆಸಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ತಮ್ಮ ರಾಜ್ಯ ಮಂಡಿಸಬೇಕಾದ ವಾದದ ಬಗ್ಗೆ ಸಮಾಲೋಚನೆ ನಡೆಸಲು ವಿರೋಧ ಪಕ್ಷಗಳ ಸದಸ್ಯರನ್ನೊಳಗೊಂಡ ಸಮಿತಿ ರಚಿಸಿರುವುದು ಆ ರಾಜ್ಯ ಗಡಿವಿವಾದವನ್ನು ಎಷ್ಟೊಂದು ಗಂಭೀರವಾಗಿ ಸ್ವೀಕರಿಸಿದೆ ಎನ್ನುವುದಕ್ಕೆ ಸಾಕ್ಷಿ ಎಂದು ಹೇಳಿದ್ದಾರೆ.

ನೆಲ-ಜಲ-ಭಾಷೆಯ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಗೆ ಬದ್ಧವಾಗಿ ರಾಜ್ಯ ಬಿಜೆಪಿ ಸರ್ಕಾರ ಕೈಗೊಳ್ಳುವ ಕ್ರಮಗಳನ್ನು ನಮ್ಮ ಪಕ್ಷ ಬೆಂಬಲಿಸುತ್ತದೆ. ಕಾಲವ್ಯಯ ಮಾಡದೆ‌ ಮುಖ್ಯಮಂತ್ರಿಯವರು ವಿರೋಧ ಪಕ್ಷಗಳ ಸಭೆ ಕರೆದು, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ‌ಮಾಡಬೇಕು ಎಂದಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು