Monday, June 17, 2024

ಸತ್ಯ | ನ್ಯಾಯ |ಧರ್ಮ

ಕ್ಷೇತ್ರಕ್ಕೆ ಹಣ ನೀಡುವಂತೆ ಒತ್ತಾಯಿಸಿ ಉಪವಾಸ ಕುಳಿತ ಶಾಸಕ ಮುನಿರತ್ನ

ಬೆಂಗಳೂರು: ಕರ್ನಾಟಕ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅವರು ಬುಧವಾರ ಉಪವಾಸ ಸತ್ಯಾಗ್ರಹ ನಡೆಸಿದರು.

ಬೆಂಗಳೂರಿನ ವಿಧಾನಸೌಧದ ಮಹಾತ್ಮ ಗಾಂಧಿ ಪ್ರತಿಮೆ ಎದುರು ಕುಳಿತು ರಾಜರಾಜೇಶ್ವರಿ ಕ್ಷೇತ್ರಕ್ಕೆ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ಬಿಜೆಪಿ ಧ್ವಜ ಮತ್ತು ಫಲಕಗಳನ್ನು ಹಿಡಿದಿದ್ದ ಮಾಜಿ ಸಚಿವರು ತಮ್ಮ ಸಹಚರರ ಜೊತೆ ಉಪವಾಸ ಕುಳಿತಿದ್ದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಅವರ ಸಹೋದರ ಸಂಸದ ಡಿ.ಕೆ. ಸುರೇಶ್ ಅವರ ವಿರುದ್ಧ ಘೋಷಣೆಗಳಿರುವ ಫಲಕಗಳೊಡನೆ ಪ್ರತಿಭಟನೆ ನಡೆಸಿದರು. ಆದರೆ, ಮುನಿರತ್ನ ಜತೆ ಕುಳಿತಿದ್ದ 10ಕ್ಕೂ ಹೆಚ್ಚು ಸಹಚರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ಶಾಸಕ ಮುನಿರತ್ನ ಉಪವಾಸ ಮುಂದುವರಿಸಿ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು.

ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ವಿರುದ್ಧ ವೈಯಕ್ತಿಕ ದ್ವೇಷ ಸಾಧಿಸುತ್ತಿದ್ದಾರೆ ಎಂದು ಶಾಸಕರು ಆರೋಪಿಸಿದ್ದಾರೆ. ಹಿಂದಿನ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ತಮ್ಮ ಕ್ಷೇತ್ರಕ್ಕೆ ನೀಡಲಾಗಿದ್ದ 126 ಕೋಟಿ ರೂಪಾಯಿ ಹಣವನ್ನು ಕಾಂಗ್ರೆಸ್ ಸರ್ಕಾರ ವಿವಿಧ ಕ್ಷೇತ್ರಗಳಿಗೆ ಹಂಚಿಕೆ ಮಾಡಿದೆ ಎಂದಿದ್ದಾರೆ.

ಮೀಸಲಿಟ್ಟ ಹಣವನ್ನು ತಮ್ಮ ಕ್ಷೇತ್ರಕ್ಕೆ ನೀಡಬೇಕು ಎಂದು ಒತ್ತಾಯಿಸಿ ಮುನಿರತ್ನ ಅವರು ತಮ್ಮ ಕ್ಷೇತ್ರಕ್ಕೆ ಆಗಿರುವ ಅನ್ಯಾಯವನ್ನು ವಿರೋಧಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಬೆಂಗಳೂರಿನ ಯಶವಂತಪುರ, ಬ್ಯಾಟರಾಯನಪುರ ಮತ್ತು ಪುಲಕೇಶಿನಗರ ಕ್ಷೇತ್ರಗಳಿಗೆ ಹಣ ಮಂಜೂರು ಮಾಡಲಾಗಿದೆ ಎಂದು ಬಿಜೆಪಿ ಶಾಸಕ ಮುನಿರತ್ನ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಹಿಂದೆ ಮುನಿರತ್ನ, ಬೆಂಗಳೂರು ಅಭಿವೃದ್ಧಿ ಸಚಿವಾಲಯವನ್ನು ಹೊಂದಿರುವ ಡಿಕೆ ಶಿವಕುಮಾರ್ ಅವರ ಕಾಲಿಗೆ ಬೇಕಾದರೂ ಬೀಳುತ್ತೇನೆ ಎಂದು ಹೇಳಿದ್ದರು.

ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ ಸುರೇಶ್ ಅವರು ವಿಧಾನಸಭಾ ಚುನಾವಣೆಯಲ್ಲಿ ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸಲು ಸಾಕಷ್ಟು ಪ್ರಯತ್ನಗಳನ್ನು ಮಾಡಿದ್ದರು. ಆದರೆ, ಕಾಂಗ್ರೆಸ್ ಅಭ್ಯರ್ಥಿ ಎಚ್.ಕುಸುಮಾ 11,842 ಮತಗಳಿಂದ ಪರಾಭವಗೊಂಡಿದ್ದರು. ಮುನಿರತ್ನ ಚುನಾವಣೆಯಲ್ಲಿ 1.27 ಲಕ್ಷ ಮತಗಳನ್ನು ಪಡೆದಿದ್ದರು.

Related Articles

ಇತ್ತೀಚಿನ ಸುದ್ದಿಗಳು