Sunday, June 16, 2024

ಸತ್ಯ | ನ್ಯಾಯ |ಧರ್ಮ

ಅಕ್ರಮ ಗಣಿಗಾರಿಕೆ ವಿರುದ್ಧ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹೊಸಪೇಟೆ: ಅಕ್ರಮ ಗಣಿಗಾರಿಕೆ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಯಾವುದೇ ವರ್ಗದ ಗಣಿಗಾರಿಕೆ ಕಾನೂನು ಪರವಾನಗಿ ಹೊಂದಿದ್ದರೆ, ಸಂಬಂಧಪಟ್ಟ ಎಲ್ಲಾ ಇಲಾಖೆಗಳಿಂದ ಸಂಪೂರ್ಣ ಸಹಕಾರ ಇರುತ್ತದೆ ಎಂದು ಅವರು ಹೇಳಿದರು.

ಅವರು ಇಂದು ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

ಗಣಿಗಾರಿಕೆಗೆ ಸಂಬಂಧಿಸಿದಂತೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಅರಣ್ಯ ಇಲಾಖೆಯೊಂದಿಗೆ ಸಭೆ ನಡೆಸಲಾಗಿದ್ದು, ಎ, ಬಿ, ಸಿ ಅಥವಾ ಯಾವುದೇ ವರ್ಗದ ಗಣಿಗಾರಿಕೆಗೆ ತೊಂದರೆಯಾಗದಂತೆ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು. ಅರಣ್ಯ ಭೂಮಿಯಲ್ಲಿ ಗಣಿಗಾರಿಕೆಗೆ ಪರ್ಯಾಯ ಕ್ರಮಗಳ ಬಗ್ಗೆಯೂ ಚರ್ಚಿಸಲಾಯಿತು. ಅಕ್ರಮ ಗಣಿಗಾರಿಕೆ ವಿರುದ್ಧ ಈ ಹಿಂದೆಯೂ ಹೋರಾಟ ನಡೆಸಿದ್ದೇವೆ ಎಂದರು.

ಪರಿಶೀಲನೆ ಮತ್ತು ಕ್ರಮ:

36 ಕೋಟಿ ವೆಚ್ಚದಲ್ಲಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ ಹಾಗೂ ಗ್ರಂಥಾಲಯ ಕಟ್ಟಡಗಳು ಹಾಗೂ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಲಾಗಿದೆ. ಈ ಸುಸಜ್ಜಿತ ಕಟ್ಟಡಗಳಿಂದ ಸುಮಾರು 3 ಸಾವಿರ ವಿದ್ಯಾರ್ಥಿಗಳು ಪ್ರಯೋಜನ ಪಡೆಯುತ್ತಿದ್ದಾರೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದರು. ವಿಜಯನಗರ ಜಿಲ್ಲೆಯಲ್ಲಿ ಮಹಿಳಾ ಪದವಿ ಕಾಲೇಜು ಹಾಗೂ ಮಹಿಳಾ ಪೊಲೀಸ್ ಠಾಣೆಯ ಅಗತ್ಯತೆ ಕುರಿತು ಮಾಧ್ಯಮಗಳು ವ್ಯಕ್ತಪಡಿಸಿದ ಅಭಿಪ್ರಾಯಕ್ಕೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಸರ್ಕಾರ ಬೀಳಿಸಲು ಬಿಜೆಪಿಯ ವ್ಯರ್ಥ ಪ್ರಯತ್ನ

ಕಾಂಗ್ರೆಸ್ ಸರ್ಕಾರ ಶೀಘ್ರದಲ್ಲೇ ಪತನವಾಗಲಿದೆ ಎಂಬ ಶಾಸಕ ರಮೇಶ್ ಜಾರಕಿಹೊಳಿ ಅವರ ಭವಿಷ್ಯವಾಣಿಗೆ ಪ್ರತಿಕ್ರಿಯಿಸಿದ ಸಿಎಂ, ಕರ್ನಾಟಕದ ಜನರು ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳೊಂದಿಗೆ ಬಹುಮತ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಐದು ವರ್ಷ ಆಡಳಿತ ನಡೆಸಲಿದೆ. ನಾನು ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದೇನೆ. ಆಪರೇಷನ್ ಕಮಲದಲ್ಲಿ ಬಿಜೆಪಿ ಒಮ್ಮೆ ಯಶಸ್ವಿಯಾದ ಕಾರಣ ಮತ್ತೊಮ್ಮೆ ಪ್ರಯತ್ನ ಮಾಡಬಹುದು ಎಂದು ಭಾವಿಸಿದ್ದಾರೆ. ಆದರೆ ಅವರ ಪ್ರಯತ್ನ ವ್ಯರ್ಥವಾಗುತ್ತದೆ ಎಂದರು.

ಹೈಕಮಾಂಡ್ ನಿರ್ಧಾರ

ಸರ್ಕಾರದಲ್ಲಿ ಮೂವರು ಉಪಮುಖ್ಯಮಂತ್ರಿಗಳು ಇರುತ್ತಾರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಕಾಂಗ್ರೆಸ್ ರಾಷ್ಟ್ರೀಯ ಪಕ್ಷವೇ ಹೊರತು ಪ್ರಾದೇಶಿಕ ಪಕ್ಷವಲ್ಲ. ಇಂತಹ ವಿಚಾರಗಳನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಹೇಳಿದರು.

ಹಂಪಿ ಉತ್ಸವ:

ಹಂಪಿ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ವರ್ಷ ಜನವರಿಯಲ್ಲಿ ಹಂಪಿ ಉತ್ಸವ ಆಚರಿಸಿದಂತೆ ಈ ವರ್ಷವೂ ಜನವರಿಯಲ್ಲಿ ಆಚರಿಸಲಾಗುವುದು ಎಂದು ಉತ್ತರಿಸಿದರು.

ಸಕ್ಕರೆ ಕಾರ್ಖಾನೆ

ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸುವ ಕುರಿತು ಪ್ರತಿಕ್ರಿಯಿಸಿದ ಸಿಎಂ, ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.

ಹಂಪಿ ವಿಶ್ವವಿದ್ಯಾಲಯಕ್ಕೆ ಅನುದಾನ

ಹಂಪಿ ವಿಶ್ವವಿದ್ಯಾನಿಲಯಕ್ಕೆ ಹಣದ ಕೊರತೆಯ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹಂಪಿ ವಿಶ್ವವಿದ್ಯಾಲಯಕ್ಕೆ ಹಣ ಕೇಳಿದರೆ ತಕ್ಷಣ ಹಣ ನೀಡಲಾಗುವುದೆಂದು ಪ್ರತಿಕ್ರಿಯಿಸಿದರು.

Related Articles

ಇತ್ತೀಚಿನ ಸುದ್ದಿಗಳು