Friday, August 16, 2024

ಸತ್ಯ | ನ್ಯಾಯ |ಧರ್ಮ

ಪ್ರವಾಹ ಪರಿಶೀಲನೆಗೆ ಬೆಳಗಾವಿಗೆ ಸಿಎಂ ಆಗಮನ: ಮನೆ ಹಾನಿಗೆ 1.2 ಲಕ್ಷ ರೂ ಪರಿಹಾರ ಘೋಷಣೆ

ಬೆಳಗಾವಿ: ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ರೂ. ಪರಿಹಾರದ ಜೊತೆಗೆ ಮನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ಪ್ರವಾಹ ಪೀಡಿತ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಜೆಪಿಯು ಪರಿಹಾರ ವಿತರಣೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಹಿಂದೆ ಬಿ.ಎಸ್.ಯಡಿಯೂರಪ್ಪನವರು ಸಂಪೂರ್ಣ ಮನೆ ಹಾನಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಈ ನೆರವಿನ ದುರುಪಯೋಗವಾಯಿತು. ಹಾಗೂ ಹಲವರಿಗೆ ಮೊದಲನೇ ಕಂತು ಮಾತ್ರ ಬಿಡುಗಡೆಯಾಗಿ, ಎರಡು ಹಾಗೂ ಮೂರನೇ ಕಂತಿನ ಪರಿಹಾರ ಈ ವರೆಗೂ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ 1.2 ಲಕ್ಷ ರೂ. ಪರಿಹಾರ ಹಾಗೂ ಮನೆ ನೀಡುವ ನಿರ್ಧಾರ ಮಾಡಿದೆ ಎಂದು ಸ್ಪಷ್ಟ ಪಡಿಸಿದರು.

ಜನರ ಸಹಕಾರ ವಿದ್ದರೆ ಪದೇ ಪದೇ ಮುಳುಗಡೆಯಾಗುವ ಹಳ್ಳಿಗಳ ಸ್ಥಳಾಂತರ ಮಾಡುವ ಮೂಲಕ ಶಾಶ್ವತ ಪರಿಹಾರ ಒದಗಿಸಲು ಚಿಂತನೆ ಮಾಡಲಾಗುವುದು ಎಂದು ತಿಳಿಸಿದರು.

ರಿಹಾರ ಕೆಲಸ ಪ್ರಾರಂಭ

ರಾಜ್ಯದ ಹಲವೆಡೆ ಮಳೆಯಿಂದ ಹಾನಿಯಾಗಿದೆ. ಎಲ್ಲ ಕಡೆ ಪರಿಹಾರ ಕೆಲಸಗಳನ್ನು ಪ್ರಾರಂಭಿಸಲಾಗಿದೆ. ಮೈಸೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಭೇಟಿನೀಡಲಾಗಿದ್ದು, ಮೃತಪಟ್ಟವರಿಗೆ ಹಾಗೂ ಜಾನುವಾರುಗಳು ಸತ್ತಿರುವುದಕ್ಕೆ ಕೂಡಲೇ ಪರಿಹಾರ ವಿತರಿಸಲಾಗುತ್ತಿದೆ. ಮನೆಗಳ ಬಿದ್ದಿರುವುದಕ್ಕೆ ಪರಿಹಾರ, ವಿದ್ಯುತ್‌ ಕಂಬ, ಟ್ರಾನ್ಸ್‌ಫಾರ್ಮರ್‌ ಗಳ ದುರಸ್ತಿ ಮೊದಲಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಬೆಳಗಾವಿಯಲ್ಲಿ ಕಳೆದ 42 ದಿನದಿಂದ ನಿರಂತರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿಗಳಿಗೂ ರಜೆ ಘೋಷಣೆ ಮಾಡುವಂತೆ ಸೂಚಿಸಲಾಗಿದೆ.
ಮುಂದಿನ ವಾರ ಹೆಚ್ಚು ಮಳೆ: ಕಟ್ಟೆಚ್ಚರ ವಹಿಸಲು ಸೂಚನೆ
ಮುಂದಿನ ವಾರ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಇದಕ್ಕಾಗಿ ಕಂದಾಯ, ವಿಪತ್ತು ನಿರ್ವಹಣೆ, ಅರಣ್ಯ ಇಲಾಖೆ, ಇಂಧನ, ನೀರಾವರಿ ಸೇರಿದಂತೆ ಎಲ್ಲ ಇಲಾಖೆಗಳು ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ ಎಂದರು.

ಮುಡಾ ಪ್ರಕರಣ

ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಸರಿಯಾಗಿ ಎದುರಿಸ್ತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ಆಗಿ ತಿಳಿಸಿದರು.

ಮುಡಾ ಪ್ರಕರಣದ ಕುರಿತು ರಾಜ್ಯಪಾಲರು ನೀಡಿರುವ ಶೋಕಾಸ್‌ ನೊಟೀಸ್‌ ಹಿಂತೆಗೆದುಕೊಳ್ಳಬೇಕು. ಅದೇ ರೀತಿ ರಾಜ್ಯಪಾಲರಿಗೆ ಟಿ.ಜೆ.ಅಬ್ರಹಾಂ ನೀಡಿರುವ ದೂರನ್ನು ತಿರಸ್ಕರಿಸಬೇಕು ಎಂದು ಮನವಿ ಮಾಡಿದ್ದೇವೆ.ಈ ಕುರಿತಾಗಿ ರಾಜ್ಯಪಾಲರು ಯಾವ ತೀರ್ಮಾನ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡುವುದಾಗಿ ಅವರು ಹೇಳಿದರು.
ಗೃಹಲಕ್ಷ್ಮಿ ಬಾಕಿ
ಗೃಹ ಲಕ್ಷ್ಮಿ ಮೂರು ತಿಂಗಳಿನಿಂದ ಬಾಕಿ ಇದೆ ಎಂದು ಕೇಳಿದ್ದಕ್ಕೆ ಜುಲೈ ತಿಂಗಳಿನದ್ದು ಮಾತ್ರ ಬಾಕಿ ಇದೆ. ಅದನ್ನೂ ಶೀಘ್ರವೇ ವಿತರಿಸಲಾಗುವುದು ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌, ಬೆಳಗಾವಿ ಜಿಲ್ಲೆಯ ಶಾಸಕರು ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page