Tuesday, August 27, 2024

ಸತ್ಯ | ನ್ಯಾಯ |ಧರ್ಮ

ದೆಹಲಿ ಮದ್ಯ ನೀತಿ ಪ್ರಕರಣ: ಬಿಆರ್‌ಎಸ್ ನಾಯಕಿ ಕವಿತಾಗೆ ಸುಪ್ರೀಂ ಜಾಮೀನು

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣಗಳಲ್ಲಿ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರಿಗೆ ಸುಪ್ರೀಂ ಕೋರ್ಟ್‌ ಇಂದು ಮಂಗಳವಾರ ಜಾಮೀನು ಮಂಜೂರು ಮಾಡಿದೆ ಎಂದು ‘ಲೈವ್ ಲಾ’ ವರದಿ ಪ್ರಕಟಿಸಿದೆ.

ತಮಗೆ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್‌ನ ತೀರ್ಪು ಪ್ರಶ್ನಿಸಿ ಕವಿತಾ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ನ್ಯಾಯಾಲಯವು, ಅವರು ಕೋರಿರುವ ಜಾಮೀನು ಅರ್ಜಿಗೆ ಪ್ರತಿಕ್ರಿಯಿಸುವಂತೆ ಸಿಬಿಐ, ಇ.ಡಿ ಸಂಸ್ಥೆಗಳಿಗೆ ನೋಟಿಸ್‌ ನೀಡಿತ್ತು.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ಜಾಮೀನು ಮತ್ತು ಎಎಪಿ ನಾಯಕ ಮನೀಷ್‌ ಸಿಸೋಡಿಯಾ ಅವರಿಗೆ ಜಾಮೀನು ನೀಡಿತ್ತು. ಈ ತೀರ್ಪುಗಳನ್ನು ಕವಿತಾ ಪರ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಜಾಮೀನು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

ಕವಿತಾ ತಮ್ಮ ಮೊಬೈಲ್ ಅನ್ನು ನಾಶಪಡಿಸಿದ್ದಾರೆ. ಜತೆಗೆ, ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಅವರಿಗೆ ಜಾಮೀನು ನೀಡುವುದು ಸೂಕ್ತವಲ್ಲ ಎಂದು ತನಿಖಾ ಸಂಸ್ಥೆಗಳ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಪ್ರತಿಪಾದಿಸಿದ್ದಾರೆ. ಆದರೆ, ರೋಹಟಗಿ ಅವರು ಕವಿತಾ ಮೇಲಿನ ಆರೋಪಗಳನ್ನು ಅಲ್ಲಗಳೆದಿದ್ದಾರೆ.

ಕವಿತಾ ವಿರುದ್ಧ ಪ್ರತ್ಯೇಕ ಭ್ರಷ್ಟಾಚಾರ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣಗಳನ್ನು ಇ.ಡಿ ಮತ್ತು ಸಿಬಿಐ ದಾಖಲಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮಾರ್ಚ್‌ 15ರಂದು ಇ.ಡಿ ಕವಿತಾ ಅವರನ್ನು ಬಂಧಿಸಿತ್ತು. ಇವರು ನ್ಯಾಯಾಂಗ ಬಂಧನದಲ್ಲಿ ಇದ್ದ ಅವಧಿಯಲ್ಲೇ ಏಪ್ರಿಲ್‌ 11ರಂದು ಸಿಬಿಐ ಬಂಧಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page