Wednesday, December 11, 2024

ಸತ್ಯ | ನ್ಯಾಯ |ಧರ್ಮ

ಕೋಲಾರ: ಮುರುಡೇಶ್ವರದಲ್ಲಿ ಸಮುದ್ರ ಪಾಲಾದ ಮಕ್ಕಳ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿಗಳ ಪರಿಹಾರವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಮಾಹಿತಿ ನೀಡಿರುವ ಅವರು “ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಹೋದ ಸಂದರ್ಭದಲ್ಲಿ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ನೀರುಪಾಲಾದ ಸುದ್ದಿ ತಿಳಿದು ಆಘಾತವಾಯಿತು. ಮೃತ ಮಕ್ಕಳ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮಕ್ಕಳ ದುಃಖತಪ್ತ ಪೋಷಕರಿಗೆ ನನ್ನ ಸಂತಾಪಗಳು.

ಈ ದುರ್ಘಟನೆಯಲ್ಲಿ ಮಡಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು. ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮೃತ ದೇಹಗಳನ್ನು ಹುಟ್ಟೂರಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಿದ್ದೇನೆ.

ಪ್ರವಾಸದ ಸಂದರ್ಭದಲ್ಲಿ ಶಿಕ್ಷಕರು ಮಕ್ಕಳ ಬಗ್ಗೆ ಹೆಚ್ಚು ಜಾಗೃತೆ ವಹಿಸಬೇಕು. ಅಪಾಯಕಾರಿ ಸ್ಥಳಗಳಿಗೆ ಭೇಟಿನೀಡುವಾಗ ಮಕ್ಕಳ ಮೇಲೆ ನಿಗಾ ಇಡಬೇಕು. ಮಕ್ಕಳನ್ನು ಕಳೆದುಕೊಂಡ ಹೆತ್ತವರ ನೋವು ಸಂಕಟವನ್ನು ನಾನು ಅರ್ಥೈಸಿಕೊಳ್ಳಬಲ್ಲೆ, ಇಂತಹ ಅವಘಡಗಳು ಮತ್ತೆಂದೂ ಸಂಭವಿಸದಿರಲಿ ಎಂದು ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊತ್ತನೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ನಿನ್ನೆ ಶೈಕ್ಷಣಿಕ ಪ್ರವಾಸಕ್ಕೆಂದು ಮುರುರುಡೇಶ್ವರಕ್ಕೆ ಬಂದಿದ್ದ ವೇಳೆ ಕಡಲ ತೀರದಲ್ಲಿ ಆಟವಾಡುವಾಗ ಅಲೆಗಳ ಅಬ್ಬರಕ್ಕೆ ಸಿಲುಕಿ ನಾಲ್ವರು ವಿದ್ಯಾರ್ಥಿನಿಯರು ನೀರುಪಾಲಾಗಿದ್ದರು.

ಓರ್ವ ವಿದ್ಯಾರ್ಥಿನಿ ಶ್ರವಂತಿ (15) ಶವವಾಗಿ ಪತ್ತೆಯಾಗಿದ್ದಾಳೆ. ಇನ್ನೂ ಮೂವರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದರು.

ನಂತರ ಈ ಮೂವರು ವಿದ್ಯಾರ್ಥಿಗಳಾದ ದೀಕ್ಷಾ ಜೆ(15), ಲಾವಣ್ಯ (15) ಹಾಗು ವಂದನಾ (15) ಮೃತದೇಹ ಬುಧವಾರ ಮುರುಡೇಶ್ವರದ ಸಮುದ್ರದಲ್ಲಿ ಪತ್ತೆಯಾಗಿದೆ.

ಕರಾವಳಿ ಕಾವಲು ಪೊಲೀಸ್ ಪಡೆ ಹಾಗೂ ಸ್ಥಳೀಯ ಮೀನುಗಾರರ ಸಹಾಯದಿಂದ ಬುಧವಾರ ಮುಂಜಾನೆಯಿಂದ ಮೃತದೇಹದ ಪತ್ತೆ ಕಾರ್ಯಾಚರಣೆ ಆರಂಭಿಸಲಾಗಿತ್ತು.

ಬೆಳಿಗ್ಗೆ 11.30ಕ್ಕೆ ಇಬ್ಬರು ವಿದ್ಯಾರ್ಥಿನಿಯರ ಮೃತದೇಹ ಆರದ.ಎನ್.ಎಸ್ ರೆಸಿಡೆನ್ಸಿ ಹಿಂಬದಿ ಕಲ್ಲುಬಂಡೆ ಸಮೀಪ ಪತ್ತೆಯಾದರೆ, ಇನ್ನೋರ್ವ ವಿದ್ಯಾರ್ಥಿನಿ ಮೃತದೇಹ ಪಕ್ಕದ ಗುಡ್ಡದ ಕೆಳಗಡೆ ಪತ್ತೆಯಾಗಿದೆ.

ಕರಾವಳಿ ಪೊಲೀಸ್ ಕಾವಲು ಪಡೆ ಸಿಪಿಐ ಕುಸುಮಧರಾ ಅವರ ನೇತ್ರತ್ವದಲ್ಲಿ ಪತ್ತೆ ಕಾರ್ಯ ನಡೆಸಲಾಗಿತ್ತು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page