Thursday, December 12, 2024

ಸತ್ಯ | ನ್ಯಾಯ |ಧರ್ಮ

ಮುರುಡೇಶ್ವರ ವಿದ್ಯಾರ್ಥಿನಿಯರ ದುರ್ಮರಣ ; 6 ಶಿಕ್ಷಕರ ಅಮಾನತು

ಮುರುಡೇಶ್ವರಕ್ಕೆ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ನಾಲ್ವರು ಮಕ್ಕಳ ದುರ್ಮರಣದ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯ ಮುಳಬಾಗಿಲು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 6 ಶಿಕ್ಷಕರನ್ನು ಅಮಾನತು ಮಾಡಿ ಸರ್ಕಾರ ಆದೇಶಿಸಿದೆ.

ಮೊರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳು ಮತ್ತು ಆರು ಶಿಕ್ಷಕರ ತಂಡ ಮಂಗಳವಾರ ತಮ್ಮ ಶಾಲಾ ಪ್ರವಾಸದ ಅಂಗವಾಗಿ ಮುರುಡೇಶ್ವರಕ್ಕೆ ತೆರಳಿತ್ತು.

ಪೊಲೀಸರ ಪ್ರಕಾರ, ಸಂಜೆ 5.30ರ ಸುಮಾರಿಗೆ ಶಿಕ್ಷಕರು, ವಿದ್ಯಾರ್ಥಿಗಳ ಜೊತೆಗೆ ಬೀಚ್‌ಗೆ ತೆರಳಿದರು. ಜೀವರಕ್ಷಕರ ಎಚ್ಚರಿಕೆಯ ಹೊರತಾಗಿಯೂ, ಏಳು ವಿದ್ಯಾರ್ಥಿಗಳು ಸಮುದ್ರದ ಅಲೆಗಳಿಗೆ ಸಿಕ್ಕಿ ಕೊಚ್ಚಿ ಹೋಗಿದ್ದರು. ಈ ವೇಳೆ ಮೂವರು ವಿದ್ಯಾರ್ಥಿಗಳನ್ನು ಜೀವರಕ್ಷಕರು ಮತ್ತು ಇತರ ಏಜೆನ್ಸಿಗಳ ಸಹಾಯದಿಂದ ರಕ್ಷಿಸಲಾಗಿತ್ತು. ಆದರೆ ನಾಲ್ವರು ಸಮುದ್ರ ಪಾಲಾಗಿದ್ದರು.

ಘಟನೆಗೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 106 (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಪ್ರಕರಣವನ್ನು ದಾಖಲಿಸಲಾಗಿದ್ದು ಎಲ್ಲಾ ಆರು ಶಿಕ್ಷಕರನ್ನು ಬಂಧಿಸಲಾಗಿದೆ ಎಂದು ಉತ್ತರ ಕನ್ನಡದ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಎಂ ತಿಳಿಸಿದ್ದಾರೆ.

ನಂತರ ಶಿಕ್ಷಕರನ್ನು ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಮೃತ ವಿದ್ಯಾರ್ಥಿನಿಯರನ್ನು 15 ವರ್ಷದ ಶ್ರವಂತಿ, ದೀಕ್ಷಾ, ಲಾವಣ್ಯ ಮತ್ತು ಲಿಪಿಕಾ ಎಂದು ಗುರುತಿಸಲಾಗಿದೆ. ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದ್ದು, ಮೃತದೇಹಗಳನ್ನು ಸ್ವಗ್ರಾಮಕ್ಕೆ ಕಳುಹಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page