Thursday, September 25, 2025

ಸತ್ಯ | ನ್ಯಾಯ |ಧರ್ಮ

ಮೈಸೂರಿನಲ್ಲಿ ಎಸ್.ಎಲ್.ಬೈರಪ್ಪನವರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರದ ಕ್ರಮ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಸೆಪ್ಟೆಂಬರ್ 25: ಪದ್ಮಭೂಷಣ ಎಸ್.ಎಲ್ ಬೈರಪ್ಪನವರು ಅವರ ನಿಧನದಿಂದ ಸಾರಸ್ವತ ಲೋಕ ಬಹಳ ಬಡವಾಗಿದೆ. ಬೈರಪ್ಪನವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪದ್ಮಭೂಷಣ ಹಿರಿಯ ಸಾಹಿತಿ ದಿವಂಗತ ಎಸ್.ಎಲ್.ಬೈರಪ್ಪನವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬೈರಪ್ಪನವರ ಕಾದಂಬರಿಗಳು ಜಗತ್ಪ್ರಸಿದ್ಧ

ಎಸ್.ಎಲ್ ಬೈರಪ್ಪನವರು ಅವರ ನಿಧನದಿಂದ ಸಾರಸ್ವತ ಲೋಕ ಬಹಳ ಬಡವಾಗಿದೆ. ಅವರು ಸುಮಾರು 25 ಕಾದಂಬರಿಗಳನ್ನು ಬರೆದಿದ್ದು, ಮೈಸೂರಿನಲ್ಲಿಯೇ ವಿದ್ಯಾಭ್ಯಾಸ ನಡೆಸಿದ ಬೈರಪ್ಪನವರಿಗೆ ಮೈಸೂರು ಕರ್ಮಸ್ಥಳ. ಅವರ ಕಾದಂಬರಿಗಳು 40 ಭಾಷೆಗಳಿಗೆ ತರ್ಜುಮೆಯಾಗಿದ್ದು, ಇಷ್ಟು ಸಂಖ್ಯೆಯಲ್ಲಿ ಸಾಹಿತಿಯೊಬ್ಬರ ಕೃತಿಗಳು ತರ್ಜುಮೆಯಾಗಿರುವುದು ಅಪರೂಪ. ವಿವಿಧ ಭಾಷೆಗಳ ಓದುಗರನ್ನು ಸಂಪಾದಿಸಿದ್ದರು. ಸಣ್ಣ ಗ್ರಾಮವೊಂದರಲ್ಲಿ ಜನಿಸಿದ ಬೈರಪ್ಪನವರು , ಫಿಲಾಸಫಿಯನ್ನು ಓದಿದ್ದರೂ, ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಂಡವರು ಎಂದರು.

ಬದುಕಿನ ಅನುಭವಗಳನ್ನಾಧರಿಸಿ ಬರೆಯುವ ಸಾಹಿತಿ

ಬೋಧನಾ ವೃತ್ತಿಯಲ್ಲಿದ್ದುಕೊಂಡು ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನೂ ತೊಡಗಿಸಿಕೊಂಡಿದ್ದರು. ಕಾದಂಬರಿಗಳನ್ನು ಆತ್ಮತೃಪ್ತಿಗಾಗಿ ಬರೆಯುತ್ತಿದ್ದ ಅವರ ಕೃತಿಗಳು ಜಗತ್ಪ್ರಸಿದ್ಧವಾಗಿದ್ದವು. ನಾನು ಅವರ ಕೆಲವೊಂದು ಕಾದಂಬರಿಗಳನ್ನು ಓದಿದ್ದೇನೆ. ಬದುಕಿನ ಅನುಭವಗಳನ್ನಾಧರಿಸಿ ಬರೆಯುವ ಸಾಹಿತಿ. ಅವರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರು, ಸಾಹಿತ್ಯಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಭರಿಸಲು ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.

ಮೈಸೂರಿನಲ್ಲಿ ಸ್ಮಾರಕ

ಎಸ್.ಎಲ್.ಬೈರಪ್ಪನವರ ಸ್ಮಾರಕ ನಿರ್ಮಾಣದ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಹೇಳಿದರೆಂದು ಸ್ಮಾರಕ ನಿರ್ಮಿಸುವುದಿಲ್ಲ. ಮೈಸೂರಿನಲ್ಲಿಯೇ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು. ಮೈಸೂರಿನಲ್ಲಿಯೇ ತಮ್ಮ ಜೀವಿತಾವಧಿಯನ್ನು ಕಳೆದಿದ್ದು, ವಿದ್ಯಾಭ್ಯಾಸ, ಸಾಹಿತ್ಯಕೃಷಿಯಲ್ಲಿ ನಡೆಸಿದ್ದರು ಎಂದರು.

ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಬೈರಪ್ಪನವರೊಂದಿಗೆ ಮುಖ್ಯಮಂತ್ರಿಗಳ ಒಡನಾಟದ ಬಗ್ಗೆ ಪ್ರತಿಕ್ರಿಯೆ ನೀಡಿ, ಸಾಹಿತ್ಯ ಹಾಗೂ ಸ್ನೇಹ ಬೇರೆಯಾಗಿದ್ದು, ನಮ್ಮ ದೃಷ್ಟಿಕೋನಗಳು ಬೇರೆಯಾಗಿದ್ದರೂ, ಉತ್ತಮ ಬಾಂಧವ್ಯವಿತ್ತು ಎಂದರು. ಬೈರಪ್ಪನವರ ಅಂತ್ಯಕ್ರಿಯೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಭಾಗವಹಿಸಲಿದ್ದಾರೆ. ವಿವಿಧ ಪ್ರಶಸ್ತಿಗಳಿಗೆ ಭಾಜನರಾಗಿರುವ ಬೈರಪ್ಪನವರು ನಾಡು ಕಂಡ ಶ್ರೇಷ್ಠ ಸಾಹಿತಿಗಳಾಗಿದ್ದರು. ಯಾವುದೇ ಪ್ರಶಸ್ತಿಗೂ ಹಂಬಲಿಸದ ಬೈರಪ್ಪನವರಿಗೆ ಅವರ ಸಾಹಿತ್ಯದ ಕೊಡುಗೆಯನ್ನು ಪರಿಗಣಿಸಿ, ಕೇಂದ್ರ ಸರ್ಕಾರ ಜ್ಞಾನಪೀಠ ಪ್ರಶಸ್ತಿಯನ್ನು ನೀಡಿದ್ದರೆ ಉತ್ತಮವಾಗಿತ್ತು ಎಂದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page