Wednesday, December 17, 2025

ಸತ್ಯ | ನ್ಯಾಯ |ಧರ್ಮ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಮೋದಿ, ಅಮಿತ್ ಶಾ ರಾಜೀನಾಮೆ ನೀಡಬೇಕು – ಖರ್ಗೆ ಆಗ್ರಹ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಚಾರ್ಜ್‌ಶೀಟ್ ಅನ್ನು ಸ್ವೀಕರಿಸಲು ದೆಹಲಿ ನ್ಯಾಯಾಲಯವು ಮಂಗಳವಾರ ನಿರಾಕರಿಸಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಎಂದು ಬುಧವಾರ ಆಗ್ರಹಿಸಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಖರ್ಗೆ ಅವರು, ನ್ಯಾಷನಲ್ ಹೆರಾಲ್ಡ್ ಪ್ರಕರಣದ ಏಕೈಕ ಉದ್ದೇಶ ಗಾಂಧಿ ಕುಟುಂಬವನ್ನು ಪೀಡಿಸುವುದಾಗಿದೆ ಎಂದು ಕಿಡಿಕಾರಿದರು. ಕೇವಲ ರಾಜಕೀಯ ಸೇಡಿನ ದೃಷ್ಟಿಕೋನದಿಂದ ಈ ಚಾರ್ಜ್‌ಶೀಟ್ ಸಲ್ಲಿಸಲಾಗಿದ್ದು, ನ್ಯಾಯಾಲಯದ ಈ ನಿರ್ಧಾರವು ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರಿಗೆ ಬಿದ್ದಿರುವ ಕಪಾಳಮೋಕ್ಷದಂತಿದೆ. ಭವಿಷ್ಯದಲ್ಲಿ ಜನರನ್ನು ಹೀಗೆ ಅನಗತ್ಯವಾಗಿ ಪೀಡಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿ ಅವರು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಸಂಪೂರ್ಣ ಸುಳ್ಳು ಪ್ರಕರಣ ಎಂದು ಬಣ್ಣಿಸಿದ ಖರ್ಗೆ, ಇದನ್ನು ಕೇವಲ ದುರುದ್ದೇಶದಿಂದ ಮುಂದುವರಿಸಲಾಗುತ್ತಿದೆ ಎಂದು ಆರೋಪಿಸಿದರು. 1938ರಲ್ಲಿ ಸ್ವಾತಂತ್ರ್ಯ ಹೋರಾಟಗಾರರು ಪ್ರಾರಂಭಿಸಿದ ಈ ಪತ್ರಿಕೆಯನ್ನು ಬಿಜೆಪಿ ಸರ್ಕಾರವು ಈಗ ಮನಿ ಲಾಂಡರಿಂಗ್‌ನಂತಹ ವಿಷಯಗಳಿಗೆ ತಳುಕು ಹಾಕಿ ಅಪಪ್ರಚಾರ ಮಾಡಲು ಯತ್ನಿಸುತ್ತಿದೆ. ಆದರೆ ಸತ್ಯವೇನೆಂದರೆ ಈ ಪ್ರಕರಣದಲ್ಲಿ ಏನೂ ಇಲ್ಲ ಎಂದು ಅವರು ಹೇಳಿದರು.

ಕಾಂಗ್ರೆಸ್ ಪಕ್ಷದ ನಾಯಕರನ್ನು ಹಣಿಯಲು ಬಿಜೆಪಿ ಈ ಪ್ರಕರಣವನ್ನು ದೊಡ್ಡ ಸಮಸ್ಯೆಯನ್ನಾಗಿ ಮಾಡಲು ಪ್ರಯತ್ನಿಸುತ್ತಿದೆ ಎಂದು ಖರ್ಗೆ ಧ್ವಜವೆತ್ತಿದರು. ಪ್ರಸ್ತುತ ಬಿಜೆಪಿ ಸರ್ಕಾರವು ರಾಜಕೀಯ ಲಾಭಕ್ಕಾಗಿ ಪ್ರತಿಪಕ್ಷ ನಾಯಕರನ್ನು ಗುರಿಯಾಗಿಸಿಕೊಂಡು ಇಡಿ ಮೂಲಕ ಪ್ರಕರಣಗಳನ್ನು ದಾಖಲಿಸುತ್ತಿದೆ. ಆದರೆ ದೆಹಲಿ ನ್ಯಾಯಾಲಯದ ನಿರ್ಧಾರದಿಂದ ನ್ಯಾಯಕ್ಕೆ ಜಯ ಸಿಕ್ಕಿದೆ ಮತ್ತು ಸತ್ಯ ಗೆದ್ದಿದೆ. ಈ ತೀರ್ಪನ್ನು ನಾವು ಹೃದಯಪೂರ್ವಕವಾಗಿ ಸ್ವಾಗತಿಸುತ್ತೇವೆ ಎಂದು ಖರ್ಗೆ ತಿಳಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page