Saturday, January 31, 2026

ಸತ್ಯ | ನ್ಯಾಯ |ಧರ್ಮ

ಹಾಸನದ ಕುಖ್ಯಾತ ಕಳ್ಳತನ ಆರೋಪಿಯನ್ನು ಬಂಧಿಸಿದ ಮಂಗಳೂರು ಪೊಲೀಸರು

ಮಂಗಳೂರು : ಮಂಗಳೂರು ನಗರದ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬ್ಯಾಗ್ ಕಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು ಅಂತರ್ ಜಿಲ್ಲೆ ಮಟ್ಟದಲ್ಲಿ ಸಕ್ರಿಯವಾಗಿದ್ದ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಸ್ ನಿಲ್ದಾಣಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಮಡಿಕೇರಿ ಮೂಲದ ಮಹಮ್ಮದ್ ಇಮ್ರಾನ್ ಎನ್.ಎಂ ಎಂಬ ಆರೋಪಿಯನ್ನು ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದ ಬಳಿ ಬಂಧಿಸಲಾಗಿದೆ.

ಜನವರಿ 23ರಂದು ಸಂಜೆ ವೇಳೆ ಬಿಜೈ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಬೆಂಗಳೂರಿಗೆ ತೆರಳಲು ಬಸ್ಸಿನಲ್ಲಿ ಕೂತಿದ್ದ ಇಬ್ಬರು ಮಹಿಳೆಯರು ಹಾಗೂ ಹಿರಿಯ ನಾಗರಿಕರ ಬಳಿಯಿದ್ದ ಟ್ರಾಲಿ ಬ್ಯಾಗ್ ಕಳ್ಳತನವಾಗಿತ್ತು. ಆ ಬ್ಯಾಗ್‌ನಲ್ಲಿ ಸುಮಾರು 45 ಗ್ರಾಂ ಚಿನ್ನಾಭರಣ ಮತ್ತು 20 ಸಾವಿರ ರೂ. ನಗದು ಇದ್ದುದಾಗಿ ದೂರಿನಲ್ಲಿ ತಿಳಿಸಲಾಗಿತ್ತು. ಈ ಸಂಬಂಧ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದರು. ಪ್ರಕರಣದ ಪತ್ತೆಗೆ ವಿಶೇಷ ತಂಡ ರಚಿಸಿ ಸಿಸಿಟಿವಿ ದೃಶ್ಯಗಳು ಹಾಗೂ ಇತರ ಸುಳಿವುಗಳ ಆಧಾರದಲ್ಲಿ ಆರೋಪಿಯನ್ನು ಶೋಧಿಸಲಾಯಿತು. ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ತನಿಖಾಧಿಕಾರಿ ವಿನಾಯಕ ತೊರಗಲ್ ಮತ್ತು ಸಿಬ್ಬಂದಿ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಜನವರಿ 28ರಂದು ಆರೋಪಿಯನ್ನು ವಶಕ್ಕೆ ಪಡೆಯಲಾಯಿತು.

ಬಂಧಿತನಿಂದ ಒಟ್ಟು 6,47,920 ರೂ. ಮೌಲ್ಯದ 46.28 ಗ್ರಾಂ ಚಿನ್ನಾಭರಣ ಮತ್ತು 5 ಸಾವಿರ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಜನವರಿ 29ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆರೋಪಿಯು ಬಸ್ ನಿಲ್ದಾಣಗಳಲ್ಲಿ ಬೆಲೆಬಾಳುವ ಸಾಮಾನುಗಳಿರುವ ಬ್ಯಾಗ್‌ಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ರೂಢಿಗತ ಅಪರಾಧಿಯಾಗಿದ್ದು, ಅವನ ವಿರುದ್ಧ ವಿವಿಧ ಜಿಲ್ಲೆಗಳಲ್ಲಿ ಒಟ್ಟು 11 ಪ್ರಕರಣಗಳು ದಾಖಲಾಗಿವೆ. ದುದ್ದ, ಕೊಣನೂರು, ಹಾಸನ ನಗರ, ಹಾಸನ ಬಡಾವಣೆ, ಚನ್ನರಾಯಪಟ್ಟಣ ಹಾಗೂ ಮೈಸೂರು ದೇವರಾಜ ನಗರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬ್ಯಾಗ್ ಕಳ್ಳತನ ಪ್ರಕರಣಗಳು ಹಾಗೂ ಹಾಸನ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಮನೆ ಕಳ್ಳತನ ಪ್ರಕರಣಗಳೂ ದಾಖಲಾಗಿವೆ.

ಇನ್ನೂ ಹಾಸನ ಜಿಲ್ಲೆಯ ಮನೆ ಕಳ್ಳತನ ಪ್ರಕರಣವೊಂದರಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡಿದ್ದರಿಂದ ಆರೋಪಿಯ ವಿರುದ್ಧ ವಾರಂಟ್ ಕೂಡ ಹೊರಡಿಸಲಾಗಿತ್ತು. ಇದೀಗ ಬಂಧನವಾಗಿರುವುದರಿಂದ ಹಳೆಯ ಪ್ರಕರಣಗಳ ತನಿಖೆಯೂ ವೇಗ ಪಡೆಯುವ ಸಾಧ್ಯತೆ ಇದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page