Sunday, March 15, 2026

ಸತ್ಯ | ನ್ಯಾಯ |ಧರ್ಮ

ಬಾಗಲಕೋಟೆ–ದಾವಣಗೆರೆ ದಕ್ಷಿಣ ಉಪಚುನಾವಣೆ ಘೋಷಣೆ: ಏಪ್ರಿಲ್‌ 9 ಮತದಾನ, ಮೇ 4ಕ್ಕೆ ಫಲಿತಾಂಶ

ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿರುವ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಿಸಿದೆ. ಏಪ್ರಿಲ್‌ 9ರಂದು ಮತದಾನ ನಡೆಯಲಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಹಿಂದಿನ ಶಾಸಕರಾದ ಎಚ್‌.ವೈ. ಮೇಟಿ ಮತ್ತು ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳು ತೆರವಾಗಿದ್ದು, ಈ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆಯಲಿದೆ. ದಿನಾಂಕ ಪ್ರಕಟವಾಗುತ್ತಿದ್ದಂತೆಯೇ ರಾಜಕೀಯ ಪಕ್ಷಗಳು ಸಿದ್ಧತೆಗಳನ್ನು ವೇಗಗೊಳಿಸಿದ್ದು, ಎರಡೂ ಕ್ಷೇತ್ರಗಳಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ.

ಈ ಮಧ್ಯೆ, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳಲ್ಲಿ ಟಿಕೆಟ್‌ಗಾಗಿ ಪ್ರಮುಖ ಪಕ್ಷಗಳಲ್ಲಿ ಪೈಪೋಟಿ ಜೋರಾಗಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೆಂದು ಕಾಂಗ್ರೆಸ್‌ನ ಕೆಲವು ಮುಸ್ಲಿಂ ಮುಖಂಡರು ಒತ್ತಾಯಿಸುತ್ತಿದ್ದಾರೆ. ಆದರೆ ಈ ಪ್ರಸ್ತಾಪಕ್ಕೆ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ ವಿರೋಧ ವ್ಯಕ್ತಪಡಿಸಿರುವುದರಿಂದ ಪಕ್ಷದೊಳಗಿನ ಚರ್ಚೆಗಳು ಹೆಚ್ಚಾಗಿವೆ.

ಇನ್ನೊಂದೆಡೆ ಬಿಜೆಪಿಯಲ್ಲೂ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್‌ ವಿಚಾರದಲ್ಲಿ ಭಿನ್ನಾಭಿಪ್ರಾಯಗಳು ಕಾಣಿಸಿಕೊಂಡಿವೆ. ಮಾಜಿ ಸಂಸದ ಜಿ.ಎಸ್‌. ಸಿದ್ದೇಶ್ವರ ಹಾಗೂ ಶಾಸಕ ಎಂ.ಪಿ. ರೇಣುಕಾಚಾರ್ಯ ಬೆಂಬಲಿಗರ ನಡುವೆ ಟಿಕೆಟ್‌ಗಾಗಿ ಪೈಪೋಟಿ ನಡೆಯುತ್ತಿದೆ. ಈ ಹಿನ್ನೆಲೆ ಎರಡೂ ಬಣಗಳು ಪ್ರತ್ಯೇಕ ಸಭೆಗಳನ್ನು ನಡೆಸಿದ್ದು, ಒಳಗೊಳಗಿನ ಭಿನ್ನಮತ ಸ್ಪಷ್ಟವಾಗಿದೆ.

ಈ ಭಿನ್ನಾಭಿಪ್ರಾಯ ಶಮನಗೊಳಿಸುವ ಉದ್ದೇಶದಿಂದ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಅಗರವಾಲ್ ಜಿಲ್ಲೆಗೆ ಭೇಟಿ ನೀಡಿ ಪಕ್ಷದ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದಾರೆ. ಉಪಚುನಾವಣೆ ಘೋಷಣೆಯೊಂದಿಗೆ ಈ ಎರಡೂ ಕ್ಷೇತ್ರಗಳಲ್ಲಿ ರಾಜಕೀಯ ಚಟುವಟಿಕೆಗಳು ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page