ಆಂಧ್ರಪ್ರದೇಶ: ಮಾರ್ಕಾಪುರಂ ಸಮೀಪ ಭೀಕರ ಬಸ್ ಅಪಘಾತ: 14 ಮಂದಿ ಸಜೀವ ದಹನ, ಅನೇಕರು ಗಂಭೀರ ಗಾಯ

ಆಂಧ್ರಪ್ರದೇಶದ ಮಾರ್ಕಾಪುರಂ ಸಮೀಪದ ರಾಯವರಂ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 14 ಮಂದಿ ಸಜೀವ ದಹನಗೊಂಡು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಇನ್ನೂ 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಹಲವರ ಸ್ಥಿತಿ ಆತಂಕಕಾರಿ ಎಂದು ತಿಳಿದುಬಂದಿದೆ.

ಹೈದರಾಬಾದ್‌ನಿಂದ ಪಾಮೂರು ಕಡೆಗೆ ತೆರಳುತ್ತಿದ್ದ ‘ಹರೇ ಕೃಷ್ಣ ಟ್ರಾವೆಲ್ಸ್’ಗೆ ಸೇರಿದ ಖಾಸಗಿ ಬಸ್, ಸ್ಲೇಟ್ ಕ್ವಾರಿ ಪ್ರದೇಶದ ಬಳಿ ಟಿಪ್ಪರ್ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬಸ್‌ನಲ್ಲಿ ತಕ್ಷಣವೇ ಬೆಂಕಿ ಕಾಣಿಸಿಕೊಂಡು, ಕೆಲವೇ ನಿಮಿಷಗಳಲ್ಲಿ ಸಂಪೂರ್ಣವಾಗಿ ಅಗ್ನಿಗಾಹುತಿಯಾಗಿದೆ.

ಅಪಘಾತದ ವೇಳೆ ಬಸ್‌ನಲ್ಲಿ ಸುಮಾರು 30 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದ್ದು, ಬೆಂಕಿ ಆವರಿಸಿದ ಕ್ಷಣದಲ್ಲೇ 14 ಮಂದಿ ಪ್ರಯಾಣಿಕರು ಹೊರಬಂದು ಜೀವ ಉಳಿಸಿಕೊಂಡಿದ್ದಾರೆ. ಉಳಿದವರು ಬೆಂಕಿಯಲ್ಲಿ ಸಿಲುಕಿ ದುರ್ಘಟನೆಗೆ ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತಪಟ್ಟವರು ಕನಿಗಿರಿ ಮತ್ತು ಪಾಮೂರು ಪ್ರದೇಶದ ನಿವಾಸಿಗಳಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಮಾರ್ಕಾಪುರಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿರುವುದರಿಂದ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಭೀತಿ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಮೂರು ಅಗ್ನಿಶಾಮಕ ವಾಹನಗಳು ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿವೆ. ಇನ್ನೂ ಕೆಲ ಕಾಲ ಬಸ್ ಮತ್ತು ಟಿಪ್ಪರ್ ಬೆಂಕಿಯ ಕೆನ್ನಾಲಿಗೆಯಲ್ಲಿ ಸಿಲುಕಿದ್ದವು ಎಂದು ಸ್ಥಳೀಯರು ತಿಳಿಸಿದ್ದಾರೆ.

ಈ ನಡುವೆ, ಸ್ಥಳೀಯ ಶಾಸಕ ಕಂದುಲ ನಾರಾಯಣರೆಡ್ಡಿ ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ನಿಖರ ಕಾರಣಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದ ಅವರು, ಗಾಯಾಳುಗಳಿಗೆ ತಕ್ಷಣ ಸೂಕ್ತ ಚಿಕಿತ್ಸೆ ಒದಗಿಸುವಂತೆ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ವೇಗಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು