ಚುನಾವಣಾ ಆಯುಕ್ತರ ನೇಮಕಾತಿಯಲ್ಲಿ ಪಾರದರ್ಶಕತೆ ಎಲ್ಲಿದೆ? ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರ ನೇಮಕಾತಿ ಸಮಿತಿಯಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು (CJI) ಸೇರಿಸದಿರುವ ಕುರಿತು ಸುಪ್ರೀಂ ಕೋರ್ಟ್ ಗುರುವಾರ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. “ಸಿಬಿಐ ನಿರ್ದೇಶಕರನ್ನು ಆಯ್ಕೆ ಮಾಡುವ ಸಮಿತಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳು ಇರಬಹುದಾದರೆ, ಪ್ರಜಾಪ್ರಭುತ್ವದ ಬೆನ್ನೆಲುಬಾದ ಚುನಾವಣಾ ಪ್ರಕ್ರಿಯೆಯನ್ನು ನಿರ್ವಹಿಸುವವರನ್ನು ಆಯ್ಕೆ ಮಾಡುವ ಸಮಿತಿಯಲ್ಲಿ ಅವರೇಕೆ ಇರಬಾರದು?” ಎಂದು ನ್ಯಾಯಮೂರ್ತಿ ದೀಪಂಕರ್ ದತ್ತಾ ನೇತೃತ್ವದ ಪೀಠ ಪ್ರಶ್ನಿಸಿದೆ.

ನೇಮಕಾತಿ ಸಮಿತಿಯಲ್ಲಿ ಪ್ರಧಾನ ಮಂತ್ರಿಗಳು, ವಿರೋಧ ಪಕ್ಷದ ನಾಯಕರು ಮತ್ತು ಒಬ್ಬ ಕೇಂದ್ರ ಸಚಿವರು ಇರುವುದನ್ನು ಪ್ರಸ್ತಾಪಿಸಿದ ನ್ಯಾಯಾಲಯವು, ಈ ಪ್ರಕ್ರಿಯೆಯಲ್ಲಿ ಕಾರ್ಯಾಂಗದ ‘ವೀಟೋ’ ಅಧಿಕಾರದ ಬಗ್ಗೆ ಕಳವಳ ವ್ಯಕ್ತಪಡಿಸಿದೆ. “ಪ್ರಧಾನ ಮಂತ್ರಿಗಳು ಒಬ್ಬರನ್ನು ಮತ್ತು ವಿರೋಧ ಪಕ್ಷದ ನಾಯಕರು ಮತ್ತೊಬ್ಬರನ್ನು ಸೂಚಿಸಿದಾಗ, ಮೂರನೇ ಸದಸ್ಯರಾದ ಕ್ಯಾಬಿನೆಟ್ ಸಚಿವರು ತಮ್ಮ ಪ್ರಧಾನಿಗಳ ವಿರುದ್ಧ ಹೋಗಲು ಸಾಧ್ಯವೇ? ಅಂತಿಮವಾಗಿ ಇದು 2:1 ಮೆಜಾರಿಟಿಯೊಂದಿಗೆ ಸರ್ಕಾರದ ನಿರ್ಧಾರವೇ ಆಗುವುದಿಲ್ಲವೇ?” ಎಂದು ನ್ಯಾಯಮೂರ್ತಿಗಳು ಕೇಳಿದ್ದಾರೆ.

ಪ್ರಜಾಪ್ರಭುತ್ವವನ್ನು ಉಳಿಸಲು ಮತ್ತು ನಿಷ್ಪಕ್ಷಪಾತ ಚುನಾವಣೆಗಳನ್ನು ನಡೆಸಲು ಸಮಿತಿಯಲ್ಲಿ ಒಬ್ಬ ಸ್ವತಂತ್ರ ಸದಸ್ಯರು ಇರುವುದು ಅಗತ್ಯವಲ್ಲವೇ ಎಂದು ನ್ಯಾಯಾಲಯ ಪ್ರಶ್ನಿಸಿದೆ. ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರು ಸರ್ಕಾರದ ಪರವಾಗಿ ವಾದ ಮಂಡಿಸುತ್ತಾ, ಪ್ರಾಯೋಗಿಕವಾಗಿ ಪರಿಸ್ಥಿತಿ ಹೀಗಿರಲಿಕ್ಕಿಲ್ಲ ಎಂದು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದಾಗ, “ಎಲ್ಲವನ್ನೂ ಕಾರ್ಯಾಂಗವೇ ನಿಯಂತ್ರಿಸುತ್ತಿದೆ” ಎಂದು ನ್ಯಾಯಮೂರ್ತಿ ದತ್ತಾ ಎದುರೇಟು ನೀಡಿದರು. ಕಾನೂನು ರೂಪಿಸುವ ಅಧಿಕಾರ ಸಂಸತ್ತಿಗೆ ಇದ್ದರೂ, ಆ ಕಾನೂನುಗಳನ್ನು ವಿಶ್ಲೇಷಿಸುವ ಮತ್ತು ವ್ಯಾಖ್ಯಾನಿಸುವ ಅಂತಿಮ ಅಧಿಕಾರ ಸುಪ್ರೀಂ ಕೋರ್ಟ್‌ಗೆ ಇದೆ ಎಂದು ಪೀಠ ಸ್ಪಷ್ಟಪಡಿಸಿದೆ.

ಶಬರಿಮಲೆ ಪ್ರಕರಣದ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್: ಇದೇ ವೇಳೆ, ಕೇರಳದ ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಸೇರಿದಂತೆ ವಿವಿಧ ಧರ್ಮಗಳ ಧಾರ್ಮಿಕ ಸ್ವಾತಂತ್ರ್ಯ ಮತ್ತು ತಾರತಮ್ಯಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಒಂಬತ್ತು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ಪೂರ್ಣಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು ಸತತ 16 ದಿನಗಳ ಕಾಲ ವಾದ-ಪ್ರತಿವಾದಗಳನ್ನು ಆಲಿಸಿದ ನಂತರ ತೀರ್ಪನ್ನು ಗುರುವಾರ ಕಾಯ್ದಿರಿಸಿದೆ (Reserve).

ಸೊಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ಹಲವು ಹಿರಿಯ ವಕೀಲರು ಈ ಪ್ರಕರಣದಲ್ಲಿ ವಾದ ಮಂಡಿಸಿದ್ದಾರೆ. ಋತುಸ್ರಾವದ ವಯಸ್ಸಿನ ಮಹಿಳೆಯರ ಪ್ರವೇಶದ ಮೇಲಿನ ನಿಷೇಧವು ಧಾರ್ಮಿಕ ನಂಬಿಕೆ ಮತ್ತು ಸ್ವಾಯತ್ತತೆಗೆ ಸಂಬಂಧಿಸಿದ ವಿಷಯವಾಗಿದ್ದು, ಇದು ನ್ಯಾಯಾಂಗ ವಿಮರ್ಶೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಕೇಂದ್ರ ಸರ್ಕಾರವು ಲಿಖಿತ ಮೂಲಕ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಈ ಬಹುನಿರೀಕ್ಷಿತ ತೀರ್ಪು ಮುಂದಿನ ದಿನಗಳಲ್ಲಿ ಹೊರಬೀಳಲಿದೆ.


Related Articles

ಇತ್ತೀಚಿನ ಸುದ್ದಿಗಳು