ಧರ್ಮೇಂದ್ರ ಪ್ರಧಾನ್‌ ವಿಷಯದಲ್ಲಿ ರಾಜಿಯೇ ಇಲ್ಲ, ಸರ್ಕಾರ ಒಂದು ದಿನದ ಕಾಲಾವಕಾಶ ಕೇಳಿದೆ: ನಡ್ಡಾ ಭೇಟಿ ಬಳಿಕ ಮಾಹಿತಿ ನೀಡಿದ ಸಿಜೆಪಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣವೇ ರಾಜೀನಾಮೆ ನೀಡಬೇಕು ಎಂಬ ತಮ್ಮ ಮುಖ್ಯ ಬೇಡಿಕೆಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸೋಷಿಯಲ್ ಮೀಡಿಯಾ ಒಕ್ಕೂಟ ಹಾಗೂ ರಾಜಕೀಯ ಸಂಘಟನೆ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಕೇಂದ್ರ ಸಚಿವರಿಗೆ ಸ್ಪಷ್ಟಪಡಿಸಿದೆ.

ಕೇಂದ್ರ ಸರ್ಕಾರದ ಪ್ರತಿನಿಧಿಗಳು ಶುಕ್ರವಾರ ದೆಹಲಿಯ ‘ಕಾನ್‌ಸ್ಟಿಟ್ಯೂಷನ್ ಕ್ಲಬ್ ಆಫ್ ಇಂಡಿಯಾ’ದ ವಿಠಲ ಭಾಯಿ ಪಟೇಲ್ ಹೌಸ್‌ನಲ್ಲಿ ಸಿಜೆಪಿ ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಸಭೆಯಲ್ಲಿ ಸಿಜೆಪಿ ಪರವಾಗಿ ಪ್ರಧಾನ ವಕ್ತಾರ ಸೌರವ್ ದಾಸ್ ಹಾಗೂ ರಾಷ್ಟ್ರೀಯ ವಕ್ತಾರ ಅಶುತೋಷ್ ರಾಂಕಾ ಭಾಗವಹಿಸಿದ್ದರು. ಕೇಂದ್ರ ಸರ್ಕಾರದ ಪರವಾಗಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಮತ್ತು ಪ್ರಧಾನಿ ಕಚೇರಿಯ (ಪಿಎಂಒ) ರಾಜ್ಯ ಸಚಿವ ಜಿತೇಂದ್ರ ಸಿಂಗ್ ಪಾಲ್ಗೊಂಡಿದ್ದರು.

ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಜೆಪಿ ವಕ್ತಾರ ಸೌರವ್ ದಾಸ್, ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ವಿಚಾರದಲ್ಲಿ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದೇವೆ ಎಂದರು. ಇದರ ಜೊತೆಗೆ ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಹಾಗೂ ಪ್ರತಿಭಟನಾ ನಿರತರ ಮೇಲೆ ದಾಖಲಾಗಿರುವ ಎಲ್ಲಾ ಎಫ್‌ಐಆರ್‌ಗಳನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದೇವೆ ಎಂದು ಮಾಹಿತಿ ನೀಡಿದರು.

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಬೇಡಿಕೆ ಕುರಿತು ನಿರ್ಧಾರ ಕೈಗೊಳ್ಳಲು ಕೇಂದ್ರ ಸರ್ಕಾರವು ಒಂದು ದಿನದ ಕಾಲಾವಕಾಶ ಕೇಳಿದೆ ಎಂದು ತಿಳಿಸಿದ ಸಿಜೆಪಿ ನಾಯಕರು, ಉಳಿದ ಎರಡು ಬೇಡಿಕೆಗಳಿಗೆ ಸರ್ಕಾರ ಧನಾತ್ಮಕವಾಗಿ ಸ್ಪಂದಿಸಿದೆ ಎಂದಿದ್ದಾರೆ.

ಇನ್ನೊಂದೆಡೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಜೆ.ಪಿ. ನಡ್ಡಾ, ಶನಿವಾರ ಮತ್ತೊಮ್ಮೆ ಸಿಜೆಪಿ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಮುಂದಿನ ಹಂತದ ಮಾತುಕತೆ ಮುಂದುವರಿಸಲಾಗುವುದು ಎಂದು ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು