ಅರಣ್ಯ ಪ್ರದೇಶದ ಶೂಟೌಟ್‌ ಪ್ರಕರಣಗಳನ್ನು ರಾಜಕೀಯಗೊಳಿಸಬೇಡಿ: ರಾಮಲಿಂಗಾರೆಡ್ಡಿ

ಬೆಂಗಳೂರು: ಅರಣ್ಯ ಪ್ರದೇಶಗಳಲ್ಲಿ ನಡೆಯುವ ಗುಂಡಿನ ಚಕಮಕಿ ಪ್ರಕರಣಗಳನ್ನು ರಾಜಕೀಯ ಆರೋಪ-ಪ್ರತ್ಯಾರೋಪಗಳಿಗೆ ಬಳಸಬಾರದು. ಅರಣ್ಯ ಅಧಿಕಾರಿಗಳ ತಪ್ಪು ಸಾಬೀತಾದರೆ ಅವರ ವಿರುದ್ಧವೂ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅರಣ್ಯ ಪ್ರದೇಶಗಳಲ್ಲಿ ಈ ಹಿಂದೆಯೂ ಹಲವು ಬಾರಿ ಶೂಟೌಟ್‌ ಪ್ರಕರಣಗಳು ನಡೆದಿವೆ. 2011ರಿಂದ 2026ರವರೆಗೆ ಚಾಮರಾಜನಗರ ಅರಣ್ಯ ವಿಭಾಗವೊಂದರಲ್ಲೇ 300ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಸುಮಾರು 66 ಬಾರಿ ಗುಂಡಿನ ಚಕಮಕಿ ನಡೆದಿದೆ ಎಂದು ತಿಳಿಸಿದರು.

ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲೂ ನಾಲ್ಕು ಶೂಟೌಟ್‌ ಪ್ರಕರಣಗಳು ನಡೆದಿದ್ದು, ಮೂರು ಮಂದಿ ಮೃತಪಟ್ಟಿದ್ದರು ಎಂದು ಸಚಿವರು ಹೇಳಿದರು. ಹೀಗಾಗಿ ಇಂತಹ ಘಟನೆಗಳು ಹಿಂದಿನಿಂದಲೂ ನಡೆಯುತ್ತಿದ್ದು, ಪ್ರಸ್ತುತ ಪ್ರಕರಣವನ್ನು ಮಾತ್ರ ರಾಜಕೀಯ ದೃಷ್ಟಿಕೋನದಿಂದ ನೋಡುವುದು ಸರಿಯಲ್ಲ ಎಂದರು.

ಚಾಮರಾಜನಗರದಲ್ಲಿ ಕಳ್ಳಬೇಟೆ ತಡೆ ಶಿಬಿರಗಳಿಗೆ ಸಂಬಂಧಿಸಿದಂತೆ ಕೆಲವು ಮನೆಗಳಿಗೆ ಹಾನಿಯಾಗಿರುವ ಬಗ್ಗೆಯೂ ಪ್ರತಿಕ್ರಿಯಿಸಿದ ರಾಮಲಿಂಗಾರೆಡ್ಡಿ, ಹಾನಿಗೆ ಕಾರಣರಾದವರನ್ನು ಪೊಲೀಸರು ಗುರುತಿಸಿದ್ದಾರೆ. ಅವರಲ್ಲಿ ಹಿಂದಿನ ಪ್ರಕರಣಗಳಲ್ಲಿ ಭಾಗಿಯಾಗಿದ್ದವರೂ ಇದ್ದಾರೆ. ತನಿಖಾ ವರದಿಯಲ್ಲಿ ಕಂಡುಬರುವ ಅಂಶಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

‘ಸರ್ಕಾರವೇ ಮೂವರನ್ನು ಕೊಲೆ ಮಾಡಿಸಿದೆ’ ಎಂಬ ಬಿಜೆಪಿ ಆರೋಪವನ್ನು ತಳ್ಳಿಹಾಕಿದ ಅವರು, ಹಿಂದಿನ ಬಿಜೆಪಿ ಸರ್ಕಾರಗಳ ಅವಧಿಯಲ್ಲೂ ಬನ್ನೇರುಘಟ್ಟ ಸೇರಿದಂತೆ ವಿವಿಧ ಅರಣ್ಯ ಪ್ರದೇಶಗಳಲ್ಲಿ ಶೂಟೌಟ್‌ ಘಟನೆಗಳು ನಡೆದಿದ್ದವು ಎಂದು ನೆನಪಿಸಿದರು.

ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ರಕ್ಷಣೆ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಅದೇ ಸಂದರ್ಭದಲ್ಲಿ ಅರಣ್ಯ ಇಲಾಖೆಯಿಂದ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು. ಅಧಿಕಾರಿಗಳು ಅಥವಾ ಸಿಬ್ಬಂದಿಯಿಂದ ತಪ್ಪು ನಡೆದಿರುವುದು ತನಿಖೆಯಲ್ಲಿ ಸಾಬೀತಾದರೆ ಅವರ ವಿರುದ್ಧವೂ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.

ಆರೋಪ-ಪ್ರತ್ಯಾರೋಪಗಳ ಮೂಲಕ ಅರಣ್ಯ ಇಲಾಖೆಯ ಸಿಬ್ಬಂದಿಯ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಬಾರದು. ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯ ಜೊತೆಗೆ ಸಾರ್ವಜನಿಕರ ಸುರಕ್ಷತೆಯನ್ನೂ ಸಮಾನವಾಗಿ ಗಮನದಲ್ಲಿಟ್ಟುಕೊಂಡು ಇಲಾಖೆ ಕಾರ್ಯನಿರ್ವಹಿಸಲಿದೆ ಎಂದು ರಾಮಲಿಂಗಾರೆಡ್ಡಿ ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು