ಅಂಬೇಡ್ಕರ್‌ಗೆ ಗೌರವ ಕೇವಲ ಜಯಕಾರಕ್ಕೆ ಸೀಮಿತವಾಗಬಾರದು – ಕೃಷ್ಣ ಬೈರೇಗೌಡ

ಬೆಂಗಳೂರು : ಜಾತಿ, ಧರ್ಮದ ಆಧಾರದಲ್ಲಿ ಸಮಾಜವನ್ನು ವಿಭಜಿಸುವ ಪ್ರವೃತ್ತಿ ದೂರವಾಗಿ, ಪ್ರತಿಯೊಬ್ಬರನ್ನೂ ಸಮಾನವಾಗಿ ಕಾಣುವ ಮಾನವೀಯ ದೃಷ್ಟಿಕೋನ ಬೆಳೆದಾಗ ಮಾತ್ರ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯಗಳಿಗೆ ನಿಜವಾದ ಗೌರವ ಸಿಕ್ಕಂತಾಗುತ್ತದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕೇಂದ್ರ ಕಚೇರಿ ಆವರಣದಲ್ಲಿರುವ ಡಾ. ರಾಜ್‌ಕುಮಾರ್ ಗಾಜಿನ ಮನೆಯಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಪೌರಕಾರ್ಮಿಕರ ದಿನಾಚರಣೆ–2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕಾರ್ಯಕ್ರಮಕ್ಕೂ ಮುನ್ನ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಚಿವರು, ಸಮಾನತೆ ಮತ್ತು ಮಾನವೀಯತೆಯ ಮೌಲ್ಯಗಳನ್ನು ಸಮಾಜದ ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.

ಡಾ. ಅಂಬೇಡ್ಕರ್ ಅವರನ್ನು ನಿರ್ದಿಷ್ಟ ಜಾತಿ ಅಥವಾ ಸಮುದಾಯದ ನಾಯಕರಾಗಿ ನೋಡಬಾರದು. ಸಮಾಜದ ಎಲ್ಲ ವರ್ಗಗಳ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಅಪಾರ. ಮಾನವೀಯತೆಯನ್ನೇ ಪ್ರಧಾನವಾಗಿಟ್ಟುಕೊಂಡ ಅವರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಕೃಷ್ಣ ಬೈರೇಗೌಡ ಹೇಳಿದರು.

ದೇಶದಲ್ಲಿ ಬಸವಣ್ಣ, ಮಹಾತ್ಮ ಗಾಂಧೀಜಿ, ಕುವೆಂಪು ಸೇರಿದಂತೆ ಅನೇಕ ಮಹನೀಯರು ಸಮಾನತೆ ಮತ್ತು ಮಾನವ ಧರ್ಮದ ಪರಿಕಲ್ಪನೆಯನ್ನು ಪ್ರತಿಪಾದಿಸಿದ್ದಾರೆ. ಆದರೆ ಅವರ ಸಂದೇಶಗಳನ್ನು ಕೇವಲ ಆಚರಣೆಗಳಿಗೆ ಸೀಮಿತಗೊಳಿಸದೆ, ಸಾಮಾಜಿಕ ಬದುಕಿನಲ್ಲಿ ಅನುಷ್ಠಾನಗೊಳಿಸುವುದು ಅಗತ್ಯವಾಗಿದೆ ಎಂದು ಅವರು ತಿಳಿಸಿದರು.

ಅಂಬೇಡ್ಕರ್ ಅವರ ಜಯಂತಿ ಸಂದರ್ಭದಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಜೈಕಾರ ಕೂಗುವುದಷ್ಟೇ ಗೌರವವಲ್ಲ. ಸಮಾಜದಲ್ಲಿನ ಮೇಲು-ಕೀಳು ಭಾವನೆಗಳನ್ನು ತೊಡೆದುಹಾಕಿ, ಜಾತಿ-ಧರ್ಮದ ಹೆಸರಿನಲ್ಲಿ ನಡೆಯುವ ತಾರತಮ್ಯಕ್ಕೆ ಕಡಿವಾಣ ಹಾಕುವುದು ಅಂಬೇಡ್ಕರ್ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಸಚಿವರು ಹೇಳಿದರು.

ಪೌರಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದನೆ
ಪೌರಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಅವರ ಬೇಡಿಕೆಗಳನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತಂದು, ಅವುಗಳ ಪರಿಹಾರಕ್ಕೆ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷ್ಣ ಬೈರೇಗೌಡ ಭರವಸೆ ನೀಡಿದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ಐದು ನಗರ ಪಾಲಿಕೆಗಳ ಸಹಯೋಗದಲ್ಲಿ ಅಂಬೇಡ್ಕರ್ ಹಾಗೂ ಪೌರಕಾರ್ಮಿಕರ ದಿನಾಚರಣೆ ನಡೆಸಲಾಗುತ್ತಿದೆ. ಎಸ್ಐಆರ್ ಪ್ರಕ್ರಿಯೆಯ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜನೆ ವಿಳಂಬವಾಗಿತ್ತು. ಇದೀಗ ಆದ್ಯತೆ ನೀಡಿ ಕಾರ್ಯಕ್ರಮ ನಡೆಸಲಾಗಿದೆ ಎಂದು ಅವರು ವಿವರಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ. ರಘು, ರಾಜ್ಯ ಸಫಾಯಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳಿ ಅಶೋಕ್ ಸಾಲಪ್ಪ, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ವಿಶೇಷ ಆಯುಕ್ತರಾದ ಸುಷಮಾ ಗೋಡಬೋಲೆ, ನಿತೀಶ್, ವಿವಿಧ ನಗರ ಪಾಲಿಕೆಗಳ ಆಯುಕ್ತರಾದ ರಮೇಶ್ ಡಿ.ಎಸ್., ಪೊಮ್ಮಲ ಸುನೀಲ್ ಕುಮಾರ್, ಜಿ. ಜಗದೀಶ್, ಡಾ. ರಾಜೇಂದ್ರ ಕೆ.ವಿ., ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಸಿಇಒ ಕರೀಗೌಡ ಸೇರಿದಂತೆ ಹಲವು ಅಧಿಕಾರಿಗಳು, ಪೌರಕಾರ್ಮಿಕರು ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು