ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ದೆಹಲಿಯಲ್ಲಿ ಬಿಜೆಪಿ ಮುಖಂಡ ಬಸವರಾಜ್ ಕನ್ನಾಳೆ ಸಿಐಡಿ ವಶಕ್ಕೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣದ ತನಿಖೆಯನ್ನು ಸಿಐಡಿ (CID) ತೀವ್ರಗೊಳಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಬೀದರ್ ಜಿಲ್ಲೆಯ ಭಾಲ್ಕಿ ಮೂಲದ ಬಿಜೆಪಿ ಮುಖಂಡ ಬಸವರಾಜ್ ಕನ್ನಾಳೆಯನ್ನು ದೆಹಲಿಯಲ್ಲಿ ವಶಕ್ಕೆ ಪಡೆದುಕೊಂಡಿದೆ.

ಪ್ರಕರಣದಲ್ಲಿ ಈಗಾಗಲೇ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರೊಂದಿಗೆ ಬಸವರಾಜ್ ಕನ್ನಾಳೆ ಸತತ ಸಂಪರ್ಕದಲ್ಲಿದ್ದ ಎಂಬುದು ಸಿಐಡಿ ತನಿಖೆಯಲ್ಲಿ ಬಹಿರಂಗವಾಗಿದೆ. ಜ್ಞಾನೇಂದ್ರ ಕುಮಾರ್ ಅವರ ಕಾಲ್ ಡಿಟೇಲ್ಸ್ (CDR) ಪರಿಶೀಲನೆ ನಡೆಸಿದ ವೇಳೆ ಈ ಅಕ್ರಮದಲ್ಲಿ ಕನ್ನಾಳೆ ಪಾತ್ರವಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ದೆಹಲಿಯಲ್ಲಿ ವಶಕ್ಕೆ ಪಡೆದು ಬಂಧನ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ.

ದೆಹಲಿಯಿಂದ ಬೆಂಗಳೂರಿಗೆ ಕರೆತರಲಾಗುತ್ತಿರುವ ಬಸವರಾಜ್ ಕನ್ನಾಳೆಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಸಿಐಡಿ ಕಸ್ಟಡಿಗೆ ಪಡೆಯುವ ಸಾಧ್ಯತೆಯಿದೆ. ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವ ಜ್ಞಾನೇಂದ್ರ ಕುಮಾರ್ ಮತ್ತು ಬಸವರಾಜ್ ಕನ್ನಾಳೆ ಇಬ್ಬರನ್ನೂ ಒಟ್ಟಿಗೆ ಕೂರಿಸಿ ಮುಖಾಮುಖಿ ತೀವ್ರ ವಿಚಾರಣೆ ನಡೆಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಈ ನೇಮಕಾತಿ ಅಕ್ರಮದಲ್ಲಿ ಹಲವು ಪ್ರಭಾವಿ ರಾಜಕೀಯ ಮುಖಂಡರ ಜೊತೆ ಆರೋಪಿ ಸಂಪರ್ಕದಲ್ಲಿದ್ದ ಫೋಟೋಗಳು ಹೊರಬಂದಿದ್ದು, ಪ್ರಕರಣ ರಾಜ್ಯ ರಾಜಕೀಯದಲ್ಲೂ ಭಾರೀ ಸಂಚಲನ ಮೂಡಿಸಿದೆ.

Related Articles

ಇತ್ತೀಚಿನ ಸುದ್ದಿಗಳು