ಮಂಗಳೂರಲ್ಲಿ ಮುಂದಿನ ಸಚಿವ ಸಂಪುಟ ಸಭೆ – ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮುಂಬರುವ ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ( State Cabinet) ಸಭೆಯನ್ನು ಆಯೋಜಿಸಲು ತೀರ್ಮಾನಿಸಿದೆ. ಈ ಸಭೆಯಲ್ಲಿ ಕರಾವಳಿ ಜಿಲ್ಲೆಗಳ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಮೊದಲ ಆದ್ಯತೆ ಸಿಗಲಿದೆ. ಸಂಪುಟ ಸಭೆಯ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಯೋಜನೆಗಳ ಕುರಿತು ತುರ್ತಾಗಿ ಪ್ರಸ್ತಾವನೆ ಸಿದ್ಧಪಡಿಸಿ, ಕ್ಯಾಬಿನೆಟ್ ಟಿಪ್ಪಣಿ ಮಂಡಿಸಲು ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ‘ಕೇರಳ, ಗೋವಾ ರಾಜ್ಯಗಳು ಕರಾವಳಿ ಭಾಗವನ್ನು ಬಳಸಿಕೊಂಡಿರುವ ಮಾದರಿಯಲ್ಲೇ ಕರ್ನಾಟಕದಲ್ಲೂ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲು ಸರ್ಕಾರ ನಿರ್ಧರಿಸಿದ್ದು, ಪ್ರಾಕೃತಿಕ ಸಂಪತ್ತನ್ನು ಸದ್ಬಳಕೆ ಮಾಡಲಾಗುವುದು. ರಾಜ್ಯದ 350 ಕಿ.ಮೀ ಉದ್ದದ ಕರಾವಳಿಯನ್ನು ಸಮೃದ್ಧ ಪರಿಸರ ಪ್ರವಾಸೋದ್ಯಮ ತಾಣವಾಗಿ ರೂಪಿಸಲಾಗುವುದು. ಅದಕ್ಕಾಗಿ ಮಂಗಳೂರಲ್ಲೇ ಸಂಪುಟ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದರು.

ಮಂಗಳೂರಿನಲ್ಲಿ ನಡೆಸಲು ಉದ್ದೇಶಿಸಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಪುತ್ತೂರು ಶಾಸಕ ಅಶೋಕ್‌ಕುಮಾರ್ ರೈ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಈಗ ಸಂಪುಟ ಸಭೆಯ ದಿನಾಂಕ ನಿಗದಿಯಾಗಿರುವುದರಿಂದ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಯೂ ಸೇರಿದಂತೆ ಈ ಭಾಗದ ಸಮಸ್ಯೆಗಳಿಗೆ ಪರಿಹಾರ ಸಿಗಬಹುದು ಎಂಬ ನಿರೀಕ್ಷೆ ಗರಿಗೆದರಿದೆ.

Related Articles

ಇತ್ತೀಚಿನ ಸುದ್ದಿಗಳು