ಬೆಂಗಳೂರು: ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ, ಹಲ್ಲೆ, ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಂತಹ ಅಪರಾಧಗಳನ್ನು ತಡೆಗಟ್ಟುವಲ್ಲಿ ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ವಿಫಲವಾಗಿವೆ ಎಂದು ವಿವಿಧ ದಲಿತ ಸಂಘಟನೆಗಳ ಮುಖಂಡರು ಆರೋಪಿಸಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ಅಸ್ಪೃಶ್ಯತೆ ಆಚರಣೆ, ಜಾತಿ ಆಧಾರಿತ ದೌರ್ಜನ್ಯ, ದಲಿತ ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳು ನಿರಂತರವಾಗಿ ವರದಿಯಾಗುತ್ತಿವೆ. ಅದರಲ್ಲೂ ಕೊಪ್ಪಳ, ರಾಯಚೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ ಎಂದು ಸಂಘಟನೆಗಳು ಆತಂಕ ವ್ಯಕ್ತಪಡಿಸಿವೆ.
ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಂಡು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕಾದ ಪೊಲೀಸ್ ಇಲಾಖೆ ಕೆಲವು ಪ್ರಕರಣಗಳಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ. ಇದರಿಂದ ಪ್ರಕರಣಗಳ ತನಿಖೆಯ ದಿಕ್ಕು ಬದಲಾಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮುಖಂಡರು ದೂರಿದ್ದಾರೆ.
ಕಳೆದ ಮೂರು ವರ್ಷಗಳಲ್ಲಿ ಕೊಪ್ಪಳ, ರಾಯಚೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಅಸ್ಪೃಶ್ಯ ಸಮುದಾಯಗಳ ಮೇಲೆ ಹಲ್ಲೆ, ದೌರ್ಜನ್ಯ ಹಾಗೂ ಕೊಲೆ ಪ್ರಕರಣಗಳು ನಡೆದಿವೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿರುವ ಎಲ್ಲ ಸಮುದಾಯಗಳ ಸಾಮಾಜಿಕ ಸ್ಥಾನಮಾನ ಒಂದೇ ರೀತಿಯಾಗಿಲ್ಲ. ಈ ಹಿನ್ನೆಲೆಯಲ್ಲಿ ಅಸ್ಪೃಶ್ಯ ಸಮುದಾಯಗಳ ವಿರುದ್ಧ ಇತರ ಸಮುದಾಯಗಳಿಂದ ನಡೆಯುವ ಜಾತಿ ಆಧಾರಿತ ದೌರ್ಜನ್ಯಗಳಿಗೂ ಸೂಕ್ತ ಕಾನೂನು ರಕ್ಷಣೆ ದೊರೆಯುವಂತೆ ಕಾಯ್ದೆಯಲ್ಲಿ ಅಗತ್ಯ ತಿದ್ದುಪಡಿ ತರಬೇಕು ಎಂದು ಸಂಘಟನೆಗಳು ಒತ್ತಾಯಿಸಿವೆ.
ಅಸ್ಪೃಶ್ಯತೆ ಆಚರಣೆ ಶಿಕ್ಷಾರ್ಹ ಅಪರಾಧ ಎಂಬ ಕುರಿತು ಸಾರ್ವಜನಿಕರಲ್ಲಿ ಅಗತ್ಯ ಜಾಗೃತಿ ಮೂಡಿಸುವಲ್ಲಿ ಜಿಲ್ಲಾಡಳಿತಗಳು ವಿಫಲವಾಗಿವೆ. ಹೋಟೆಲ್, ಕ್ಷೌರದಂಗಡಿ, ದೇವಸ್ಥಾನ ಸೇರಿದಂತೆ ಸಾರ್ವಜನಿಕ ಸ್ಥಳಗಳನ್ನು ಬಳಸುವ ವಿಚಾರದಲ್ಲಿ ದಲಿತರ ಮೇಲೆ ಹಲ್ಲೆ ನಡೆಯುತ್ತಿರುವುದು ಸಂವಿಧಾನ ನೀಡಿರುವ ಸಮಾನತೆಯ ಹಕ್ಕಿನ ನಿರಾಕರಣೆಯಾಗಿದೆ ಎಂದು ಮುಖಂಡರು ಹೇಳಿದ್ದಾರೆ.
ಕಳೆದ ಎರಡು ತಿಂಗಳಲ್ಲಿ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಭೂಮಾನಂದನ ಹತ್ಯೆ, ಹುಕ್ರಾಣಿ ಗ್ರಾಮದ ಅಶ್ವಿನಿ ಎಂಬ ಯುವತಿಯ ಅತ್ಯಾಚಾರ ಮತ್ತು ಕೊಲೆ, ಲಿಂಗಸೂರು ತಾಲೂಕಿನ ರಾಣಿಯಮ್ಮ ಅವರ ಕೊಲೆ, ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕಸಾಪುರ ಗ್ರಾಮದ ಸಿಂಹಾದ್ರಿ ಹತ್ಯೆ, ಪೋಲೆನಹಳ್ಳಿಯ ಆನಂದ ಹತ್ಯೆ ಹಾಗೂ ಐ.ಡಿ.ಹಳ್ಳಿ ಗ್ರಾಮದ ಪುರುಷೋತ್ತಮ್ ಹತ್ಯೆ ಸೇರಿದಂತೆ ಹಲವು ಪ್ರಕರಣಗಳು ನಡೆದಿವೆ ಎಂದು ಸಂಘಟನೆಗಳು ಉಲ್ಲೇಖಿಸಿವೆ.
ಇಂತಹ ಪ್ರಕರಣಗಳು ನಿರಂತರವಾಗಿ ನಡೆಯುತ್ತಿರುವುದರಿಂದ ರಾಜ್ಯದಲ್ಲಿ ದಲಿತ ಸಮುದಾಯಕ್ಕೆ ಸೂಕ್ತ ರಕ್ಷಣೆ ಇಲ್ಲ ಎಂಬ ಭಾವನೆ ಮೂಡುತ್ತಿದೆ. ಹೀಗಾಗಿ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಹಾಕಬೇಕು ಎಂದು ಮುಖಂಡರು ಆಗ್ರಹಿಸಿದ್ದಾರೆ.
ಸಂಘಟನೆಗಳ ಪ್ರಮುಖ ಬೇಡಿಕೆಗಳು
- ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಅನ್ವಯಿಸುವ ಸಂದರ್ಭಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ, ನಿಷ್ಪಕ್ಷಪಾತ ಹಾಗೂ ಪರಿಣಾಮಕಾರಿ ತನಿಖೆ ನಡೆಸಬೇಕು.
- ಜಾತಿ ಕಾರಣಕ್ಕಾಗಿ ಅತ್ಯಾಚಾರ, ಕೊಲೆ ಹಾಗೂ ದೌರ್ಜನ್ಯಕ್ಕೆ ಒಳಗಾದ ಕುಟುಂಬಗಳಿಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಬೇಕು.
- ದೌರ್ಜನ್ಯ ಹಾಗೂ ಕೊಲೆ ಪ್ರಕರಣಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ₹25 ಲಕ್ಷ ಪರಿಹಾರ ಹಾಗೂ ಐದು ಎಕರೆ ಭೂಮಿ ಮಂಜೂರು ಮಾಡಬೇಕು.
- ಪದೇಪದೇ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಿರುವ ಕೊಪ್ಪಳ, ರಾಯಚೂರು, ತುಮಕೂರು ಸೇರಿದಂತೆ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ, ಅಪರಾಧ ತಡೆಗೆ ವಿಶೇಷ ಕ್ರಮ ಕೈಗೊಳ್ಳಬೇಕು.
- ಅಸ್ಪೃಶ್ಯತೆ ಆಚರಣೆ ಶಿಕ್ಷಾರ್ಹ ಅಪರಾಧ ಎಂಬ ಕುರಿತು ಜಿಲ್ಲಾಡಳಿತಗಳು ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.
- ಅಸ್ಪೃಶ್ಯ ಸಮುದಾಯಗಳ ಮೇಲೆ ಜಾತಿ ಆಧಾರಿತ ದೌರ್ಜನ್ಯ ನಡೆಯುವ ಸಂದರ್ಭಗಳಲ್ಲಿ ಪರಿಣಾಮಕಾರಿ ಕಾನೂನು ರಕ್ಷಣೆ ದೊರೆಯುವಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಗೆ ಅಗತ್ಯ ತಿದ್ದುಪಡಿ ತರಬೇಕು.
- ಯಾವ ಜಿಲ್ಲೆಗಳಲ್ಲಿ ಕೊಲೆ, ಅತ್ಯಾಚಾರ ಹಾಗೂ ದೌರ್ಜನ್ಯ ಪ್ರಕರಣಗಳು ನಿರಂತರವಾಗಿ ನಡೆಯುತ್ತವೆಯೋ, ಅಂತಹ ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಹೊಂದಿರುವ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜವಾಬ್ದಾರಿಯನ್ನು ಪರಿಶೀಲಿಸಿ, ಕರ್ತವ್ಯಲೋಪ ಕಂಡುಬಂದರೆ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಬೇಕು.
ರಾಜ್ಯ ಸರ್ಕಾರ ಈ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ, ದಲಿತ ಸಮುದಾಯದ ಮೇಲಿನ ದೌರ್ಜನ್ಯ ತಡೆಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಬಸವರಾಜ್ ಕೌತಾಳ್, ಅಂಬಣ್ಣ ಅರೋಲಿಕರ್, ಡಾ. ಮೋಹನ್ ರಾಜ್, ಹೆಣ್ಣೂರು ಶ್ರೀನಿವಾಸ್, ವೇಣುಗೋಪಾಲ್ ಮೌರ್ಯ, ಮಂಜುನಾಥ್ ಹಾಗೂ ಬಿ.ಎಂ. ವೆಂಕಟೇಶ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.
