ದೇಶವ್ಯಾಪಿ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು, ಅಕ್ರಮವಾಗಿ ತೆಗೆದುಹಾಕಲಾದ ಮತದಾರರ ಹೆಸರುಗಳನ್ನು ಮರುಸೇರ್ಪಡೆ ಮಾಡಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಹಿರಿಯ ವಕೀಲರು, ಮಾನವ ಹಕ್ಕುಗಳ ಕಾರ್ಯಕರ್ತರು ಮತ್ತು ನಾಗರಿಕ ಸಮಾಜದ ಮುಖಂಡರು ನವದೆಹಲಿಯಲ್ಲಿ ಒತ್ತಾಯಿಸಿದ್ದಾರೆ.
ನವದೆಹಲಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿರಿಯ ವಕೀಲ ಕಪಿಲ್ ಸಿಬಲ್, ಚುನಾವಣಾ ಆಯೋಗದ ಕಾರ್ಯವೈಖರಿಯು ಕಳಂಕಿತವಾಗಿದೆ ಎಂದು ಗಂಭೀರ ಆರೋಪ ಮಾಡಿದರು. ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣಾ ಪ್ರಕ್ರಿಯೆಗೆ ಅಡ್ಡಿ ಉಂಟಾದರೆ ಪ್ರಜಾಪ್ರಭುತ್ವದ ಅಸ್ತಿತ್ವಕ್ಕೆ ಧಕ್ಕೆಯಾಗುತ್ತದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.
ಎಸ್ಐಆರ್ ಪ್ರಕ್ರಿಯೆಗೆ ಸಂಬಂಧಿಸಿದ ತೀರ್ಮಾನಗಳು ಆಯೋಗದ ಸಾಮೂಹಿಕ ನಿರ್ಧಾರಗಳಾಗಿರದೆ, ಮುಖ್ಯ ಚುನಾವಣಾ ಆಯುಕ್ತರು ಏಕಪಕ್ಷೀಯವಾಗಿ ತೆಗೆದುಕೊಂಡಿರುವ ನಿರ್ಣಯಗಳಾಗಿವೆ. ಆದ್ದರಿಂದ ಈ ಎಲ್ಲ ನಿರ್ಧಾರಗಳಿಗೆ ಕಾನೂನುಬದ್ಧತೆ ಇಲ್ಲದಿರುವುದರಿಂದ ಅವುಗಳನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದರು. ಮುಂಬರುವ ಚುನಾವಣೆಗಳನ್ನು ಪರಿಷ್ಕರಣೆಗಿಂತ ಮುಂಚಿನ (ಪ್ರೀ-ಎಸ್ಐಆರ್) ಮತದಾರರ ಪಟ್ಟಿಯ ಆಧಾರದ ಮೇಲೆಯೇ ನಡೆಸಬೇಕು ಮತ್ತು ಆಯೋಗದ ಈ ನಿರ್ಧಾರಗಳ ಸಾಂವಿಧಾನಿಕ ಸಿಂಧುತ್ವದ ಕುರಿತು ಸ್ವತಂತ್ರ ತನಿಖೆ ನಡೆಯಬೇಕು ಎಂದು ಮುಖಂಡರು ಸರ್ಕಾರಕ್ಕೆ ಗಡುವು ನೀಡಿದ್ದಾರೆ.
