ಇಂದು ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮುಂಬೈಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ

ಮುಂಬೈ: ಕೇಂದ್ರ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಅಕ್ಟೋಬರ್ 2 ರಂದು ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದೆ.

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್ – SIR) ಅಡಿಯಲ್ಲಿ ಸಿದ್ಧಪಡಿಸಲಾದ ಮತದಾರರ ಪಟ್ಟಿಗೆ ತಕ್ಷಣವೇ ತಡೆ ನೀಡಬೇಕು ಮತ್ತು ಬ್ಯಾಲೆಟ್ ಪೇಪರ್ ಮೂಲಕವೇ ಚುನಾವಣೆಗಳನ್ನು ನಡೆಸಬೇಕು ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಒತ್ತಾಯಿಸಿದ್ದಾರೆ. 2024 ರ ನಂತರ ಬೃಹತ್ ಪ್ರಮಾಣದಲ್ಲಿ ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಆರೋಪಿಸಿದ ಅವರು, ಸಿಇಸಿ ರಾಜೀನಾಮೆ ನೀಡದಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರ ರಾಜೀನಾಮೆಗೂ ಆಗ್ರಹಿಸಿ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಿದ್ದಾರೆ.

ಮುಂಬೈ ಪೊಲೀಸರು ಶಿವಾಜಿ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನಿರಾಕರಿಸಿದ್ದರೂ, ತಾವು ನಿಗದಿತ ಸ್ಥಳದಲ್ಲೇ ಪ್ರತಿಭಟನೆ ಮುಂದುವರಿಸುವುದಾಗಿ ದೀಪ್ಕೆ ಸ್ಪಷ್ಟಪಡಿಸಿದ್ದಾರೆ. ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ ಕುರಿತ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮೂರು ದಿನವಲ್ಲ, ಅಗತ್ಯಬಿದ್ದರೆ ಮೂರು ತಿಂಗಳು ಪೊಲೀಸ್ ಕಸ್ಟಡಿಗೆ ಹೋಗಲೂ ತಾವು ಸಿದ್ಧ ಎಂದು ಸವಾಲು ಹಾಕಿದ್ದಾರೆ. ಮುಂಬೈ ಬಳಿಕ ದೇಶದ ಇತರ 6 ನಗರಗಳಲ್ಲಿ ಪ್ರತಿಭಟನೆ ನಡೆಸಿ, ಅಕ್ಟೋಬರ್ ಅಂತ್ಯಕ್ಕೆ ದೆಹಲಿಯ ಜಂತರ್ ಮಂತರ್‌ನಲ್ಲಿ ಚಳವಳಿಯನ್ನು ಮುಕ್ತಾಯಗೊಳಿಸುವುದಾಗಿ ಸಂಘಟನೆ ತಿಳಿಸಿದೆ.

ಶಿವಾಜಿ ಮಹಾರಾಜರಿಗೆ ಅಪಮಾನದ ಆರೋಪ:

ಮತ್ತೊಂದೆಡೆ, ಸಿಜೆಪಿ ಮುಖ್ಯಸ್ಥ ಅಭಿಜೀತ್ ದೀಪ್ಕೆ ವಿರುದ್ಧ ಮಹಾರಾಷ್ಟ್ರ ಸಚಿವ ನಿತೀಶ್ ರಾಣೆ ಗಂಭೀರ ಆರೋಪ ಮಾಡಿದ್ದಾರೆ. ದೀಪ್ಕೆ ತಮ್ಮ ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯ ಕೆಳಗೆ ಜಿರಳೆಗಳ ಚಿತ್ರವನ್ನು ಪ್ರದರ್ಶಿಸುವ ಮೂಲಕ ಮಹಾರಾಜರಿಗೆ ಅಪಮಾನ ಮಾಡಿದ್ದಾರೆ ಎಂದು ರಾಣೆ ಕಿಡಿಕಾರಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು