ನವದೆಹಲಿ: SIR ಪ್ರಕ್ರಿಯೆಯಲ್ಲಿನ ಲೋಪಗಳ ಕುರಿತು ಉತ್ತರದಾಯಿತ್ವಕ್ಕೆ ಆಗ್ರಹಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ ಕೇಳಿ, ಎಐಸಿಸಿ ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆಜಿ, ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧೀಜಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಲೋಕಸಭಾ ಸದಸ್ಯರಾದ ಪ್ರಿಯಾಂಕಾ ಗಾಂಧೀಜಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಹಾಗೂ ಸಂಸದರಾದ ಕೆ.ಸಿ. ವೇಣುಗೋಪಾಲ್ ಜಿ ಮತ್ತು INDIA ಮೈತ್ರಿಕೂಟದ ಸಂಸದರು ಜಂತರ್ ಮಂತರ್ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ದೆಹಲಿ ಪೊಲೀಸರು ಅವರನ್ನು ತಡೆದರು. ರಾಹುಲ್ ಗಾಂಧೀಜಿ ಅವರನ್ನು ಪೊಲೀಸರು ವಶಕ್ಕೆ ಪಡೆದರು.
ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದು ಪ್ರಜಾಪ್ರಭುತ್ವದ ಹಕ್ಕು. ಜನರ ಮತದಾನದ ಹಕ್ಕು ಮತ್ತು ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆಯ ಕುರಿತು ಪ್ರಶ್ನೆ ಎತ್ತಿದ ನಾಯಕರನ್ನು ತಡೆಯುವುದು ಖಂಡನೀಯ. ಪೊಲೀಸರ ಕ್ರಮದಿಂದ ಪ್ರಜಾಪ್ರಭುತ್ವದ ಪರವಾಗಿ ಎತ್ತಿರುವ ಧ್ವನಿಯನ್ನು ಮೌನಗೊಳಿಸಲು ಸಾಧ್ಯವಿಲ್ಲ, ಎಂದು ಸಂಸದ ಶ್ರೇಯಸ್ ಎಂ. ಪಟೇಲ್ ಹೇಳಿದರು.
SIR ಪ್ರಕ್ರಿಯೆ ಕುರಿತು ಎದ್ದಿರುವ ಪ್ರಶ್ನೆಗಳಿಗೆ ಉತ್ತರ ನೀಡಬೇಕು ಮತ್ತು ಚುನಾವಣಾ ವ್ಯವಸ್ಥೆಯ ಮೇಲಿನ ಸಾರ್ವಜನಿಕ ನಂಬಿಕೆಯನ್ನು ಬಲಪಡಿಸಲು ಪಾರದರ್ಶಕತೆ ಖಚಿತಪಡಿಸಬೇಕು ಎಂದು ಅವರು ಆಗ್ರಹಿಸಿದರು. ಪ್ರಜಾಪ್ರಭುತ್ವದ ರಕ್ಷಣೆ ಹಾಗೂ ಮತದಾರರ ಹಕ್ಕುಗಳಿಗಾಗಿ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.
