ಮಾನಹಾನಿ ಪ್ರಕರಣದಲ್ಲಿ ಯತ್ನಾಳ್‌ಗೆ ಹೈಕೋರ್ಟ್ ಹಿನ್ನಡೆ; ಅರ್ಜಿ ವಜಾ
ಲಿಂಕ್ ನಕಲಿಸಲಾಗಿದೆ ✓
ಬೆಂಗಳೂರು: ಮಾಜಿ ಸಚಿವ ಹಾಗೂ ಹಾಲಿ ಶಾಸಕ ಶಿವಾನಂದ ಎಸ್. ಪಾಟೀಲ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಮಾನಹಾನಿ ಪ್ರಕರಣದಲ್ಲಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ತಮ್ಮ ವಿರುದ್ಧದ ಕ್ರಿಮಿನಲ್ ಮಾನಹಾನಿ ಪ್ರಕರಣದ ವಿಚಾರಣಾ ಪ್ರಕ್ರಿಯೆ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿ ಅನಂತ್ ರಾಮನಾಥ್ ಹೆಗಡೆ ಅವರಿದ್ದ ಏಕಸದಸ್ಯ ಪೀಠ ಅರ್ಜಿಯ ವಿಚಾರಣೆ ನಡೆಸಿ ಈ ಆದೇಶ ನೀಡಿದೆ.
ಮಾನಹಾನಿ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಸಂಜ್ಞೆ (Cognizance) ತೆಗೆದುಕೊಳ್ಳುವ ಸಂದರ್ಭದಲ್ಲಿ ದೂರುದಾರರ ಗೌರವಕ್ಕೆ ಧಕ್ಕೆಯಾಗಿದೆ ಎಂಬುದನ್ನು ಮೂರನೇ ವ್ಯಕ್ತಿಯೊಬ್ಬರು ನ್ಯಾಯಾಲಯದ ಮುಂದೆ ಸಾಕ್ಷ್ಯ ನೀಡಿಯೇ ಸಾಬೀತುಪಡಿಸಬೇಕು ಎಂಬುದು ಕಡ್ಡಾಯವಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಆರೋಪಿಯ ಹೇಳಿಕೆಗಳು ಮೇಲ್ನೋಟಕ್ಕೆ ದೂರುದಾರರ ನೈತಿಕತೆ, ಚಾರಿತ್ರ್ಯ ಮತ್ತು ಗೌರವಕ್ಕೆ ಧಕ್ಕೆ ತರುವಂತಿದ್ದರೆ, ದೂರುದಾರರು ಹಾಗೂ ಇತರ ಸಾಕ್ಷಿಗಳ ಹೇಳಿಕೆಗಳನ್ನು ಆಧರಿಸಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ವಿಚಾರಣೆಗೆ ಮುಂದಾಗಬಹುದು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಯತ್ನಾಳ್ ನೀಡಿದ್ದ ಹೇಳಿಕೆಗಳು ಮೇಲ್ನೋಟಕ್ಕೆ ಶಿವಾನಂದ ಪಾಟೀಲ್ ಅವರ ಚಾರಿತ್ರ್ಯ ಮತ್ತು ಘನತೆಗೆ ಧಕ್ಕೆ ತರುವ ಸ್ವರೂಪದಲ್ಲಿವೆ. ಇಬ್ಬರು ಸಾಕ್ಷಿಗಳ ಹೇಳಿಕೆಗಳನ್ನು ಆಧರಿಸಿ ವಿಚಾರಣಾ ನ್ಯಾಯಾಲಯ ಪ್ರಕರಣದ ಸಂಜ್ಞೆ ತೆಗೆದುಕೊಂಡಿರುವುದರಲ್ಲಿ ಯಾವುದೇ ಕಾನೂನು ದೋಷ ಕಂಡುಬರುವುದಿಲ್ಲ ಎಂದು ಪೀಠ ಹೇಳಿದೆ.
ಆದರೆ, ಯತ್ನಾಳ್ ಅವರ ಹೇಳಿಕೆಗಳಿಂದ ಸಾರ್ವಜನಿಕರ ದೃಷ್ಟಿಯಲ್ಲಿ ನಿಜವಾಗಿಯೂ ಶಿವಾನಂದ ಪಾಟೀಲ್ ಅವರ ಗೌರವಕ್ಕೆ ಧಕ್ಕೆಯಾಗಿದೆಯೇ ಎಂಬುದನ್ನು ವಿಚಾರಣೆಯ ಸಂದರ್ಭದಲ್ಲಿ ಸಾಕ್ಷ್ಯಾಧಾರಗಳ ಮೂಲಕ ನಿರ್ಧರಿಸಬೇಕಿದೆ ಎಂದು ನ್ಯಾಯಾಲಯ ತಿಳಿಸಿದೆ.
ಯತ್ನಾಳ್ ಪರ ವಕೀಲರು, ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 356ರ ಸ್ಪಷ್ಟೀಕರಣ-4ರ ಪ್ರಕಾರ ದೂರುದಾರರ ಗೌರವಕ್ಕೆ ಧಕ್ಕೆಯಾಗಿದೆ ಎಂದು ಭಾವಿಸಿರುವ ವ್ಯಕ್ತಿಯ ಹೇಳಿಕೆ ಇಲ್ಲದೆ ಮಾನಹಾನಿ ಆರೋಪ ಸಾಬೀತುಪಡಿಸಲು ಸಾಧ್ಯವಿಲ್ಲ. ಹೀಗಿರುವಾಗ ಕೇವಲ ಇಬ್ಬರು ಸಾಕ್ಷಿಗಳ ಹೇಳಿಕೆ ಆಧರಿಸಿ ಪ್ರಕರಣ ಪರಿಗಣಿಸಿರುವುದು ಕಾನೂನುಬಾಹಿರ ಎಂದು ವಾದಿಸಿದ್ದರು.
ಇದಕ್ಕೆ ಪ್ರತಿಯಾಗಿ ಶಿವಾನಂದ ಪಾಟೀಲ್ ಪರ ವಕೀಲರು, ಯತ್ನಾಳ್ ಅವರ ಹೇಳಿಕೆಗಳು ಸ್ಪಷ್ಟವಾಗಿ ಮಾನಹಾನಿಕರವಾಗಿದ್ದು, ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಪ್ರಕರಣದ ಸಂಜ್ಞೆ ತೆಗೆದುಕೊಂಡಿರುವ ಕ್ರಮದಲ್ಲಿ ಯಾವುದೇ ಲೋಪವಿಲ್ಲ ಎಂದು ವಾದಿಸಿದ್ದರು. ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ಯತ್ನಾಳ್ ಅವರ ಅರ್ಜಿಯನ್ನು ತಿರಸ್ಕರಿಸಿದೆ.
ಪ್ರಕರಣದ ಹಿನ್ನೆಲೆ:
2025ರ ಏಪ್ರಿಲ್ 30ರಂದು ಖಾಸಗಿ ಯೂಟ್ಯೂಬ್ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಯತ್ನಾಳ್ ಅವರು ಶಿವಾನಂದ ಪಾಟೀಲ್ ವಿರುದ್ಧ ಅವಹೇಳನಕಾರಿ ಹಾಗೂ ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಶಿವಾನಂದ ಪಾಟೀಲ್ ಅವರು 2025ರ ಜುಲೈ 18ರಂದು ಬೆಂಗಳೂರಿನ 42ನೇ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.
ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 356(2)ರ ಅಡಿಯಲ್ಲಿ ಪ್ರಕರಣದ ಸಂಜ್ಞೆ ತೆಗೆದುಕೊಂಡಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ 2026ರ ಜನವರಿ 24ರಂದು ಯತ್ನಾಳ್ ಅವರಿಗೆ ಸಮನ್ಸ್ ಜಾರಿಗೊಳಿಸಿತ್ತು.
ಈ ಆದೇಶ ಪ್ರಶ್ನಿಸಿ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ಕೂಡ ಅರ್ಜಿಯನ್ನು ವಜಾಗೊಳಿಸಿರುವುದರಿಂದ ಯತ್ನಾಳ್ ವಿರುದ್ಧದ ಮಾನಹಾನಿ ಪ್ರಕರಣದ ವಿಚಾರಣೆ ಮುಂದುವರಿಯಲು ಹಾದಿ ಸುಗಮವಾಗಿದೆ.
Peepal Media Desk
Peepal Media · ಕಾನೂನು ವಿಭಾಗ