ಮೀಸಲಾತಿ ಹೆಚ್ಚಳಕ್ಕೆ ಕೇಂದ್ರದ ಮಧ್ಯಪ್ರವೇಶ ಮಾಡಲಿ – ಜಿ. ಪರಮೇಶ್ವರ್
ಲಿಂಕ್ ನಕಲಿಸಲಾಗಿದೆ ✓
ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂವಿಧಾನಾತ್ಮಕ ರಕ್ಷಣೆ ಒದಗಿಸುವಂತೆ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಒತ್ತಾಯಿಸಿದ್ದಾರೆ.
ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಡಾ. ವೀರೇಂದ್ರ ಕುಮಾರ್ ಅವರಿಗೆ ಪತ್ರ ಬರೆದಿರುವ ಅವರು, ಕರ್ನಾಟಕದ ಎಸ್‌ಸಿ/ಎಸ್‌ಟಿ ಮೀಸಲಾತಿ ಕಾಯ್ದೆ-2022ನ್ನು ಸಂವಿಧಾನದ 9ನೇ ಅನುಸೂಚಿಗೆ ಸೇರಿಸುವಂತೆ ಮನವಿ ಮಾಡಿದ್ದಾರೆ. ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಿತ್ತು. ಆದರೆ, ಈ ಮೀಸಲಾತಿ ಹೆಚ್ಚಳದ ಕ್ರಮವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ, ಕಾಯ್ದೆಗೆ ಸಂವಿಧಾನಾತ್ಮಕ ರಕ್ಷಣೆ ನೀಡಲು ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ತಮಿಳುನಾಡಿನಲ್ಲಿ ಜಾರಿಯಲ್ಲಿರುವ ಶೇ.69ರ ಮೀಸಲಾತಿ ವ್ಯವಸ್ಥೆಗೆ ಸಂವಿಧಾನಾತ್ಮಕ ರಕ್ಷಣೆ ನೀಡಿರುವ ಮಾದರಿಯನ್ನು ಉಲ್ಲೇಖಿಸಿರುವ ಪರಮೇಶ್ವರ್, ಕರ್ನಾಟಕದಲ್ಲಿಯೂ ಮೀಸಲಾತಿ ಹೆಚ್ಚಳಕ್ಕೆ ಅಗತ್ಯವಾದ ಸಂವಿಧಾನ ತಿದ್ದುಪಡಿಯನ್ನು ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಪರಿಶಿಷ್ಟ ಜಾತಿಗಳಿಗೆ ಶೇ.17 ಮತ್ತು ಪರಿಶಿಷ್ಟ ಪಂಗಡಗಳಿಗೆ ಶೇ.7ರಷ್ಟು ಮೀಸಲಾತಿ ಒದಗಿಸುವ ರಾಜ್ಯದ ಕಾಯ್ದೆಯನ್ನು 9ನೇ ಅನುಸೂಚಿಗೆ ಸೇರಿಸುವುದರ ಜತೆಗೆ, ಸಂವಿಧಾನಾತ್ಮಕ ರಕ್ಷಣೆ ಕಲ್ಪಿಸಲು ಸಂಸತ್ತಿನಲ್ಲಿ ತಿದ್ದುಪಡಿ ಮಸೂದೆ ಮಂಡಿಸುವ ಪ್ರಕ್ರಿಯೆಯನ್ನು ತುರ್ತಾಗಿ ಆರಂಭಿಸಬೇಕು ಎಂದು ಮನವಿ ಮಾಡಿದ್ದಾರೆ.
ಅಲ್ಲದೆ, ರಾಷ್ಟ್ರೀಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗಗಳೊಂದಿಗೆ ಸಮಾಲೋಚನೆ ನಡೆಸಿ, ನ್ಯಾಯಾಲಯ ಗುರುತಿಸಿರುವ ಸಂವಿಧಾನಾತ್ಮಕ ಹಾಗೂ ಪ್ರಕ್ರಿಯಾತ್ಮಕ ಸಮಸ್ಯೆಗಳನ್ನು ಪರಿಹರಿಸಬೇಕು. ಕೇಂದ್ರದ ಕಾನೂನು ಮತ್ತು ನ್ಯಾಯ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ, ಬುಡಕಟ್ಟು ವ್ಯವಹಾರ ಹಾಗೂ ಗೃಹ ಸಚಿವಾಲಯಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಕಾಲಮಿತಿಯೊಳಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.
ದೇಶದ ಬದಲಾಗುತ್ತಿರುವ ಸಾಮಾಜಿಕ ವಾಸ್ತವಗಳು, ವಿವಿಧ ರಾಜ್ಯಗಳ ಅನುಭವ ಹಾಗೂ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಸಂವಿಧಾನಾತ್ಮಕ ಆಶಯಗಳನ್ನು ಗಮನದಲ್ಲಿಟ್ಟುಕೊಂಡು ಶೇ.50ರ ಮೀಸಲಾತಿ ಮಿತಿಯ ಪ್ರಸ್ತುತತೆ ಕುರಿತು ರಾಷ್ಟ್ರಮಟ್ಟದಲ್ಲಿ ವ್ಯಾಪಕ ಚರ್ಚೆ ನಡೆಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ತಮಿಳುನಾಡಿನ ಶೇ.69ರ ಮೀಸಲಾತಿಗೆ ನೀಡಿರುವ ಮಾದರಿಯಲ್ಲಿಯೇ ಕರ್ನಾಟಕದ ಒಟ್ಟು ಶೇ.56ರ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಿರುವ ಶೇ.24ರ ಪಾಲಿಗೂ ಸಂವಿಧಾನಾತ್ಮಕ ರಕ್ಷಣೆ ದೊರೆಯಬೇಕು. ಈ ಕುರಿತು ಕೇಂದ್ರ ಸರ್ಕಾರ ಕಾಲಮಿತಿಯೊಳಗೆ ನಿರ್ಧಾರ ಕೈಗೊಳ್ಳಬೇಕು ಎಂದು ಪರಮೇಶ್ವರ್ ಪತ್ರದ ಮೂಲಕ ಆಗ್ರಹಿಸಿದ್ದಾರೆ.
ರಮೇಶ್ ಹಾಸನ್
Peepal Media · ಬ್ರೇಕಿಂಗ್ ಸುದ್ದಿ ವಿಭಾಗ