ಕಸ್ತೂರಿರಂಗನ್ ವರದಿ: ಅರಣ್ಯ ಗಡಿ ಗೊಂದಲಕ್ಕೆ ಶಾಶ್ವತ ಪರಿಹಾರ, ಒಂದು ವರ್ಷದೊಳಗೆ ಜಂಟಿ ಭೌತಿಕ ಸಮೀಕ್ಷೆ : ಸಚಿವ ರಾಮಲಿಂಗಾರೆಡ್ಡಿ
ಲಿಂಕ್ ನಕಲಿಸಲಾಗಿದೆ ✓
ಬೆಂಗಳೂರು/ಮಂಗಳೂರು: ಪಶ್ಚಿಮ ಘಟ್ಟಗಳ ಕಸ್ತೂರಿರಂಗನ್ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅರಣ್ಯ ಪ್ರದೇಶಗಳ ಗಡಿ ಗುರುತಿಸುವಿಕೆ, ಭೂಮಿಯ ವಿಸ್ತೀರ್ಣ ಹಾಗೂ ದಾಖಲೆಗಳಲ್ಲಿನ ವ್ಯತ್ಯಾಸಗಳಿಗೆ ತೆರೆ ಎಳೆಯಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆ ಮತ್ತು ರಾಜ್ಯಮಟ್ಟದಲ್ಲಿ ಪ್ರತ್ಯೇಕ ಸಮಿತಿಗಳನ್ನು ರಚಿಸಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಹಾಗೂ ಸರ್ವೇ ಇಲಾಖೆ ಅಧಿಕಾರಿಗಳ ಮೂಲಕ ಜಂಟಿ ಭೌತಿಕ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಒಂದು ವರ್ಷದೊಳಗೆ ಸಮೀಕ್ಷೆ ಪೂರ್ಣಗೊಳಿಸಿ ಕೇಂದ್ರ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಲಾಗುವುದು ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಪಿಲಿಕುಳ ನಿಸರ್ಗಧಾಮದಲ್ಲಿ ಭಾನುವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಸ್ತೂರಿರಂಗನ್ ವರದಿ ಕುರಿತಂತೆ ಈ ಹಿಂದೆ ವಿಧಾನಸಭೆಯಲ್ಲಿ ಸುದೀರ್ಘ ಚರ್ಚೆ ನಡೆದಿದ್ದು, ಎಲ್ಲ ಪಕ್ಷಗಳೂ ಸಮೀಕ್ಷೆ ನಡೆಸುವ ಪ್ರಸ್ತಾವಕ್ಕೆ ಬೆಂಬಲ ವ್ಯಕ್ತಪಡಿಸಿವೆ. ಆದರೆ, ಈವರೆಗೆ ಸ್ಥಳಮಟ್ಟದಲ್ಲಿ ಸಮಗ್ರ ಭೌತಿಕ ಪರಿಶೀಲನೆ ನಡೆಸಿ ಕೇಂದ್ರಕ್ಕೆ ಅಂತಿಮ ವರದಿ ಸಲ್ಲಿಸುವ ಪ್ರಕ್ರಿಯೆ ಪೂರ್ಣಗೊಂಡಿರಲಿಲ್ಲ ಎಂದು ವಿವರಿಸಿದರು.
ಸರ್ಕಾರದ ಬಳಿ ಈಗಾಗಲೇ ಬಹುತೇಕ ಅಗತ್ಯ ದಾಖಲೆಗಳಿವೆ. ಆದರೂ ದಾಖಲೆಗಳ ಆಧಾರದಲ್ಲೇ ಅಂತಿಮ ನಿರ್ಧಾರಕ್ಕೆ ಬರುವ ಬದಲು, ಅರಣ್ಯ ಮತ್ತು ಸರ್ವೇ ಇಲಾಖೆಗಳ ಅಧಿಕಾರಿಗಳು ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಲಿದ್ದಾರೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾಮಟ್ಟದ ಸಮಿತಿ ಹಾಗೂ ಪ್ರತ್ಯೇಕ ರಾಜ್ಯಮಟ್ಟದ ಸಮಿತಿ ಈ ಪ್ರಕ್ರಿಯೆಯ ಮೇಲ್ವಿಚಾರಣೆ ನಡೆಸಲಿವೆ. ಭೂಮಿಯ ವಾಸ್ತವಿಕ ಸ್ಥಿತಿ ಮತ್ತು ದಾಖಲೆಗಳ ನಡುವಿನ ವ್ಯತ್ಯಾಸಗಳನ್ನು ಗುರುತಿಸಿ ಸರಿಪಡಿಸುವ ಮೂಲಕ ಮುಂದಿನ ದಿನಗಳಲ್ಲಿ ಗಡಿ ವಿವಾದ ಹಾಗೂ ಆಕ್ಷೇಪಗಳಿಗೆ ಅವಕಾಶವಿಲ್ಲದಂತೆ ಕ್ರಮ ಕೈಗೊಳ್ಳುವುದು ಸರ್ಕಾರದ ಉದ್ದೇಶವಾಗಿದೆ ಎಂದರು.
ಪರ್ಯಾಯ ಭೂಮಿ ನೀಡಿದರೆ ಮಾತ್ರ ಮೇಕೆದಾಟು ಯೋಜನೆಗೆ ಅರಣ್ಯ ಜಾಗ
ಮೇಕೆದಾಟು ಅಣೆಕಟ್ಟು ಯೋಜನೆಗೆ ಸರ್ಕಾರ ಬದ್ಧವಾಗಿದೆ ಎಂದು ಪುನರುಚ್ಚರಿಸಿದ ಸಚಿವರು, ಯೋಜನೆಗೆ ಅಗತ್ಯವಿರುವ ಸುಮಾರು 13 ಸಾವಿರ ಎಕರೆ ಅರಣ್ಯ ಪ್ರದೇಶಕ್ಕೆ ಬದಲಿಯಾಗಿ ಅಷ್ಟೇ ಪ್ರಮಾಣದ ಪರ್ಯಾಯ ಭೂಮಿಯನ್ನು ಒದಗಿಸಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು.
ಪರ್ಯಾಯ ಭೂಮಿ ಗುರುತಿಸದೆ ಅರಣ್ಯ ಪ್ರದೇಶವನ್ನು ಬೇರೆ ಇಲಾಖೆಗೆ ವರ್ಗಾಯಿಸುವುದಾಗಲಿ, ಖಾಸಗಿ ಉದ್ದೇಶಗಳಿಗೆ ಬಳಸುವುದಾಗಲಿ ಸಾಧ್ಯವಿಲ್ಲ. ಅರಣ್ಯ ಭೂಮಿ ವರ್ಗಾವಣೆಗೆ ಸಂಬಂಧಿಸಿದಂತೆ ದೇಶಾದ್ಯಂತ ಜಾರಿಯಲ್ಲಿರುವ ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು.
ಪರಿಸರ ಸೂಕ್ಷ್ಮ ವಲಯದಲ್ಲಿ ಹಳೆಯ ಗ್ರಾಮಗಳಿಗೆ ನಿಯಮಾನುಸಾರ ವಿನಾಯಿತಿ
ಅರಣ್ಯ ಪ್ರದೇಶಗಳ ಸುತ್ತಮುತ್ತಲಿನ ಪರಿಸರ ಸೂಕ್ಷ್ಮ ವಲಯದ ನಿಯಮಗಳ ಕುರಿತು ಪ್ರತಿಕ್ರಿಯಿಸಿದ ಅವರು, ಕೆಲವು ಪ್ರದೇಶಗಳಲ್ಲಿ ಒಂದು ಕಿಲೋಮೀಟರ್ ವ್ಯಾಪ್ತಿಯ ನಿಯಮ ಅನ್ವಯವಾಗುತ್ತದೆ. ಆದರೆ, ಈಗಾಗಲೇ ಅಸ್ತಿತ್ವದಲ್ಲಿರುವ ಹಳೆಯ ಗ್ರಾಮಗಳ ವ್ಯಾಪ್ತಿಯಲ್ಲಿ ನಿಯಮಾವಳಿಗಳ ಪ್ರಕಾರ ಅಗತ್ಯ ವಿನಾಯಿತಿ ಪಡೆದು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದೆ. ಇಂತಹ ಸಂದರ್ಭಗಳಲ್ಲಿ ಸಂಬಂಧಪಟ್ಟ ವಿಭಾಗೀಯ ಆಯುಕ್ತರ ಅನುಮತಿ ಪಡೆಯುವುದು ಅಗತ್ಯ ಎಂದು ತಿಳಿಸಿದರು.
Peepal Media Desk
Peepal Media · ರಾಜ್ಯ ವಿಭಾಗ