ಹಿರಿಯೂರು ಉಪಚುನಾವಣೆಯಲ್ಲಿ ಜೆಡಿಎಸ್ಗೆ ಅವಕಾಶ: ಬಿಜೆಪಿ ನಾಯಕರ ಮನವೊಲಿಕೆಗೆ ಕುಮಾರಸ್ವಾಮಿ ಯತ್ನ
ಲಿಂಕ್ ನಕಲಿಸಲಾಗಿದೆ ✓
ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ; ಗ್ಯಾರಂಟಿಗಳ ಹೆಸರಿನಲ್ಲಿ ಜನರ ಮೇಲೆ ತೆರಿಗೆ ಹೊರೆ ಆರೋಪ
ಕೊಲ್ಲೂರು: ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಬಿಜೆಪಿ ನಾಯಕರಲ್ಲಿ ಮನವಿ ಮಾಡಿರುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಸೋಮವಾರ ಕೊಲ್ಲೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹಿರಿಯೂರು ಕ್ಷೇತ್ರದಲ್ಲಿ ಜೆಡಿಎಸ್ಗೆ ಸುಮಾರು 40 ಸಾವಿರ ಮತಗಳ ಬಲವಿದೆ. ಹೀಗಾಗಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿದರೆ ಗೆಲುವಿನ ಸಾಧ್ಯತೆ ಹೆಚ್ಚಿದೆ ಎಂದು ಅಭಿಪ್ರಾಯಪಟ್ಟರು. ಕ್ಷೇತ್ರದಲ್ಲಿ ಹಿಂದಿನಿಂದಲೂ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ನೇರ ಸ್ಪರ್ಧೆ ನಡೆಯುತ್ತಾ ಬಂದಿದೆ. ಬಿಜೆಪಿಗೆ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಆಸೆಯಿದ್ದರೂ, ವಾಸ್ತವಿಕ ರಾಜಕೀಯ ಪರಿಸ್ಥಿತಿಯನ್ನು ಪರಿಗಣಿಸಿ ಜೆಡಿಎಸ್ಗೆ ಅವಕಾಶ ನೀಡುವಂತೆ ಮನವಿ ಮಾಡಲಾಗಿದೆ ಎಂದರು.
ಈ ವಿಚಾರದಲ್ಲಿ ಯಾವುದೇ ವೈಯಕ್ತಿಕ ಪ್ರತಿಷ್ಠೆ ಅಥವಾ ಗೊಂದಲವಿಲ್ಲ. ಮೈತ್ರಿ ವಿಚಾರದಲ್ಲಿ ತಾಳ್ಮೆಯಿಂದ ಇದ್ದೇವೆ ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತದ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಸರ್ಕಾರ ಮೂರೂವರೆ ವರ್ಷ ಆಡಳಿತ ನಡೆಸಿದ್ದರೂ ತನ್ನ ಸಾಧನೆಗಳನ್ನು ಜನರ ಮುಂದಿಡಲು ಯಾವುದೇ ಮಹತ್ವದ ವಿಚಾರಗಳಿಲ್ಲ ಎಂದು ಟೀಕಿಸಿದರು. ಐದು ಗ್ಯಾರಂಟಿಗಳ ಅನುಷ್ಠಾನದ ಹೊರೆ ಸಂಪೂರ್ಣವಾಗಿ ಜನರ ಮೇಲೆ ಬೀಳುತ್ತಿದೆ. ಜನರು ಪಾವತಿಸುವ ತೆರಿಗೆ ಹಣದಿಂದಲೇ ಸರ್ಕಾರದ ಬೊಕ್ಕಸ ತುಂಬುತ್ತಿದೆಯೇ ಹೊರತು, ಮುಖ್ಯಮಂತ್ರಿ ಅಥವಾ ಉಪಮುಖ್ಯಮಂತ್ರಿಗಳ ವೈಯಕ್ತಿಕ ಕೊಡುಗೆಯಿಂದಲ್ಲ ಎಂದು ಆರೋಪಿಸಿದರು.
ಬಸ್ ಪ್ರಯಾಣ ದರ ಏರಿಕೆ ಸೇರಿದಂತೆ ವಿವಿಧ ತೆರಿಗೆ ಹೆಚ್ಚಳಗಳ ಮೂಲಕ ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ ಹೇರಲಾಗುತ್ತಿದೆ ಎಂದು ದೂರಿದ ಅವರು, 2025ರಲ್ಲಿ ಬಸ್ ದರವನ್ನು ಶೇ.35ರಷ್ಟು ಹೆಚ್ಚಿಸಿದ್ದ ಸರ್ಕಾರ ಇದೀಗ ಮತ್ತೆ ಶೇ.45ರಷ್ಟು ಏರಿಕೆ ಮಾಡಿದೆ ಎಂದು ಆರೋಪಿಸಿದರು. ಅಬಕಾರಿ ಇಲಾಖೆಯಿಂದ 40 ಸಾವಿರ ಕೋಟಿ ರೂಪಾಯಿ ಸಂಗ್ರಹಿಸುವ ಗುರಿ ಸೇರಿದಂತೆ ವಿವಿಧ ಮೂಲಗಳಿಂದ ಜನರ ಮೇಲೆ ತೆರಿಗೆ ಹೊರೆ ಹೆಚ್ಚಿಸಲಾಗುತ್ತಿದೆ ಎಂದರು.
ಗ್ಯಾರಂಟಿ ಯೋಜನೆಗಳಿಗೆ ತಮ್ಮ ವಿರೋಧವಿಲ್ಲ. ಆದರೆ, ಅವುಗಳ ಅನುಷ್ಠಾನದ ನೆಪದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸುವುದು ಸರಿಯಲ್ಲ. ರಾಜ್ಯದ ಅಭಿವೃದ್ಧಿ ಮತ್ತು ಜನರ ಬದುಕಿನ ಭವಿಷ್ಯದ ಬಗ್ಗೆ ಸರ್ಕಾರ ಸ್ಪಷ್ಟ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.
ಕಬ್ಬು ಬೆಳೆಗಾರರ ಸಮಸ್ಯೆಗಳ ಬಗ್ಗೆಯೂ ಪ್ರಸ್ತಾಪಿಸಿದ ಅವರು, ರೈತರ ಹೋರಾಟದ ಬಳಿಕವೂ ಸರ್ಕಾರ ಸಮರ್ಪಕವಾಗಿ ನೆರವಿಗೆ ಬಂದಿಲ್ಲ. ನೀರಿನ ಸಮರ್ಪಕ ಹಂಚಿಕೆಯಾಗದ ಕಾರಣ ಕಬ್ಬು ಬೆಳೆ ನಾಶವಾಗಿರುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಬರಗಾಲ ಹಾಗೂ ಬಿತ್ತನೆ ಬೀಜದ ಸಮಸ್ಯೆಗಳಿಂದ ಸುಮಾರು 62 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ತಿಳಿಸಿದ ಅವರು, ಈ ನಷ್ಟಕ್ಕೆ ಪರಿಹಾರವಾಗಿ ಕೇಂದ್ರ ಸರ್ಕಾರದಿಂದ ನೆರವು ನೀಡುವಂತೆ ರಾಜ್ಯ ಸರ್ಕಾರ ಮನವಿ ಮಾಡಿದೆ ಎಂದರು. ರೈತರ ಸಂಕಷ್ಟದ ಬಗ್ಗೆ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯವನ್ನೂ ಪ್ರಶ್ನಿಸಿದರು.
ಹಾಸನಾಂಬೆ ದೇವಾಲಯದಿಂದ 29 ಕೋಟಿ ರೂಪಾಯಿ ಸಂಗ್ರಹವಾಗಿರುವ ವಿಚಾರವನ್ನು ಉಲ್ಲೇಖಿಸಿದ ಕುಮಾರಸ್ವಾಮಿ, ಕರಾವಳಿ ಪ್ರದೇಶದ ಅಭಿವೃದ್ಧಿ ವಿಚಾರದಲ್ಲಿಯೂ ಸರ್ಕಾರದ ಘೋಷಣೆಗಳು ಕಾರ್ಯರೂಪಕ್ಕೆ ಬಂದಿಲ್ಲ ಎಂದು ಟೀಕಿಸಿದರು. ಕರಾವಳಿ ಭಾಗ ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳ ಪ್ರಮುಖ ಕೇಂದ್ರವಾಗಿದ್ದರೂ, ಅಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಘೋಷಿಸಲಾದ 35 ಸಾವಿರ ಕೋಟಿ ರೂಪಾಯಿ ಅನುದಾನ ಎರಡು-ಮೂರು ತಿಂಗಳು ಕಳೆದರೂ ಬಿಡುಗಡೆಯಾಗಿಲ್ಲ ಎಂದು ಆರೋಪಿಸಿದರು.
ಕೇವಲ ಅನುದಾನದ ಘೋಷಣೆಗಳ ಮೂಲಕ ಕರಾವಳಿ ಜನರನ್ನು ಸಮಾಧಾನಪಡಿಸಲು ಸಾಧ್ಯವಿಲ್ಲ. ಭರವಸೆಗಳನ್ನು ಈಡೇರಿಸದಿದ್ದರೆ ಕಾಂಗ್ರೆಸ್ ಪಕ್ಷ ಜನರ ಮುಂದೆ ಉತ್ತರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ತಮ್ಮ ವಿರುದ್ಧ ಕಾಂಗ್ರೆಸ್ ನಾಯಕರು ಮಾಡುತ್ತಿರುವ ಟೀಕೆಗಳಿಗೂ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿಗೆ ಹೊಟ್ಟೆ ಉರಿ, ಸುಳ್ಳೇ ಮನೆದೇವರು ಎಂದು ಆರೋಪಿಸುವವರು ಮೊದಲು ರಾಜ್ಯ ಸರ್ಕಾರದ ಆಡಳಿತವನ್ನು ಪರಿಶೀಲಿಸಲಿ. ಸುಳ್ಳು ಮತ್ತು ಮೋಸದ ಮೂಲಕ ಜನರನ್ನು ದಾರಿ ತಪ್ಪಿಸುತ್ತಿರುವುದು ಸರ್ಕಾರವೇ ಎಂದು ತಿರುಗೇಟು ನೀಡಿದರು.
Peepal Media Desk
Peepal Media · ರಾಜಕೀಯ ವಿಭಾಗ