ಸಾತನೂರು: ಜನರಲ್ಲಿ ಆತಂಕ ಮೂಡಿಸಿದ್ದ ಚಿರತೆ; ಬೋನಿಗೆ.
ಲಿಂಕ್ ನಕಲಿಸಲಾಗಿದೆ ✓
ರಾಮನಗರ: ತಾಲೂಕಿನ ಸಾತನೂರು ಹೋಬಳಿಯ ಸೂರನಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳಿಂದ ಭೀತಿ ಹುಟ್ಟಿಸಿದ್ದ ಚಿರತೆಯೊಂದು ಕೊನೆಗೂ ಅರಣ್ಯ ಇಲಾಖೆ (Forest Department) ಇರಿಸಿದ್ದ ಬೋನಿಗೆ (Leopard) ಬಿದ್ದಿದೆ. ಸುಮಾರು ನಾಲ್ಕು ವರ್ಷದ ಚಿರತೆ ಸೆರೆಯಾಗಿರುವುದರಿಂದ ಸುತ್ತಮುತ್ತಲಿನ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಜಮೀನಿನಲ್ಲಿ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ
ಗ್ರಾಮದ ಸುತ್ತಮುತ್ತ ಚಿರತೆ ಸಂಚಾರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಅದನ್ನು ಸೆರೆಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದರು. ಸಾರ್ವಜನಿಕರ ಮನವಿಗೆ ಸ್ಪಂದಿಸಿದ ಅಧಿಕಾರಿಗಳು, ಗ್ರಾಮದ ಅಮೃತ್ ಅರ್ಜುನ್ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಬೋನು ಇರಿಸಿದ್ದರು. ಸೋಮವಾರ ಬೆಳಿಗ್ಗೆ ಆಹಾರ ಅರಸಿ ಬಂದ ಚಿರತೆಯು ಬೋನಿನೊಳಗೆ ಸೆರೆಯಾಗಿದೆ.
ಸುರಕ್ಷಿತವಾಗಿ ಅರಣ್ಯಕ್ಕೆ ರವಾನೆ
ಬೋನಿಗೆ ಚಿರತೆ ಬಿದ್ದಿರುವ ವಿಷಯ ತಿಳಿಯುತ್ತಿದ್ದಂತೆಯೇ ಉಪ ವಲಯ ಅರಣ್ಯಾಧಿಕಾರಿ (DRFO) ಸಂತೋಷ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಸೆರೆಯಾದ ಚಿರತೆಯ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಚಿಕಿತ್ಸೆ ನೀಡಿದ ಬಳಿಕ, ಅದನ್ನು ದಟ್ಟ ಅರಣ್ಯ ಪ್ರದೇಶಕ್ಕೆ ಸುರಕ್ಷಿತವಾಗಿ ಬಿಡಲಾಗಿದೆ. ಚಿರತೆ ಸೆರೆಯಿಂದಾಗಿ ಸೂರನಹಳ್ಳಿ ಹಾಗೂ ಸುತ್ತಮುತ್ತಲಿನ ಹಳ್ಳಿಗಳ ರೈತರು ಮತ್ತು ನಿವಾಸಿಗಳು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.
ರಮೇಶ್ ಹಾಸನ್
Peepal Media · ಬ್ರೇಕಿಂಗ್ ಸುದ್ದಿ ವಿಭಾಗ