ಜಿಲ್ಲಾಧಿಕಾರಿ ವಿರುದ್ಧದ ಆರೋಪ – ಪೊಲೀಸ್ ನೋಟಿಸ್ಗೆ ಡೋಂಟ್ ಕೇರ್ ಎಂದ ಕುಮಾರಸ್ವಾಮಿ
ಲಿಂಕ್ ನಕಲಿಸಲಾಗಿದೆ ✓
ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದ್ದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಹಾಸನ ಸೈಬರ್ ಕ್ರೈಂ ಪೊಲೀಸರು ನೋಟಿಸ್ ನೀಡಲು ಮುಂದಾಗಿದ್ದು, ಈ ಬೆಳವಣಿಗೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ.
ಜಿಲ್ಲಾಧಿಕಾರಿ ಲತಾಕುಮಾರಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡುವಂತೆ ಸೂಚಿಸಿ ಸೈಬರ್ ಕಮಾಂಡ್ ಸೆಂಟರ್ನಿಂದ ನೋಟಿಸ್ ಸಿದ್ಧಪಡಿಸಲಾಗಿತ್ತು. ಈ ನೋಟಿಸ್ ತಲುಪಿಸಲು ಹಾಸನ ಸೈಬರ್ ಕ್ರೈಂ ಪೊಲೀಸರು ಕುಮಾರಸ್ವಾಮಿ ಅವರ ನಿವಾಸಕ್ಕೆ ತೆರಳಿದ್ದರು. ಆದರೆ, ನೋಟಿಸ್ ಸ್ವೀಕರಿಸಲು ನಿರಾಕರಿಸಿದ ಅವರು ಪೊಲೀಸರನ್ನು ವಾಪಸ್ ಕಳುಹಿಸಿದ್ದಾರೆ.
ಈ ಸಂದರ್ಭದಲ್ಲಿ ಪೊಲೀಸರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕನಾಗಿ ಸಾರ್ವಜನಿಕವಾಗಿ ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ದೂರು ದಾಖಲಾದ ತಕ್ಷಣ ಕ್ರಮ ಕೈಗೊಳ್ಳುವ ಪೊಲೀಸರು, ಇತರರು ಮಾಡಿರುವ ಆರೋಪಗಳ ವಿಚಾರದಲ್ಲೂ ಇದೇ ರೀತಿಯ ಕ್ರಮ ಕೈಗೊಂಡಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ. ಘಟನೆ ಬೆನ್ನಲ್ಲೇ ರಾಜ್ಯ ಪೊಲೀಸ್ ಮಹಾನಿರ್ದೇಶಕ ಸಲೀಂ ಅವರಿಗೂ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ ಎನ್ನಲಾಗಿದೆ.
ನೋಟಿಸ್ ಸ್ವೀಕರಿಸಲು ನಿರಾಕರಿಸಿದ ವಿಚಾರವಾಗಿ ಕುಮಾರಸ್ವಾಮಿ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ. ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲು ಅವರು ದೆಹಲಿಗೆ ತೆರಳಿದ್ದು, ಅಲ್ಲಿ ಈ ಕುರಿತು ಪ್ರತಿಕ್ರಿಯಿಸುವ ಸಾಧ್ಯತೆಯಿದೆ.
ಇದನ್ನು ಓದಿ
ಏನಿದು ಭ್ರಷ್ಟಾಚಾರದ ಆರೋಪ?
ಇತ್ತೀಚೆಗೆ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಲಂಚ ಮತ್ತು ಭ್ರಷ್ಟಾಚಾರದ ಗಂಭೀರ ಆರೋಪಗಳನ್ನು ಮಾಡಿದ್ದರು. ಈ ಸಂಬಂಧ ಕೆಲವು ವಾಟ್ಸ್ಆ್ಯಪ್ ಸಂಭಾಷಣೆಗಳ ಸ್ಕ್ರೀನ್ಶಾಟ್ಗಳನ್ನು ಬಿಡುಗಡೆ ಮಾಡಿದ್ದರು.
ಮೂರು ಕಲ್ಲಿನ ಕ್ರಷರ್ಗಳ ಪರವಾನಗಿ ಹಾಗೂ ಸಕಲೇಶಪುರ ಭಾಗದ ಭೂ ಪರಿವರ್ತನೆ ಕಡತಗಳ ವಿಲೇವಾರಿಗೆ ಸಂಬಂಧಿಸಿದಂತೆ 60 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಡಲಾಗಿದೆ ಎಂದು ಆರೋಪಿಸಿದ್ದರು. ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ಶಶಿಕಿರಣ್ ಅವರ ವಾಟ್ಸ್ಆ್ಯಪ್ ಸಂಭಾಷಣೆಗಳನ್ನು ಉಲ್ಲೇಖಿಸಿ ದಾಖಲೆಗಳನ್ನು ಬಹಿರಂಗಪಡಿಸಿದ್ದರು.
ಅಲ್ಲದೆ, ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಯಲು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರಿಗೆ 75 ಲಕ್ಷ ರೂ. ಲಂಚ ನೀಡಲಾಗಿದೆ ಎಂಬ ಮತ್ತೊಂದು ಗಂಭೀರ ಆರೋಪವನ್ನೂ ಮಾಡಿದ್ದರು.
ಈ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿದ್ದ ಜಿಲ್ಲಾಧಿಕಾರಿ ಲತಾಕುಮಾರಿ ಅವರು ಹಾಸನ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದರು. ಇದೀಗ ದೂರಿನ ಆಧಾರದ ಮೇಲೆ ಕೇಂದ್ರ ಸಚಿವರಿಗೆ ನೋಟಿಸ್ ನೀಡಲು ಪೊಲೀಸರು ಮುಂದಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಇದನ್ನು ಓದಿ
ರಮೇಶ್ ಹಾಸನ್
Peepal Media · ಮೀಡಿಯಾ ವಿಭಾಗ