ಬೆಂಗಳೂರಿನಲ್ಲಿ ದಿಲ್ಜಿತ್ ದೋಸಾಂಜ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ; ಭದ್ರತೆ ಹೆಚ್ಚಳ
ಲಿಂಕ್ ನಕಲಿಸಲಾಗಿದೆ ✓
ಬೆಂಗಳೂರು: ಪಂಜಾಬಿ ಗಾಯಕ ಹಾಗೂ ನಟ ದಿಲ್ಜಿತ್ ದೋಸಾಂಜ್ ಅವರ ಬೆಂಗಳೂರಿನಲ್ಲಿ ನಡೆಯಲಿರುವ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ದಾಳಿ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ.
ದಿಲ್ಜಿತ್ ಅವರ ‘ಆರಾ’ (AURA) ಭಾರತ ಪ್ರವಾಸದ ಭಾಗವಾಗಿ ನವೆಂಬರ್ 29ರಂದು ಬೆಂಗಳೂರಿನ ಮಾದಾವರದಲ್ಲಿರುವ NICE ಗ್ರೌಂಡ್ಸ್ನಲ್ಲಿ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದ ವೇಳೆ ಸುಧಾರಿತ ಸ್ಫೋಟಕ ಸಾಧನ (IED) ಬಳಸಿ ಸ್ಫೋಟ ನಡೆಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿದೆ.
ನವೆಂಬರ್ 9ರಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ಅಧಿಕೃತ ಇ-ಮೇಲ್ ವಿಳಾಸಕ್ಕೆ ಈ ಬೆದರಿಕೆ ಸಂದೇಶ ರವಾನೆಯಾಗಿತ್ತು. ಬಳಿಕ ಈ ಮಾಹಿತಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೂ ತಲುಪಿದೆ. ಸಂದೇಶದಲ್ಲಿ ಖಲಿಸ್ತಾನ್ ಪರ ಘೋಷಣೆಯನ್ನೂ ಉಲ್ಲೇಖಿಸಲಾಗಿದ್ದು, ಸಂಗೀತ ಕಾರ್ಯಕ್ರಮಕ್ಕೆ ಮಕ್ಕಳನ್ನು ಕರೆತರಬಾರದು, ಅನಾಥವಾಗಿ ಬಿದ್ದಿರುವ ಐಫೋನ್ಗಳನ್ನು ಮುಟ್ಟಬಾರದು ಹಾಗೂ ಮೆಟ್ರೋ ರೈಲುಗಳಲ್ಲಿ ಪ್ರಯಾಣಿಸಬಾರದು ಎಂಬ ಎಚ್ಚರಿಕೆ ನೀಡಲಾಗಿದೆ ಎಂದು ವರದಿಯಾಗಿದೆ.
ಅಲ್ಲದೆ, ಮಾದಾವರ ಮೆಟ್ರೋ ನಿಲ್ದಾಣದಲ್ಲಿಯೂ ಸ್ಫೋಟ ನಡೆಸುವುದಾಗಿ ಸಂದೇಶದಲ್ಲಿ ಬೆದರಿಕೆ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಕ್ರಮದ ಆಯೋಜಕರನ್ನು ಸಂಪರ್ಕಿಸಿ ಸ್ಥಳ ಹಾಗೂ ಕಾರ್ಯಕ್ರಮದ ದಿನಾಂಕವನ್ನು ಖಚಿತಪಡಿಸಿಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66 ಹಾಗೂ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 351(4) ಮತ್ತು 353(1)(ಬಿ) ಅಡಿಯಲ್ಲಿ ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸೈಬರ್ ಕ್ರೈಂ ಮತ್ತು ತಾಂತ್ರಿಕ ವಿಭಾಗದ ಪೊಲೀಸರು ಬೆದರಿಕೆ ಸಂದೇಶ ಕಳುಹಿಸಿರುವ ಇ-ಮೇಲ್ ಖಾತೆಯ ಮೂಲ, ಐಪಿ ವಿಳಾಸ ಹಾಗೂ ಸಂದೇಶದ ಸತ್ಯಾಸತ್ಯತೆ ಪತ್ತೆಹಚ್ಚಲು ತನಿಖೆ ಆರಂಭಿಸಿದ್ದಾರೆ. ಸಂಗೀತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ತಪಾಸಣೆ, ನಿಗಾ ಮತ್ತು ಹೆಚ್ಚುವರಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.
ಈವರೆಗೆ ಕಾರ್ಯಕ್ರಮದ ದಿನಾಂಕ ಅಥವಾ ಆಯೋಜನೆಯಲ್ಲಿ ಯಾವುದೇ ಬದಲಾವಣೆ ಘೋಷಣೆಯಾಗಿಲ್ಲ. ನವೆಂಬರ್ 29ರ ಕಾರ್ಯಕ್ರಮ ಸುಗಮವಾಗಿ ನಡೆಯುವಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
Peepal Media Desk
Peepal Media · ರಾಜ್ಯ ವಿಭಾಗ