ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಮತ್ತೆ ಸುಪ್ರೀಂ ಕೋರ್ಟ್ ಶಾಕ್; ಜಾಮೀನು ರದ್ದು, ಎರಡು ವಾರಗಳಲ್ಲಿ ಶರಣಾಗತಿಗೆ ಸೂಚನೆ
ಲಿಂಕ್ ನಕಲಿಸಲಾಗಿದೆ ✓
ನವದೆಹಲಿ: ಧಾರವಾಡದ ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಮತ್ತೆ ಹಿನ್ನಡೆ ನೀಡಿದೆ. ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಹಾಗೂ ಶಿಕ್ಷೆ ಅಮಾನತು ಆದೇಶವನ್ನು ಪ್ರಶ್ನಿಸಿ ಸಿಬಿಐ ಮತ್ತು ಮೃತ ಯೋಗೇಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಸಲ್ಲಿಸಿದ್ದ ಮೇಲ್ಮನವಿಗಳನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್, ವಿನಯ್ ಕುಲಕರ್ಣಿ ಅವರ ಜಾಮೀನನ್ನು ರದ್ದುಗೊಳಿಸಿದೆ. ಅಲ್ಲದೆ, ಎರಡು ವಾರಗಳ ಒಳಗಾಗಿ ಸಂಬಂಧಪಟ್ಟ ನ್ಯಾಯಾಲಯದ ಮುಂದೆ ಶರಣಾಗುವಂತೆ ಸೂಚಿಸಿದೆ.
ಸುಪ್ರೀಂ ಕೋರ್ಟ್ನ ಈ ಆದೇಶದಿಂದಾಗಿ ಸದ್ಯ ಜಾಮೀನಿನ ಮೇಲೆ ಹೊರಗಿದ್ದ ವಿನಯ್ ಕುಲಕರ್ಣಿ ಮತ್ತೆ ಜೈಲು ಸೇರುವ ಪರಿಸ್ಥಿತಿ ಎದುರಾಗಿದೆ.
ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 2026ರ ಏಪ್ರಿಲ್ನಲ್ಲಿ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಕರ್ನಾಟಕ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ವಿಭಾಗೀಯ ಪೀಠವು ಜುಲೈ 31ರಂದು ಶಿಕ್ಷೆಯನ್ನು ಅಮಾನತುಗೊಳಿಸಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಹಾಗೂ ಯೋಗೇಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
ಅಕ್ಟೋಬರ್ 27ರಂದು ಎರಡೂ ಕಡೆಯ ವಾದ-ಪ್ರತಿವಾದಗಳನ್ನು ಆಲಿಸಿದ್ದ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ಅಂತಿಮ ಆದೇಶ ಪ್ರಕಟಿಸಿರುವ ನ್ಯಾಯಾಲಯ, ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿದೆ.
2016ರಲ್ಲಿ ನಡೆದಿತ್ತು ಯೋಗೇಶ್ ಗೌಡ ಹತ್ಯೆ
2016ರ ಜೂನ್ 15ರಂದು ಧಾರವಾಡದ ಸಪ್ತಾಪುರದಲ್ಲಿರುವ ಜಿಮ್ನಲ್ಲಿ ಬಿಜೆಪಿ ಮುಖಂಡ ಯೋಗೇಶ್ ಗೌಡ ಅವರನ್ನು ದುಷ್ಕರ್ಮಿಗಳ ತಂಡ ಬರ್ಬರವಾಗಿ ಹತ್ಯೆ ಮಾಡಿತ್ತು. ಆರಂಭದಲ್ಲಿ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು.
ತನಿಖೆಯ ಸಂದರ್ಭದಲ್ಲಿ ಕೊಲೆಯ ಹಿಂದೆ ರಾಜಕೀಯ ದ್ವೇಷ ಮತ್ತು ಸಂಚು ಇತ್ತು ಎಂಬ ಆರೋಪಗಳನ್ನು ಸಿಬಿಐ ಮುಂದಿಟ್ಟಿತ್ತು. ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದರು.
ಸುಮಾರು ಹತ್ತು ವರ್ಷಗಳ ಕಾಲ ನಡೆದ ಕಾನೂನು ಪ್ರಕ್ರಿಯೆಯ ಬಳಿಕ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾಗಿದ್ದು, ಇದೀಗ ಜಾಮೀನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್ ಆದೇಶ ಪ್ರಕರಣಕ್ಕೆ ಮತ್ತೊಂದು ಮಹತ್ವದ ತಿರುವು ನೀಡಿದೆ.
Peepal Media Desk
Peepal Media · ಬ್ರೇಕಿಂಗ್ ಸುದ್ದಿ ವಿಭಾಗ