ಅಪರಾಧ ಪ್ರಕರಣಗಳ ಹೆಚ್ಚಳ, ಬಾಯಿ ಬಡಿದುಕೊಳ್ಳುವ ಮೂಲಕ – ಎಎಪಿ ಪ್ರತಿಭಟನೆ


ಹಾಸನ:
 ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳು ಹಾಗೂ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆ ಖಂಡಿಸಿ ಆಮ್ ಆದ್ಮಿ ಪಕ್ಷದ ವತಿಯಿಂದ ಶುಕ್ರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ವಿನೂತನ ರೀತಿಯಲ್ಲಿ ಬಾಯಿ ಬಡಿದುಕೊಳ್ಳುವ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಅಗಿಲೆ ಯೋಗೀಶ್ ತಿಳಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಗಾಂಜಾ, ಡ್ರಗ್ಸ್‌ ಸೇವನೆ ಮತ್ತು ಮಾರಾಟ, ಬೈಕ್ ವೀಲಿಂಗ್ ಸೇರಿದಂತೆ ಹಲವು ಅಕ್ರಮ ಚಟುವಟಿಕೆಗಳು ಹೆಚ್ಚಾಗಿವೆ ಎಂದು ಆರೋಪಿಸಿದರು.

ಹಾಡಹಗಲೇ ರಸ್ತೆಯಲ್ಲಿ ಮಚ್ಚು, ಲಾಂಗ್ ಹಿಡಿದು ಪುಂಡರು ಅಟ್ಟಹಾಸ ಮೆರೆಯುತ್ತಿರುವ ಘಟನೆಗಳು ನಡೆಯುತ್ತಿವೆ. ಕಳ್ಳತನ, ದರೋಡೆ ಹಾಗೂ ಕೊಲೆ ಪ್ರಕರಣಗಳು ವರದಿಯಾಗುತ್ತಿದ್ದರೂ ಪೊಲೀಸ್ ಇಲಾಖೆ ಪರಿಣಾಮಕಾರಿ ಕ್ರಮ ಕೈಗೊಳ್ಳುತ್ತಿಲ್ಲ ಎಂಬುದು ಸಾರ್ವಜನಿಕರ ಆರೋಪವಾಗಿದೆ ಎಂದು ಅವರು ದೂರಿದರು. ಇತ್ತೀಚೆಗಷ್ಟೇ ಚನ್ನಪಟ್ಟಣ ಸಮೀಪ ಯುವಕನೊಬ್ಬನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ನಡೆದಿದ್ದು, ಇಂತಹ ಪ್ರಕರಣಗಳಿಂದ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿ ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಅವರು ಆರೋಪಿಸಿದರು.

ಎಸ್‌ಪಿ ವರ್ಗಾವಣೆಗೆ ಆಗ್ರಹ
ಜಿಲ್ಲೆಯ ಪೊಲೀಸ್ ವ್ಯವಸ್ಥೆಯ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಕ್ತ ಹಿಡಿತವಿಲ್ಲದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಯೋಗೀಶ್, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು.
ಜಿಲ್ಲೆಯ ಕಾನೂನು ಸುವ್ಯವಸ್ಥೆಯ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಂಸದರು ಕೂಡ ತಮ್ಮ ಜವಾಬ್ದಾರಿ ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ ಎಂದು ಟೀಕಿಸಿದ ಅವರು, ಸರ್ಕಾರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಅಪರಾಧ ಚಟುವಟಿಕೆಗಳ ಬಗ್ಗೆ ತಕ್ಷಣ ಗಮನಹರಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡರಾದ ಮಧು, ಮಂಜುನಾಥ್, ವಿಕಾಸ್, ಗೌರಮ್ಮ, ಖಾದರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು