ಹಾಸನ: ಪ್ರಜಾತಾಂತ್ರಿಕ ಹಕ್ಕುಗಳನ್ನು ರಕ್ಷಿಸಬೇಕು, ಅಪ್ರಜಾತಾಂತ್ರಿಕ ಎಂದು ಆರೋಪಿಸಲಾದ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ತಕ್ಷಣ ಕೈಬಿಡಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ AIDSO, SFI ಮತ್ತು DYFI ಸಂಘಟನೆಗಳ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಹೇಮಾವತಿ ಪ್ರತಿಮೆ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ AIDSO ಜಿಲ್ಲಾ ಅಧ್ಯಕ್ಷೆ ಚೈತ್ರ, ಚುನಾವಣಾ ಆಯೋಗದ ನಿರ್ಧಾರಗಳು ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ಕುರಿತು ಆಕ್ಷೇಪ ವ್ಯಕ್ತಪಡಿಸಿದರು. ಚುನಾವಣಾ ಆಯೋಗದ ದಾಖಲೆಗಳ ಆಧಾರದಲ್ಲಿ ಪ್ರಕಟವಾದ ವರದಿಯನ್ನು ಉಲ್ಲೇಖಿಸಿದ ಅವರು, ಕಳೆದ ಹತ್ತು ತಿಂಗಳಲ್ಲಿ ಇಬ್ಬರು ಚುನಾವಣಾ ಆಯುಕ್ತರು 14 ವಿಷಯಗಳಲ್ಲಿ ಅಸಮ್ಮತಿ ದಾಖಲಿಸಿದ್ದಾರೆ ಎಂದು ಹೇಳಿದರು.
SIR ಪ್ರಕ್ರಿಯೆಯಿಂದ ದೇಶಾದ್ಯಂತ 13 ಕೋಟಿಗೂ ಅಧಿಕ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ಆರೋಪ ಮಾಡಿದ ಅವರು, ಹೊಸ ಮತದಾರರ ನೋಂದಣಿಗೆ ಸಂಬಂಧಿಸಿದ ಫಾರ್ಮ್-6ರ ನಿಯಮಗಳು ಯುವ ಮತದಾರರಿಗೆ ತೊಂದರೆ ಉಂಟುಮಾಡಬಹುದು. ಪೋಷಕರೊಂದಿಗಿನ ಸಂಬಂಧವನ್ನು ದೃಢೀಕರಿಸುವ ದಾಖಲೆಗಳನ್ನು ಕಡ್ಡಾಯಗೊಳಿಸುವುದರಿಂದ ಅರ್ಹ ಯುವಜನರು ಮತದಾನದ ಹಕ್ಕಿನಿಂದ ವಂಚಿತರಾಗುವ ಆತಂಕವಿದೆ ಎಂದು ತಿಳಿಸಿದರು. ಪ್ರಜಾತಾಂತ್ರಿಕ ಹಕ್ಕುಗಳ ರಕ್ಷಣೆಯ ಹೋರಾಟದಲ್ಲಿ ವಿದ್ಯಾರ್ಥಿಗಳು ಮತ್ತು ಯುವಜನರು ಮುಂಚೂಣಿಯಲ್ಲಿ ನಿಲ್ಲಬೇಕು ಎಂದು ಕರೆ ನೀಡಿದರು.
DYFI ಜಿಲ್ಲಾ ಸಂಚಾಲಕ ಪೃಥ್ವಿ ಮಾತನಾಡಿ, ಹಿಂದೆ ಚುನಾವಣಾ ಆಯೋಗ ಸ್ವತಂತ್ರ ಹಾಗೂ ನಿಷ್ಪಕ್ಷಪಾತ ಸಂಸ್ಥೆಯಾಗಿ ಗೌರವ ಪಡೆದಿತ್ತು. ಆದರೆ ಇಂದು ಆಯೋಗದ ಕಾರ್ಯವೈಖರಿ ಕುರಿತು ಗಂಭೀರ ಪ್ರಶ್ನೆಗಳು ಉದ್ಭವಿಸಿವೆ. ಚುನಾವಣಾ ವ್ಯವಸ್ಥೆಯ ಸ್ವಾಯತ್ತತೆ ಮತ್ತು ಜನರ ಮತದಾನದ ಹಕ್ಕುಗಳನ್ನು ರಕ್ಷಿಸುವುದು ಅಗತ್ಯ ಎಂದು ಹೇಳಿದರು.
SFI ಜಿಲ್ಲಾ ಕಾರ್ಯದರ್ಶಿ ರಮೇಶ್ ಮಾತನಾಡಿ, ಈ ಹಿಂದೆ ಬೂತ್ ಮಟ್ಟದ ಅಧಿಕಾರಿಗಳು ಮನೆಮನೆಗೆ ತೆರಳಿ ಮತದಾರರ ಪರಿಶೀಲನೆ ನಡೆಸುತ್ತಿದ್ದರು. ಆದರೆ ಈಗಿನ SIR ಪ್ರಕ್ರಿಯೆಯಲ್ಲಿ ದೇಶಾದ್ಯಂತ 13 ಕೋಟಿಗೂ ಹೆಚ್ಚು ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ ಎಂದು ಆರೋಪಿಸಿದರು.
ಕರ್ನಾಟಕದಲ್ಲಿ 1.07 ಕೋಟಿ ಹಾಗೂ ಹಾಸನ ಜಿಲ್ಲೆಯಲ್ಲಿ 1,67,285 ಮತದಾರರ ಹೆಸರುಗಳನ್ನು ಕರಡು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಉಲ್ಲೇಖಿಸಿದ ಅವರು, ಈ ಕುರಿತು ಸಮಗ್ರ ಪರಿಶೀಲನೆ ನಡೆಸಿ ಅರ್ಹ ಮತದಾರರ ಹಕ್ಕುಗಳನ್ನು ಖಾತರಿಪಡಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಗೆ ಬೆಂಬಲ ಸೂಚಿಸಿ ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ಹಾಗೂ ದಲಿತ ಮುಖಂಡ ಟಿ.ಆರ್. ವಿಜಯ್ ಕುಮಾರ್ ಮಾತನಾಡಿದರು.
SFI ಜಿಲ್ಲಾ ಕಾರ್ಯದರ್ಶಿ ರಮೇಶ್ AIDSO ಜಿಲ್ಲಾ ಕಾರ್ಯದರ್ಶಿ ಸುಷ್ಮಾ, DYFI ಮುಖಂಡರಾದ ಪ್ರದೀಪ್ ಮತ್ತು ಲೋಕೇಶ್, SFI ಪದಾಧಿಕಾರಿ ಮೇಘನ, AIDSO ಸದಸ್ಯ ಲೋಕೇಶ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು, ಯುವಜನರು ಹಾಗೂ ಪ್ರಗತಿಪರ ಚಿಂತಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
