ರಜನಿಕಾಂತ್ ಅಭಿನಯದ ‘ಜೈಲರ್’ ಚಿತ್ರದಲ್ಲಿ ಖಳನಾಯಕನಾಗಿ ನಟಿಸಿದ್ದ ನಟ ವಿನಾಯಕನ್ ಅವರನ್ನು ಎರ್ನಾಕುಲಂ ಉತ್ತರ ಪೊಲೀಸರು ಮಂಗಳವಾರ ಠಾಣೆಯಲ್ಲಿ ಗದ್ದಲ ಸೃಷ್ಟಿಸಿದ ಆರೋಪದ ಮೇಲೆ ಬಂಧಿಸಿದ್ದಾರೆ.
ಅವರನ್ನು ಎರ್ನಾಕುಲಂ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ವೈದ್ಯಕೀಯ ಪರೀಕ್ಷೆ ಪೂರ್ಣಗೊಂಡಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕುಡಿದ ಅಮಲಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅನಿಯಂತ್ರಿತವಾಗಿ ವರ್ತಿಸಿದ ಮತ್ತು ಪೊಲೀಸ್ ಠಾಣೆಯ ಕಾರ್ಯಾಚರಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ನಟನನ್ನು ಬಂಧಿಸಲಾಗಿದೆ. ಮೂಲಗಳ ಪ್ರಕಾರ, ಅವರು ವಾಸವಾಗಿರುವ ಅಪಾರ್ಟ್‌ಮೆಂಟ್‌ನಲ್ಲಿ ಗಲಾಟೆ ಮಾಡಿದ್ದಾರೆ ಎಂಬ ದೂರುಗಳನ್ನು ಸ್ವೀಕರಿಸಿದ ನಂತರ ಅವರನ್ನು ವಿಚಾರಣೆಗಾಗಿ ಠಾಣೆಗೆ ಕರೆಸಲಾಯಿತು.
ಮಾಧ್ಯಮದವರೊಂದಿಗೆ ಮಾತನಾಡಿದ ಉತ್ತರ ಪೊಲೀಸ್ ಎಸ್‌ಎಚ್‌ಒ (ಠಾಣಾಧಿಕಾರಿ) “ಅವರು (ವಿನಾಕಯನ್) ಅಸಭ್ಯವಾಗಿ ವರ್ತಿಸಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಸ್ವಲ್ಪ ಸಮಯದ ನಂತರ ಅವರನ್ನು ಬಿಡುಗಡೆ ಮಾಡಲಾಗುತ್ತದೆ. ಅವರನ್ನು ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗುತ್ತದೆ.ಅವರು ಕುಡಿದ ಮತ್ತಿನಲ್ಲಿರುವುದು ನಮಗೆ ತಿಳಿದುಬಂದಿದೆ” ಎಂದಿದ್ದಾರೆ.