Sunday, March 8, 2026

ಸತ್ಯ | ನ್ಯಾಯ |ಧರ್ಮ

ದ್ವೇಷ ರಾಜಕೀಯ ಮತ್ತು ದೌರ್ಜನ್ಯಗಳ ವಿರುದ್ಧ ಮಹಿಳಾ ಚಳುವಳಿ ಬಲಗೊಳ್ಳಬೇಕು – ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್

ಹಾಸನ: ಸಮಾಜದಲ್ಲಿ ಹೆಚ್ಚುತ್ತಿರುವ ದ್ವೇಷ ರಾಜಕೀಯ ಮತ್ತು ದೌರ್ಜನ್ಯಗಳ ವಿರುದ್ಧ ಮಹಿಳಾ ಚಳುವಳಿಗಳು ಇನ್ನಷ್ಟು ಬಲವಾಗಿ ಸಂಘಟಿತರಾಗಿ ಹೋರಾಟ ನಡೆಸಬೇಕು ಎಂದು ನಾಗರಿಕ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಕರೆ ನೀಡಿದರು.

ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ದೌರ್ಜನ್ಯ ವಿರೋಧಿ ಒಕ್ಕೂಟ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ದಿಕ್ಸೂಚಿ ಭಾಷಣ ಮಾಡಿದ ಅವರು, ಮಹಿಳಾ ಚಳುವಳಿಗಳು ಹಲವು ಸವಾಲುಗಳನ್ನು ಎದುರಿಸುತ್ತಾ ಮುಂದುವರಿಯುತ್ತಿವೆ ಎಂದು ಹೇಳಿದರು.

ಜಾತಿಯ ಹೆಸರಿನಲ್ಲಿ ದಲಿತರ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿರುವುದು ಹಾಗೂ ಮುಸ್ಲಿಂ ಮಹಿಳೆಯರ ವಿರುದ್ಧ ಅವಮಾನಕಾರಿ ನಡೆಗಳು ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆ. ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಮೇಲೂ ದಾಳಿಗಳು ಹೆಚ್ಚುತ್ತಿರುವುದು ಗಮನಾರ್ಹವಾಗಿದೆ ಎಂದು ಅವರು ತಿಳಿಸಿದರು. ಕ್ಕಳು ಬಲಿಯಾಗುತ್ತಿರುವುದು ದುಃಖಕರ ಸಂಗತಿ. ಇತ್ತೀಚೆಗೆ ರಂಜಾನ್ ಸಂದರ್ಭದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬನ ಹತ್ಯೆ ನಡೆದಿರುವ ಘಟನೆ ಉಲ್ಲೇಖಿಸಿ, ಇಂತಹ ದ್ವೇಷಪರ ಘಟನೆಗಳ ವಿರುದ್ಧ ಮಹಿಳಾ ಚಳುವಳಿಗಳು ದೃಢವಾಗಿ ಹೋರಾಟ ಕಟ್ಟಬೇಕು ಎಂದು ಕರೆ ನೀಡಿದರು.

ನಾಗರಿಕತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೆ ತಂದ ಸಂದರ್ಭ ಪ್ರಶ್ನೆ ಎತ್ತಿದವರ ಮೇಲೆ ದೇಶದ್ರೋಹ ಹಾಗೂ ಯುಎಪಿಎ ಪ್ರಕರಣಗಳನ್ನು ದಾಖಲಿಸಲಾಗಿತ್ತು. ಆದರೆ ಸಾವಿರಾರು ಮುಸ್ಲಿಂ ಮಹಿಳೆಯರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಸರ್ಕಾರ ಚಳುವಳಿಯನ್ನು ಕುಂಠಿತಗೊಳಿಸಲು ಪ್ರಯತ್ನಿಸಿದರೂ ಅದು ಯಶಸ್ವಿಯಾಗಲಿಲ್ಲ. ಇದು ಜನಚಳುವಳಿಯ ಶಕ್ತಿಗೆ ಉದಾಹರಣೆ ಎಂದು ಹೇಳಿದರು.ಬಿಲ್ಕಿಸ್ ಬಾನು ಪ್ರಕರಣದಲ್ಲಿ ಸರ್ಕಾರ ಹಾಗೂ ಕಾನೂನು ವ್ಯವಸ್ಥೆ ನಡೆದುಕೊಂಡ ರೀತಿಯನ್ನು ದೇಶವೇ ಕಂಡಿದೆ. ದಲಿತ ಮತ್ತು ಆದಿವಾಸಿ ವಿರೋಧಿ ನೀತಿಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಮಹಿಳಾ ಚಳುವಳಿಗಳು ಹೋರಾಟ, ಸಂವಾದ ಮತ್ತು ಜಾಗೃತಿ ಕಾರ್ಯಕ್ರಮಗಳ ಮೂಲಕ ಸಮಾಜವನ್ನು ಸಂಘಟಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು.ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿ ಮಾತನಾಡಿ, ಗ್ರಾಮೀಣ ಮಹಿಳೆಯರಿಗೆ ಸ್ವತಂತ್ರವಾಗಿ ದುಡಿಯಲು ಹಾಗೂ ಪ್ರಶ್ನಿಸಲು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂಎನ್‌ಆರ್‌ಇಜಿಎ) ಮಾನಸಿಕ ಬಲ ನೀಡಿತ್ತು. ಆದರೆ ವಿವಿಧ ಕಾರಣಗಳಿಂದ ಈ ಯೋಜನೆಯನ್ನು ದುರ್ಬಲಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದರು.
ಸಾಹಿತಿ ಸಬೀತ ಬನ್ನಾಡಿ ಪ್ರಾಸ್ತಾವಿಕವಾಗಿ ಮಾತನಾಡಿ, ದೌರ್ಜನ್ಯಗಳನ್ನು ಎದುರಿಸಲು ಸಮಾಜವೇ ಬದಲಾವಣೆಯ ದಿಕ್ಕಿನಲ್ಲಿ ಮುಂದಾಗಬೇಕು ಎಂದು ಹೇಳಿದರು.
ಜನಪರ ವೈದ್ಯೆ ಡಾ. ಎಸ್. ಅಂತಿಮಾ ಮಾತನಾಡಿ, ದೌರ್ಜನ್ಯಗಳ ವಿರುದ್ಧ ಹೋರಾಡಿದ ಮಹಿಳೆಯರು ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ತಿಳಿಸಿದರು.

ಸಮಾವೇಶಕ್ಕೂ ಮುನ್ನ ಹಾಸನ ನಗರದ ಪ್ರಮುಖ ಬೀದಿಗಳಲ್ಲಿ ನೂರಾರು ಮಹಿಳೆಯರು ಮೆರವಣಿಗೆ ನಡೆಸಿ ಕೋಲಾಟ ಹಾಗೂ ಡೊಳ್ಳು ಬಾರಿಸುವ ಮೂಲಕ ಗಮನ ಸೆಳೆದರು. ಇದೇ ವೇಳೆ ಹಾಸನ ಮಣ್ಣಿನ ಹೆಣ್ಣು ದನಿಗಳು ಎಂಬ ಪುಸ್ತಕವೂ ಬಿಡುಗಡೆಗೊಂಡಿತು.
ಸಮಾವೇಶದ ಅಧ್ಯಕ್ಷತೆಯನ್ನು ಸಾಹಿತಿ ರೂಪ ಹಾಸನ್ ವಹಿಸಿದ್ದರು. ವೇದಿಕೆಯಲ್ಲಿ ಮಮತಾ ನಿರಂಜನ, ಬಾ.ಹ. ರಮಾ, ಅರ್ಚನಾ ಜಯಂತ್, ಪ್ರಭಾವತಿ ದೇಸಾಯಿ, ಸುಜಾತ ಕುಮಾರಸ್ವಾಮಿ ಸೇರಿದಂತೆ ಅನೇಕ ಮಹಿಳಾ ನಾಯಕಿಯರು ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page