Saturday, April 27, 2024

ಸತ್ಯ | ನ್ಯಾಯ |ಧರ್ಮ

ಸುಪ್ರೀಂಕೋರ್ಟ್ ನಿರ್ದೇಶನದಂತೆ ಕರ್ನಾಟಕಕ್ಕೆ ಬರಪರಿಹಾರ ಘೋಷಣೆ ; ಆನೆಯ ಹೊಟ್ಟೆಗೆ ಅರೆಲೋಟ ಮಜ್ಜಿಗೆ !

ಕರ್ನಾಟಕಕ್ಕೆ ₹3,454 ಕೋಟಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಇಂದು (ಶನಿವಾರ) ಘೋಷಣೆ ಮಾಡಿದೆ. ಈ ಬಗ್ಗೆ ಸುಪ್ರೀಂಕೋರ್ಟ್ ಮೂಲಕ ದಾವೆ ಹೂಡಿದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಕೇಂದ್ರಕ್ಕೆ ಸ್ಪಷ್ಟವಾಗಿ ರಾಜ್ಯಕ್ಕೆ ಪರಿಹಾರ ಬಿಡುಗಡೆ ಮಾಡಬೇಕು ಎಂದು ನಿರ್ದೇಶನ ನೀಡುತ್ತಿದ್ದಂತೆಯೇ ಕೇಂದ್ರ ಸರ್ಕಾರ ಪರಿಹಾರದ ಘೋಷಣೆ ಮಾಡಿದೆ.

ರಾಜ್ಯ ಸರ್ಕಾರ ಕಳೆದ ಸೆಪ್ಟೆಂಬರ್‌ನಲ್ಲಿ ಬರ ಪರಿಹಾರ ಕೋರಿ ಕೇಂದ್ರಕ್ಕೆ ಮೊರೆ ಹೋಗಿತ್ತು. ಆದರೆ, ಬರ ಪರಿಹಾರ ಬಿಡುಗಡೆ ಮಾಡದೆ ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಬಳಿಕ ನೆರವು ನೀಡುವುದರ ಕುರಿತು ಒಂದು ವಾರದಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ವಾಗ್ದಾನ ನೀಡಿತ್ತು.

‘ಇದು ರಾಜ್ಯಕ್ಕೆ ಸಿಕ್ಕಿರುವ ಜಯ’ ಎಂದು ಪ್ರತಿಪಾದಿಸಿದ್ದ ರಾಜ್ಯ ಸರ್ಕಾರ, ‘ವಾರದೊಳಗೆ ಬರ ಪರಿಹಾರ ಬಿಡುಗಡೆಯಾಗಲಿದ್ದು, ಸುಪ್ರೀಂ ಕೋರ್ಟ್‌ನ ಮಧ್ಯ ಪ್ರವೇಶದಿಂದ ರಾಜ್ಯಕ್ಕೆ ನ್ಯಾಯ ಸಿಕ್ಕಿದೆ’ ಎಂದು ಅಭಿಪ್ರಾಯಪಟ್ಟಿತ್ತು.

ಇಂದು ಘೋಷಣೆ ಆಗಿರುವ ಬರ ಪರಿಹಾರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ, “ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿ ಕರ್ನಾಟಕಕ್ಕೆ ಸ್ವಲ್ಪವಾದರೂ ಬರ ಪರಿಹಾರ ಕೊಡಿಸಿದ ಸುಪ್ರೀಂ ಕೋರ್ಟ್ ಗೆ ಧನ್ಯವಾದಗಳು. ಎನ್ ಡಿ ಆರ್ ಎಫ್ ನಿಯಮವಾಳಿ ಪ್ರಕಾರ ರಾಜ್ಯಕ್ಕೆ ರೂ.18,171 ಕೋಟಿ ನೀಡಬೇಕಾಗಿದ್ದರೂ ಕೇಂದ್ರ ಸರ್ಕಾರ ಕೇವಲ ರೂ. 3,498 ಕೋಟಿಗೆ ಅನುಮೋದನೆ ನೀಡಿ, ರೂ. 3,454 ಕೋಟಿ ಬಿಡುಗಡೆ ಮಾಡಿದೆ. ಬರಪರಿಹಾರಕ್ಕಾಗಿ ಈ ಹಣ ಸಾಲದು. ಬಾಕಿ ಪರಿಹಾರಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

“ಕೇಂದ್ರ ಸರ್ಕಾರ ಕರ್ನಾಟಕದ ಮೇಲೆ ಕಾಳಜಿಯಿಂದ ಈ ಬರ ಪರಿಹಾರ ನೀಡಿಲ್ಲ. ನಾವು ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿ ನಮ್ಮಲ್ಲಿನ ಬರಸ್ಥಿತಿಯನ್ನು ಮನವರಿಕೆ ಮಾಡಿ ಕೊಟ್ಟಿದ್ದೆವು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಗೆ ರಾಜಕೀಯ ದುರುದ್ದೇಶದಿಂದ ಕೇಂದ್ರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಮನವರಿಕೆಯಾಗಿದೆ. ನ್ಯಾಯಾಲಯ ವಿಚಾರಣೆ ವೇಳೆ ಚಾಟಿ ಬೀಸಿದ ನಂತರ ವಾರದ ಅವಧಿಯೊಳಗೆ ಬರ ಪರಿಹಾರ ನೀಡಲಾಗುವುದು ಎಂದು ಸುಪ್ರೀಂ ಕೋರ್ಟ್ ಗೆ ವಚನ ನೀಡಿತ್ತು. ಅದನ್ನು ಪಾಲಿಸಲಿಕ್ಕಾಗಿ ಒಲ್ಲದ ಮನಸ್ಸಿನಿಂದ ಈ ಪರಿಹಾರ ನೀಡಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ X ಖಾತೆಯಲ್ಲಿ ತಿಳಿಸಿದ್ದಾರೆ.

ಇದರಲ್ಲಿ ಬಿಜೆಪಿಯ ನಾಯಕರದ್ದಾಗಲಿ, ಕೇಂದ್ರ ಸರ್ಕಾರದ್ದಾಗಲಿ ಯಾವ ಪಾತ್ರವೂ ಇಲ್ಲ. ಇದು ಕೃಷಿ ಕ್ಷೇತ್ರ ಮತ್ತು ರಾಜ್ಯದ ರೈತರ ಮೇಲೆ ಸುಪ್ರೀಂಕೋರ್ಟ್ ಇಟ್ಟುಕೊಂಡಿರುವ ಕಾಳಜಿಯ ಫಲ. ಸ್ವಲ್ಪವಾದರೂ ಪರಿಹಾರವನ್ನು ನೀಡದೆ ಇದ್ದರೆ ರೊಚ್ಚೆದ್ದಿರುವ ಕರ್ನಾಟಕದ ಜನ ಚುನಾವಣಾ ಪ್ರಚಾರಕ್ಕಾಗಿ ತಮ್ಮನ್ನು ರಾಜ್ಯಕ್ಕೆ ಕಾಲಿಡಲು ಬಿಡಲಾರರು ಎಂಬ ಭಯವೂ ಈ ಪರಿಹಾರ ಘೋಷಿಸಲು ಕಾರಣವಾಗಿದೆ. ಈ ಅಲ್ಪ ಪರಿಹಾರವನ್ನು ತಮ್ಮ ಸಾಧನೆ ಎಂದು ರಾಜ್ಯದ ಬಿಜೆಪಿ ನಾಯಕರು ಬಿಂಬಿಸಲು ಹೊರಟರೆ ರಾಜ್ಯದ ಜನೆ ಅವರಿಗೆ ತಕ್ಕ ಉತ್ತರ ನೀಡಬೇಕೆಂದು ಮನವಿ ಮಾಡುತ್ತೇನೆ” ಎಂದು ಹೇಳಿದ್ದಾರೆ.

https://www.facebook.com/share/p/tTpDKsaADUfXNK4Z/?mibextid=oFDknk

ಈ ನಡುವೆಯೇ ರಾಜ್ಯ ಬಿಜೆಪಿ ಪಕ್ಷ ಬರ ಪರಿಹಾರ ಬಿಡುಗಡೆಗೆ ಕೇಂದ್ರಕ್ಕೆ ಧನ್ಯವಾದ ತಿಳಿಸಿ ನಗೆಪಾಟಲಿಗೀಡಾಗಿದೆ. ಇಷ್ಟು ದಿನ ರಾಜ್ಯ ಸರ್ಕಾರ ಬರ ಪರಿಹಾರಕ್ಕೆ ಅಂಗಲಾಚಿದರೂ ಹಣ ಬಿಡುಗಡೆ ಮಾಡದೇ, ಈಗ ಸುಪ್ರೀಂಕೋರ್ಟ್ ಚಾಟಿಗೆ ಬೆದರಿ ಬಿಡುಗಡೆ ಮಾಡಿರುವುದು. ನಾವು ಧನ್ಯವಾದ ತಿಳಿಸಬೇಕಿರುವುದು ಸುಪ್ರೀಂಕೋರ್ಟಿಗೇ ವಿನಹ ಕೇಂದ್ರಕ್ಕಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಅಂದಹಾಗೆ ರಾಜ್ಯ ಸರ್ಕಾರ ರೂ.18,171 ಕೋಟಿ ಬೇಡಿಕೆ ಇಟ್ಟರೂ, ಸುಪ್ರೀಂಕೋರ್ಟ್ ಚಾಟಿಯಿಂದ ತಪ್ಪಿಸಿಕೊಳ್ಳಲು ಕೇಂದ್ರ ಸರ್ಕಾರ ಕೇವಲ ರೂ. 3,498 ಕೋಟಿಗೆ ಅನುಮೋದನೆ ನೀಡಿ, ರೂ. 3,454 ಕೋಟಿ ಬಿಡುಗಡೆ ಮಾಡಿದೆ. ಸಧ್ಯ ಈ ಹಣ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತಾಗಿದೆ‌.

Related Articles

ಇತ್ತೀಚಿನ ಸುದ್ದಿಗಳು