ಪುತ್ತೂರು: ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಚೋದನಕಾರಿ ಹಾಗೂ ಕೋಮು ದ್ವೇಷ ಭಾಷಣ ಆರೋಪದಡಿ ಮತ್ತೊಂದು ಪ್ರಕರಣ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಜನವರಿ 21ರಂದು ಪುತ್ತೂರಿನ ಖಾಸಗಿ ಕಾಲೇಜೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಲ್ಲಡ್ಕ ಪ್ರಭಾಕರ್ ಭಟ್, ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ಹಾಗೂ ಹಿಂಸೆಗೆ ಪ್ರಚೋದನೆ ನೀಡುವಂತೆ ಭಾಷಣ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಸಂಬಂಧ ಪುತ್ತೂರು ನಿವಾಸಿ ರಾಮಚಂದ್ರ ಕೆ. ಅವರು ಪೊಲೀಸರಿಗೆ ದೂರು ನೀಡಿದ್ದು, ದೂರಿನ ಆಧಾರದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದಲ್ಲದೆ, ಈ ವಿವಾದಾತ್ಮಕ ಭಾಷಣವನ್ನು ಪ್ರಸಾರ ಮಾಡಿದ ವಿಕಸನ ಟಿವಿ ಯೂಟ್ಯೂಬ್ ಚಾನೆಲ್ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧವೂ ದೂರು ದಾಖಲಾಗಿದೆ. ಖಾಸಗಿ ಕಾಲೇಜಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರ ಸಮ್ಮುಖದಲ್ಲೇ ವಿವಾದಾತ್ಮಕ ಹೇಳಿಕೆಗಳನ್ನು ನೀಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
