‘ದೆಹಲಿ, ಬಂಗಾಳ, ಮಹಾರಾಷ್ಟ್ರ ಚುನಾವಣೆ ರದ್ದುಪಡಿಸಿ ಮರುಚುನಾವಣೆ ನಡೆಸಿ’: ಸಿಇಸಿ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸುವಂತೆ ಕೇಜ್ರಿವಾಲ್ ಆಗ್ರಹ

ದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌ – SIR) ಪ್ರಕ್ರಿಯೆ ಕುರಿತು ಭಾರತೀಯ ಚುನಾವಣಾ ಆಯೋಗದ ಆಂತರಿಕ ಭಿನ್ನಾಭಿಪ್ರಾಯಗಳ ವರದಿ ಮುನ್ನೆಲೆಗೆ ಬಂದ ಬೆನ್ನಲ್ಲೇ, ಆಮ್ ಆದ್ಮಿ ಪಕ್ಷದ ಸಂಚಾಲಕ ಹಾಗೂ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಗಂಭೀರ ವಾಗ್ದಾಳಿ ನಡೆಸಿದ್ದಾರೆ. ವಿವಾದಿತ ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣ ರದ್ದುಗೊಳಿಸಬೇಕು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಬಂಧಿಸಿ ದೇಶದ್ರೋಹದ ಮೊಕದ್ದಮೆ ಹೂಡಬೇಕು ಹಾಗೂ ಇತ್ತೀಚೆಗೆ ನಡೆದ ದೆಹಲಿ, ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಳನ್ನು ರದ್ದುಪಡಿಸಿ ಹೊಸದಾಗಿ ಮತದಾನ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ಪ್ರಕಟಿಸಿದ ತನಿಖಾ ವರದಿಯನ್ನು ಉಲ್ಲೇಖಿಸಿ ಮಾತನಾಡಿದ ಕೇಜ್ರಿವಾಲ್, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಇತರ ಆಯುಕ್ತರ ಆಕ್ಷೇಪಗಳನ್ನು ಕಡೆಗಣಿಸಿ ಏಕಪಕ್ಷೀಯವಾಗಿ ಇಡೀ ಆಯೋಗವನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. ಮತದಾರರ ಪಟ್ಟಿಯಲ್ಲಿ ಅಕ್ರಮಗಳನ್ನು ಎಸಗಿ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲಾಗಿದೆ ಎಂದ ಅವರು, ಸಂವಿಧಾನಬದ್ಧ ಸಂಸ್ಥೆಯ ದುರುಪಯೋಗವನ್ನು ತೀವ್ರವಾಗಿ ಖಂಡಿಸಿದರು.

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿನ ಗೊಂದಲಗಳು ಮತ್ತು ಅಕ್ರಮಗಳ ಕಾರಣದಿಂದಾಗಿ ಇತ್ತೀಚೆಗೆ ನಡೆದ ರಾಜ್ಯಗಳ ಚುನಾವಣಾ ಫಲಿತಾಂಶಗಳು ಶಂಕಾಸ್ಪದವಾಗಿವೆ. ಆದ್ದರಿಂದ ಆ ಚುನಾವಣೆಗಳನ್ನು ತಕ್ಷಣ ರದ್ದುಗೊಳಿಸಿ, ಪಾರದರ್ಶಕವಾಗಿ ಮರುಚುನಾವಣೆ ನಡೆಸಬೇಕು ಎಂದು ಅವರು ಕೇಂದ್ರ ಸರ್ಕಾರ ಹಾಗೂ ನ್ಯಾಯಾಂಗಕ್ಕೆ ಒತ್ತಾಯಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು