Home ಬೆಂಗಳೂರು ಇಂದಿರಾಗಾಂಧಿ ಅವರು ಬ್ಯಾಂಕುಗಳ ರಾಷ್ಟ್ರೀಕರಣ ಮಾಡಿದ್ದರಿಂದಲೇ ಬ್ಯಾಂಕುಗಳ ಬಾಗಿಲು ಬಡವರಿಗೂ ತೆರೆಯಿತು: ಸಿ ಎಂ ಸಿದ್ದರಾಮಯ್ಯ...

ಇಂದಿರಾಗಾಂಧಿ ಅವರು ಬ್ಯಾಂಕುಗಳ ರಾಷ್ಟ್ರೀಕರಣ ಮಾಡಿದ್ದರಿಂದಲೇ ಬ್ಯಾಂಕುಗಳ ಬಾಗಿಲು ಬಡವರಿಗೂ ತೆರೆಯಿತು: ಸಿ ಎಂ ಸಿದ್ದರಾಮಯ್ಯ ವಿವರಣೆ

0

ಬೆಂಗಳೂರು, ನವೆಂಬರ್ 19; ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜನ್ಮ ದಿನವನ್ನು ಇಡೀ ದೇಶದಲ್ಲಿ ಆಚರಿಸಿ ಅವರು ದೇಶಕ್ಕಾಗಿ ಮಾಡಿದ ತ್ಯಾಗ ಬಲಿದಾನವನ್ನ ಸ್ಮರಿಸುತ್ತಿದ್ದೇವೆ. ದೇಶದ ಐಕ್ಯತೆಗಾಗಿ ಪ್ರಾಣವನ್ನೇ ತ್ಯಾಗ ಮಾಡಿದ ಅವರ ಬದುಕು ನಮ್ಮೆಲ್ಲರಿಗೂ ಆದರ್ಶ. ಅವರು ಕೆಚ್ಚೆದೆಯಿಂದ ದೇಶವನ್ನು ಆಳಿದರು ಎನ್ನುವುದನ್ನು ಮರೆಯಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂದಿಯವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕಾಂಗ್ರೆಸ್ ಪಕ್ಷ ಸದಾ ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು, ರೈತರ ಪರವಾಗಿರುವ ಪಕ್ಷ. ಸಂವಿಧಾನದಲ್ಲಿ ಅಪಾರವಾದ ನಂಬಿಕೆ ಇಟ್ಟುಕೊಂಡು ಸಂವಿಧಾನದ ರೀತ್ಯಾ ಕೆಲಸ ಮಾಡುತ್ತಿರುವ ಪಕ್ಷ. ಯಾರೇ ಅಧಿಕಾರಕ್ಕೆ ಬಂದರೂ ಸಂವಿಧಾನದ ರೀತ್ಯಾ ಕೆಲಸ ಮಾಡಬೇಕು. ಅದರ ಧ್ಯೇಯೋದ್ದೇಶಗಳನ್ನು ಜಾರಿ ಮಾಡಬೇಕು. ಪ್ರತಿಯೊಬ್ಬರೂ ಇದನ್ನು ಪಾಲನೆ ಮಾಡಬೇಕಾದದ್ದು ಕರ್ತವ್ಯ. ಇಂದಿರಾ ಗಾಂಧಿಯವರು ಬಡವರ ಪರವಾಗಿ ಬಹಳಷ್ಟು ಕೆಲಸಗಳನ್ನು ಮಾಡಿದ್ದಾರೆ. ಭೂ ಸುಧಾರಣಾ ಕಾಯ್ದೆ, ಗರೀಬಿ ಹಟಾವೋ ಕಾರ್ಯಕ್ರಮ, ಬ್ಯಾಂಕುಗಳ ರಾಷ್ಟ್ರೀಕರಣ ಮುಂತಾದವುಗಳ ಫಲ ಬಡವರಿಗೆ ದೊರಕಬೇಕು. ಬಡವರು ಆರ್ಥಿಕವಾಗಿ ಸಾಮಾಜಿಕವಾಗಿ ಶಕ್ತಿಯನ್ನು ಪಡೆದುಕೊಳ್ಳಬೇಕೆಂಬ ಉದ್ದೇಶ ಅವರಿಗೆ ಇತ್ತು ಎಂದರು.

ಬ್ಯಾಂಕುಗಳ ರಾಷ್ಟ್ರೀಕರಣದ ನಂತರ ಬ್ಯಾಂಕುಗಳ ಬಾಗಿಲು ಬಡವರಿಗೂ ತೆರೆಯಿತು

ಬ್ಯಾಂಕುಗಳು ರಾಷ್ಟ್ರೀಕರಣವಾಗುವ ಮೊದಲು ಬಡವರು ಬ್ಯಾಂಕುಗಳ ಮೆಟ್ಟಿಲುಗಳನ್ನು ಹತ್ತಲು ಸಾಧ್ಯವಾಗುತ್ತಿರಲಿಲ್ಲ. ಇಂದಿರಾ ಗಾಂಧಿಯವರು ರಾಷ್ಟ್ರೀಕರಣ ಮಾಡಿದ ನಂತರ ಬ್ಯಾಂಕುಗಳ ಬಾಗಿಲು ಬಡವರಿಗೂ ತೆರೆಯಿತು. ಕಾಂಗ್ರೆಸ್ ಪಕ್ಷ ಮಾತ್ರ ಸಮಾಜದಲ್ಲಿ ಸಾಮಾಜಿಕ ನ್ಯಾಯ , ಜಾತ್ಯಾತೀತ ತತ್ವ, ಸಂವಿಧಾನ, ಪ್ರಜಾಪ್ರಭುತ್ವಗಳಲ್ಲಿ ಅಪಾರವಾದ ನಂಬಿಕೆ ಇಟ್ಟು ಅದರಂತೆ ನಡೆಯುವ ಪಕ್ಷ ಎಂದರು.

ಬಿಜೆಪಿಗೆ ಕೇಂದ್ರೀಕೃತ ವ್ಯವಸ್ಥೆಯಲ್ಲಿ ನಂಬಿಕೆ ಇದೆ

ಈಗ ಅಧಿಕಾರದಲ್ಲಿರುವ ಬಿಜೆಪಿ ಇದಕ್ಕೆ ತದ್ವಿರುದ್ಧವಾಗಿರುವ ಪಕ್ಷ. ಬಡವರ ಪರವಾಗಿ, ಸಾಮಾಜಿಕ ನ್ಯಾಯದ ಪರವಾಗಿ ಇರಲು ಸಾಧ್ಯವೇ ಇಲ್ಲ. ಸಂವಿಧಾನದ ಬಗ್ಗೆ ಗೌರವ ಇಲ್ಲ. ಸಂವಿಧಾನ ಬದಲಾಗಬೇಕೆಂದು ಬಯಸುವ ಪಕ್ಷ. ಅವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ನಮಗೆ ಅಧಿಕಾರ ವಿಕೇಂದ್ರೀಕರಣದಲ್ಲಿ ನಂಬಿಕೆಯಿದ್ದರೆ, ಬಿಜೆಪಿಗೆ ಕೇಂದ್ರೀಕೃತ ವ್ಯವಸ್ಥೆಯಲ್ಲಿ ನಂಬಿಕೆ ಇದೆ ಎಂದು ವಿವರಿಸಿದರು.

ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ಆರ್ಥಿಕ ಅಧಿಕಾರ ಕೇಂದ್ರೀಕೃತಗೊಳ್ಳುತ್ತಿದೆ. ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಇಲ್ಲದೇ ಹೋಗಿದ್ದರೆ ಈ ದೇಶದಲ್ಲಿ ಅಧಿಕಾರ ವಿಕೇಂದ್ರೀಕರಣ ಆಗಲು ಸಾಧ್ಯವಾಗುತ್ತಿರಲಿಲ್ಲ. ಮಹಾತ್ಮ ಗಾಂಧಿ ದೇಶದಲ್ಲಿ ಗ್ರಾಮ ಸ್ವರಾಜ್ಯವಾಗಬೇಕೆಂದು ಬಯಸಿದ್ದರು. ಮಹಿಳೆಯರಿಗೆ ಮೀಸಲಾಗಿ ಕೊಟ್ಟಿದ್ದೇಕಾಂಗ್ರೆಸ್ ಪಕ್ಷ.

ರಾಜೀವ್ ಗಾಂಧಿಯವರು ಅಧಿಕಾರದಲ್ಲಿದ್ದಾಗ ಸಂವಿಧಾನಕ್ಕೆ ತಿದ್ದು ಪಡಿ ತಂದು ಅಧಿಕಾರ ವಿಕೇಂದ್ರೀಕರಣದ ಮೂಲಕ ಪಟ್ಟಣ ಪಂಚಾಯತಿ, ನಗರಸಭೆಗಳಿಗೆ ಅಧಿಕಾರವನ್ನು ಮಹಿಳೆಯರಿಗೆ ನೀಡಿದರು. ಇದಾಗದೇ ಹೋಗಿದ್ದರೆ ಮಹಿಳೆಯರಿಗೆ 55% ಮೀಸಲಾತಿ ದೊರೆಯುತ್ತಿರಲಿಲ್ಲ. ರಾಮಾ ಜೋಯಿಸ್ ಎಂಬ ಬಿಜೆಪಿ ಸಂಸದರು ಇದನ್ನು ಪ್ರಶ್ನಿಸಿ ಸರ್ವೋಚ್ಛ ನ್ಯಾಯಾಲಯಕ್ಕೆ ಹೋಗಿದ್ದ ಇತಿಹಾಸವನ್ನು ನೆನಪಿಸಿ ಬಿಜೆಪಿ ಹೇಗೆ ಮಹಿಳಾ ವಿರೋಧಿ ಮನಸ್ಥಿತಿ ಹೊಂದಿದೆ ಎನ್ನುವುದನ್ನು ವಿವರಿಸಿ,
ಅಧಿಕಾರ ಹಂಚಿಕೆಯಾಗಬೇಕೆಂದಿದ್ದರೆ ಅವರು ನ್ಯಾಯಾಲಯಕ್ಕೆ ಯಾಕೆ ಹೋಗುತ್ತಿದ್ದರು ಎಂದು ಪ್ರಶ್ನಿಸಿದರು.

ಬಿಜೆಪಿ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿರುವ ಪಕ್ಷ. ಕಾಂಗ್ರೆಸ್ಸಿನ ಸಿದ್ಧಾಂತದ ಬಗ್ಗೆ ಜನರಲ್ಲಿ ಸ್ಪಷ್ಟತೆ ಬೆಳೆಸಿಕೊಳ್ಳಿ ಎಂದು ಕರೆ ನೀಡಿದರು.

ಕಾಂಗ್ರೆಸಿನಲ್ಲಿ ಸೈದ್ಧಾಂತಿಕ ಸ್ಪಷ್ಟತೆ ಇಲ್ಲದೆ, ಹಾಗೂ ಇರಲಿ ಹೀಗೂ ಇರಲಿ ಎನ್ನುವವರೂ ಇದ್ದಾರೆ. ಸ್ಪಷ್ಟತೆ ಇಲ್ಲದೇ ಹೋದರೆ ಕಾಂಗ್ರೆಸ್ ಸಿದ್ಧಾಂತವನ್ನು ಬೆಳೆಸಲು ಸಾಧ್ಯವಿಲ್ಲ. ಬಿಜೆಪಿ ಮಹಿಳೆಯರ, ಬಡವರ ವಿರೋಧಿಗಳು ಎಂದು ಹೇಳಬೇಕು ಎಂದು ತಿಳಿಸಿದರು.

ದೇಶದ ಸ್ವಾತಂತ್ರ್ಯಕ್ಕೆ ಬಿಜೆಪಿಯವರು ಪ್ರಾಣ ತ್ಯಾಗ ಮಾಡಿಲ್ಲ

ಮನ್ ಮೋಹನ್ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಆಹಾರ ಭದ್ರತಾ ಕಾಯ್ದೆಯನ್ನು ಜಾರಿ ಮಾಡಿದರು. ಕರ್ನಾಟಕದಲ್ಲಿ 2013 ರಲ್ಲಿ ಒಂದು ರೂಪಾಯಿಗೆ , ನಂತರ ಉಚಿತವಾಗಿ ಅಕ್ಕಿಯನ್ನು ಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ವಾಜಪೇಯಿಯವರಾಗಲಿ, ಯಡಿಯೂರಪ್ಪ ಅವರಾಗಲಿ ಇಂಥದ್ದನ್ನು ಮಾಡಿದ್ದಾರೆಯೇ? ನಾವು ಬಡವರ ಪರವಾಗಿದ್ದೇವೆ. ಬಿಜೆಪಿ ಬಡವರ ಪರವಾಗಿ ಇರಲು ಸಾಧ್ಯವೇ ಇಲ್ಲ.

ಗ್ಯಾರಂಟಿ ಯೋಜನೆಗಳು, ಹಲವಾರು ಭಾಗ್ಯ ಯೋಜನೆಗಳು, ಇಂದಿರಾ ಕ್ಯಾಂಟೀನು, ಎಸ್.ಸಿ.ಎಸ್ ಪಿ/ ಟಿಎಸ್ ಪಿ ಕಾಯ್ದೆಯನ್ನು ಜಾರಿ ಮಾಡಿದ್ದು ಕಾಂಗ್ರೆಸ್ ಪಕ್ಷ. ಈ ದೇಶದ ಬಜೆಟ್ 48 ಲಕ್ಷ ಕೋಟಿ. 60,000 ಕೋಟಿ ರೂ.ಗಳನ್ನು ಮಾತ್ರ ಎಸ್ ಸಿ.ಎಸ್ ಪಿ /ಟಿ.ಎಸ್.ಪಿ ಯೋಜನೆಯಡಿ ವೆಚ್ಚ ಮಾಡುತ್ತಿದ್ದಾರೆ. ನಮ್ಮ ಸರ್ಕಾರ 3, 71,000 ಕೋಟಿ ಬಜೆಟ್ ನಲ್ಲಿ 39121 ಕೋಟಿ ರೂ.ಗಳನ್ನು ಪರಿಶಿಷ್ಟರಿಗೆ ಮೀಸಲಿಟ್ಟಿದ್ದೇವೆ. ಗೃಹ ಲಕ್ಷ್ಮಿ ಯೋಜನೆಯಡಿ 1. ಕೋಟಿ 22 ಲಕ್ಷ ಕುಟುಂಬಗಳಿಗೆ ತಿಂಗಳಿಗೆ 2000 ರೂ.ಗಳನ್ನು ಕೊಡಲಾಗುತ್ತಿದೆ. ನರೇಂದ್ರ ಮೋದಿಯವರು ಇದನ್ನು ವಿರೋಧಿಸಿದ್ದರು. 32,000 ಕೋಟಿ ರೂ.ಗಳನ್ನು ಗೃಹಲಕ್ಷ್ಮಿ ಯೋಜನೆಗೆ ವೆಚ್ಚ ಮಾಡಲಾಗುತ್ತಿದೆ. ಒಟ್ಟು ಗ್ಯಾರಂಟಿ ಯೋಜನೆಗಳಿ 56000 ಕೋಟಿ ಗಳನ್ನು ವೆಚ್ಚ ಮಾಡಲಾಗುತ್ತಿದೆ. ಸಾಮಾಜಿಕ ನ್ಯಾಯ, ಜಾತ್ಯಾತೀತ ತತ್ವದ ಪರವಾಗಿರುವುದು ಕಾಂಗ್ರೆಸ್ ಪಕ್ಷ ಮಾತ್ರ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರುವುದು, ಸಂವಿಧಾನದ ಬಗ್ಗೆ ಗೌರವ ಇಟ್ಟು ಅದರಂತೆ ನಡೆದುಕೊಳ್ಳುತ್ತಿರುವುದು ಕಾಂಗ್ರೆಸ್ ಪಕ್ಷ ಮಾತ್ರ ಎಂದರು. ಈ ದೇಶದ ಐಕ್ಯತೆಗೆ, ಸಾರ್ವಭೌಮತೆಗೆ ಪ್ರಾಣ ಕೊಟ್ಟವರು ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ. ಈ ದೇಶದ ಸ್ವಾತಂತ್ರ್ಯಕ್ಕೆ ಬಿಜೆಪಿಯವರು ಯಾರಾದರೂ ಪ್ರಾಣ ತ್ಯಾಗ ಮಾಡಿದ್ದಾರೆಯೇ? ಎಂದು ಪ್ರಶ್ನಿಸಿದರು.

ಸಂಸತ್ತಿನಲ್ಲಿ ಮಹಿಳೆಯರಿಗೆ ಶೇ 50 ರಷ್ಟು ಮೀಸಲಾತಿ ನೀಡಲು ನಮ್ಮ ತಕರಾರಿಲ್ಲ

ಬಿಜೆಪಿ ದೇಶ ಭಕ್ತಿ ಬಗ್ಗೆ ಉದ್ದನೆಯ ಭಾಷಣ ಮಾಡುತ್ತಾರೆ ಅಷ್ಟೇ. ದೇಶಬಕ್ತಿ ಉಳಿದಿದ್ದರೆ ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಎಂದರು. ಇದರ ಆಧಾರದ ಮೇಲೆ ಈ ದೇಶವನ್ನು , ನಾಡನ್ನು ಕಟ್ಟಬೇಕಾಗುತ್ತದೆ. ಇಂದಿರಾ ಗಾಂಧಿಯವರನ್ನು ನೆನೆಸಿಕೊಂಡು ಅವರಿಂದ ಸ್ಪೂರ್ತಿಯನ್ನು ಪಡೆದುಕೊಳ್ಳಬೇಕಾಗುತ್ತದೆ. ಮಹಿಳೆಯರಿಗೆ ಮೀಸಲಾತಿಯನ್ನು 2028 ರಲ್ಲಿ ಕೊಡುವುದಾಗಿ ಹೇಳುವ ನರೇಂದ್ರ ಮೋದಿಯವರು ಅದನ್ನು ಈಗಲೇ ಮಾಡಬಹುದಿತ್ತು. ಅದಕ್ಕೆ ರಾಜಕೀಯ ಇಚ್ಛಾಶಕ್ತಿ ಹಾಗೂ ಬದ್ಧತೆ ಅಗತ್ಯವಿದೆ. ಸಂಸತ್ತಿನಲ್ಲಿ ಮಹಿಳೆಯರಿಗೆ 50% ಮೀಸಲಾತಿ ನೀಡಲು ನಮ್ಮ ತಕರಾರೇನಿಲ್ಲ, ನಾವೇ ಇದನ್ನು ಜಾರಿಗೆ ತರಬೇಕು ಎಂದರು. ಜಿಲ್ಲಾ ಪಂಚಾಯತಿ, ಪಟ್ಟಣ ಪಂಚಾಯತಿಗಳಲ್ಲಿ 50% ಮೀಸಲಾತಿ ಇದೆ. ಮಹಿಳೆಯರಿಗೆ ಸಮಾನ ಅವಕಾಶಗಳು ದೊರಕಬೇಕು ಎಂದರು. ಸಂಸತ್ತು, ವಿಧಾನ ಸಭೆಯಲ್ಲಿಯೂ ಮೀಸಲಾತಿ ನೀಡಲು ನಮ್ಮ ತಕರಾರು ಇಲ್ಲ ಎಂದರು.

ಕಾಂಗ್ರೆಸ್ ಬಿಜೆಪಿಯಿಂದ ಪಾಠ ಕಲಿಯಬೇಕಾದ ಅಗತ್ಯವಿಲ್ಲ

ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡುತ್ತೇವೆ ಎಂದು ಮಾದ್ಯಮಗಳು ಬರೆದಿವೆ, ಆದರೆ ಅರ್ಹರಿಗೆ ಬಿಪಿಎಲ್ ಕಾರ್ಡ್ ತಪ್ಪಬಾರದು ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಅವರಿಗೆ ಸೂಚಿಸಲಾಗಿದೆ. ಎಲ್ಲಾ ಬಡವರಿಗೂ ಸೌಲಭ್ಯ ದೊರಕಬೇಕು. ಅನರ್ಹರಿಗೆ ಮಾತ್ರ ಎಪಿಎಲ್ ಕಾರ್ಡು ನೀಡಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

ಕಾಂಗ್ರೆಸ್ ಪಕ್ಷ ಈ ಬಿಜೆಪಿಯವರಿಂದ ಪಾಠ ಕಲಿಯಬೇಕಾದ ಅಗತ್ಯವಿಲ್ಲ. ಅವರು ಯಾವತ್ತೂ ಶ್ರೀಮಂತರ, ಮೇಲ್ಜಾತಿಯವರ ಪರ. 1925 ರಲ್ಲಿ ಆರ್.ಎಸ್.ಎಸ್ ಪ್ರಾರಂಭವಾಯಿತು. ಅಂದಿನಿಂದ ಇಂದಿನವರೆಗೆ ಪ್ರಜಾಪ್ರಭುತ್ವ, ಮೀಸಲಾತಿ, ಸಂವಿಧಾನದ ಪರವಾಗಿ ಮಾತನಾಡಿಲ್ಲ.

ಕಾಂಗ್ರೆಸ್ ಸಿದ್ದಾಂತದಲ್ಲಿ ನಂಬಿಕೆ ಇಟ್ಟು ಕೆಲಸ ಮಾಡೋಣ, ಪಕ್ಷವನ್ನು ಬಲಪಡಿಸುವ ಕೆಲಸ ಮಾಡೋಣ ಎಂದು ಶಪಥ ಮಾಡೋಣ ಎಂದು ಕರೆ ನೀಡಿದರು.

ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿ ಡಿ,ಕೆ.ಶಿವಕುಮಾರ್ , ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ರಾಜ್ಯಮಾಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯಾ ರೆಡ್ಡಿ, ಕಾರ್ಯಕರ್ತರು ಉಪಸ್ಥಿತರಿದ್ದರು.

You cannot copy content of this page

Exit mobile version