Saturday, February 28, 2026

ಸತ್ಯ | ನ್ಯಾಯ |ಧರ್ಮ

ಆಂಧ್ರಪ್ರದೇಶದ ಕಾಕಿನಾಡದಲ್ಲಿ ಪಟಾಕಿ ಕಾರ್ಖಾನೆ ಸ್ಫೋಟ: ಕನಿಷ್ಟ 21 ಮಂದಿ ಸಾವು

ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಸಾಮರ್ಲಕೋಟ ಮಂಡಲದ ವೇಟ್ಲಪಾಲಂ ಮತ್ತು ಜಿ.ಮೇಡುಪಾಡು ಗ್ರಾಮಗಳ ನಡುವೆ ಇರುವ ಪಟಾಕಿ ತಯಾರಿಕಾ ಘಟಕದಲ್ಲಿ ಶನಿವಾರ ಮಧ್ಯಾಹ್ನ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 21 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅಡಪಾ ನಾನಿ ಎಂಬುವವರ ಕುಟುಂಬಕ್ಕೆ ಸೇರಿದ ಈ ಘಟಕದಲ್ಲಿ ಕೆಲಸ ನಡೆಯುತ್ತಿದ್ದಾಗ ಏಕಾಏಕಿ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಮೃತದೇಹಗಳು ಕಿಲೋಮೀಟರ್‌ ದೂರದ ಹೊಲಗದ್ದೆಗಳಿಗೆ ಹೋಗಿ ಬಿದ್ದಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಈ ಘಟನೆಯಲ್ಲಿ ಐದಕ್ಕೂ ಹೆಚ್ಚು ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರಲ್ಲಿ ಹೆಚ್ಚಿನವರು ಮಹಿಳಾ ಕಾರ್ಮಿಕರು ಎಂದು ತಿಳಿದುಬಂದಿದೆ. ಸ್ಫೋಟದ ಸಮಯದಲ್ಲಿ ಘಟಕದೊಳಗೆ 20ಕ್ಕೂ ಹೆಚ್ಚು ಮಂದಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಸಾವಿನ ಸಂಖ್ಯೆ ಇನ್ನೂ ಏರಿಕೆಯಾಗುವ ಸಾಧ್ಯತೆಯಿದೆ. ಮೃತರ ಮತ್ತು ಗಾಯಾಳುಗಳ ಕುರಿತು ಅಧಿಕೃತ ಮಾಹಿತಿಗಾಗಿ ಪೊಲೀಸರು ಇನ್ನು ಕಾಯುತ್ತಿದ್ದಾರೆ.

ಘಟನಾ ಸ್ಥಳದಲ್ಲಿ ಇನ್ನೂ ಬೆಂಕಿಯ ಕೆನ್ನಾಲಗೆಗಳು ಎದ್ದೇಳುತ್ತಿದ್ದು, ಪದೇ ಪದೇ ಸಣ್ಣ ಪ್ರಮಾಣದ ಸ್ಫೋಟಗಳು ಸಂಭವಿಸುತ್ತಿವೆ. ಇದರಿಂದಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರಿಗೆ ರಕ್ಷಣಾ ಕಾರ್ಯಾಚರಣೆ ನಡೆಸುವುದು ಮತ್ತು ಮೃತದೇಹಗಳನ್ನು ಹೊರತೆಗೆಯುವುದು ಅತ್ಯಂತ ಸವಾಲಾಗಿದೆ. ಇಡೀ ಪ್ರದೇಶದಲ್ಲಿ ದಟ್ಟವಾದ ಹೊಗೆ ಆವರಿಸಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ತೀವ್ರ ಭೀತಿ ಆವರಿಸಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಅನುಮತಿಗಿಂತ ಹೆಚ್ಚಿನ ಪ್ರಮಾಣದ ಪಟಾಕಿ ಮತ್ತು ಸ್ಫೋಟಕ ವಸ್ತುಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದೇ ಈ ಭೀಕರ ದುರಂತಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಘಟಕದ ಮಾಲೀಕರು ಸುರಕ್ಷತಾ ಕ್ರಮಗಳನ್ನು ಪಾಲಿಸಿದ್ದರೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page