ಗುತ್ತಿಗೆದಾರನಿಂದ ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಬೆಂಗಳೂರಿನ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಈಗ ತನಿಖೆಗೆ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಸಿಕ್ಕಿದೆ. ನಿನ್ನೆಯಷ್ಟೇ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನ ಮೇಲೆ ಮತೊಂದು ಎಫ್ಐಆರ್ ದಾಖಲಾದ ಬೆನ್ನಲ್ಲೇ ಈಗ ಲಂಚ ಸ್ವೀಕಾರ ಪ್ರಕರಣದ ತನಿಖೆಗೆ ಆದೇಶ ನೀಡಿದ್ದು ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಗುತ್ತಿಗೆದಾರ ಚೆಲುವರಾಜು ಅವರಿಂದ 36 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 20 ಲಕ್ಷ ಲಂಚ ಸ್ವೀಕಾರ ಮಾಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1998ರ ಅಡಿ ಪ್ರಕರಣ ದಾಖಲಾಗಿತ್ತು. ಪ್ರಾಥಮಿಕ ಹಂತದ ತನಿಖೆಯಲ್ಲಿ ಮುನಿರತ್ನ ಅಪರಾಧ ಎಸಗಿರುವುದು ಸಾಬೀತಾಗಿತ್ತು. ತನಿಖೆ ನಡೆಸಿದ ಸಿಐಡಿ ಪೊಲೀಸ್ ಮಹಾನಿರ್ದೇಶಕರ ಕೋರಿಕೆಯ ಮೇರೆಗೆ ಇದೀಗ ಸಕ್ಷಮ ಪ್ರಾಧಿಕಾರದ ಕಡೆಯಿಂದ ತನಿಖೆಗೆ ಅನುಮತಿ ನೀಡಲಾಗಿದೆ.
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಷ್ಮಿದೇವಿನಗರ ವಾರ್ಡ್ನ ಡಿ ದೇವರಾಜು ಅರಸು ಟ್ರಕ್ ಟರ್ಮಿನಲ್ ಪ್ರದೇಶದ ಘನ ತ್ಯಾಜ್ಯ ಸಂಗ್ರಹಣ ಮತ್ತು ವಿಲೇವಾರಿ ಗುತ್ತಿಗೆ ಪಡೆದು ಕೆಲಸ ಮಾಡುತ್ತಿದ್ದೆ. ಶಾಸಕ ಮುನಿರತ್ನ 36 ಲಕ್ಷ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟು ಕಿರುಕುಳ ನೀಡಿದ್ದಾರೆ ಎಂದು ದೂರು ನೀಡಿರುವ ಚಲುವರಾಜು ಆರೋಪಿಸಿ ದೂರು ಸಲ್ಲಿಸಿದ್ದರು.
ಕೇವಲ ಲಂಚ ಅಷ್ಟೇ ಅಲ್ಲದೇ, ಹಲ್ಲೆ ನಡೆಸಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆಂದು ಚಲುವರಾಜು ಆರೋಪಿಸಿದ್ದರು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ.