ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕಾರ್ಕಳ ಶಾಸಕ ಸುನಿಲ್ ಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಿಯಾಂಕ್ ಖರ್ಗೆ ಅವರು ಸರ್ಕಾರಿ ಕಚೇರಿಗಳ ವ್ಯಾಪ್ತಿಯಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ನಿಷೇಧ ಹೇರುವಂತೆ ಮುಖ್ಯಮಂತ್ರಿಗೆ ಪತ್ರ ಬರೆದಿರುವುದು ರಾಜ್ಯದಲ್ಲಿ ಸಂಚಲನ ಮೂಡಿಸಿದ ಹಿನ್ನೆಲೆಯಲ್ಲಿ ಸುನಿಲ್ ಕುಮಾರ್ ಈ ಹೇಳಿಕೆ ನೀಡಿದ್ದಾರೆ. “ನಿಮಗೆ ತಾಕತ್ತಿದ್ದರೆ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ನಿಷೇಧ ಹೇರಿ, ಚುನಾವಣೆಯಲ್ಲಿ ಎದುರಿಸಲು ನಾವು ಸಿದ್ಧರಿದ್ದೇವೆ” ಎಂದು ಸುನಿಲ್ ಕುಮಾರ್ ಸವಾಲು ಹಾಕಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕಳೆದ ನೂರು ವರ್ಷಗಳಿಂದ ವ್ಯಕ್ತಿ ನಿರ್ಮಾಣ ಮತ್ತು ರಾಷ್ಟ್ರ ಪುನರ್ ನಿರ್ಮಾಣದಲ್ಲಿ ಮಹತ್ವದ ಕೊಡುಗೆ ನೀಡಿದೆ. ಇದರ ಅರಿವಿಲ್ಲದೆ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್ ವಿರುದ್ಧ ಮಾತನಾಡುತ್ತಿದ್ದಾರೆ. ಅವರಿಗೆ ಮಾಧ್ಯಮದ ಮುಂದೆ ಬಂದು ಮಾತನಾಡುವ ಚಟ ಇದೆ ಎಂದು ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
ಪ್ರಿಯಾಂಕ್ ಖರ್ಗೆ ಅವರು ತಮ್ಮ ಇಲಾಖೆಯಲ್ಲಿ ಕಳೆದ ಎರಡೂವರೆ ವರ್ಷದಿಂದ ಜನರಿಗೆ ಹತ್ತಿರವಾಗುವಂತಹ ಯಾವುದೇ ಕೆಲಸಗಳನ್ನು ಮಾಡಿಲ್ಲ. ಕೇವಲ ಪ್ರಚಾರಕ್ಕಾಗಿ ಆರ್‌ಎಸ್‌ಎಸ್ ಹೆಸರನ್ನು ಬಳಸಿಕೊಳ್ಳುತ್ತಿದ್ದಾರೆ. ಅವರ ತಂದೆ ಎಐಸಿಸಿ ಅಧ್ಯಕ್ಷರು ಮತ್ತು ತಾನು ಮಂತ್ರಿ ಎಂಬ ಅಧಿಕಾರದ ಮದದಿಂದ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರ ತಂದೆ ಮಲ್ಲಿಕಾರ್ಜುನ ಖರ್ಗೆ ಅವರು ಗೃಹಮಂತ್ರಿಯಾಗಿದ್ದಾಗಲೇ ಆರ್‌ಎಸ್‌ಎಸ್ ಬಗ್ಗೆ ಏನೂ ಮಾಡಲು ಆಗಲಿಲ್ಲ, ಈಗ ನಿಮಗೆ ತಾಕತ್ತಿದ್ದರೆ ನಿಷೇಧಿಸಿ ಎಂದು ಸುನಿಲ್ ಕುಮಾರ್ ಕಿಡಿಕಾರಿದ್ದಾರೆ.