ಉತ್ತರ ಪ್ರದೇಶ : ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳದ ಕಾಲ್ತುಳಿತ ದುರಂತದಲ್ಲಿ ಬೆಳಗಾವಿ ಮೂಲದ ತಾಯಿ-ಮಗಳು ಮೃತಪಟ್ಟಿದ್ದಾರೆ. ಜ್ಯೋತಿ ಹತ್ತರವಾಠ, ಮೇಘಾ ಹತ್ತರವಾಠ ಮೃತರು.
ಮೌನಿ ಅಮಾವಾಸ್ಯೆ ಹಿನ್ನೆಲೆ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಲು ಕೋಟ್ಯಂತರ ಜನ ತೆರಳಿದ್ದಾರೆ. ಮುಂಜಾನೆ ನದಿಯಲ್ಲಿ ಸ್ನಾನ ಮಾಡುವಾಗ ಕಾಲ್ತುಳಿತ ಸಂಭವಿಸಿ ಹಲವರು ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ತಾಯಿ-ಮಗಳು ಮೃತಪಟ್ಟಿರುವ ಬಗ್ಗೆ ಕುಟುಂಬಸ್ಥರು ಮಾಹಿತಿ ಹಂಚಿಕೊಂಡಿದ್ದಾರೆ.
ಬೆಳಗಾವಿಯಿಂದ ಸುಮಾರ 60 ಜನ ಕುಂಭಮೇಳಕ್ಕೆ ತೆರಳಿದ್ದರು. ಸಾಯಿರಥ ಟ್ರಾವೆಲ್ಸ್ ಮೂಲಕ ಇವರೆಲ್ಲಾ 3 ದಿನದ ಹಿಂದೆ ಕುಂಭಮೇಳಕ್ಕೆ ಪ್ರಯಾಣ ಬೆಳೆಸಿದ್ದರು. ಜ್ಯೋತಿ ಹತ್ತರವಾಠ, ಮೇಘಾ ಹತ್ತರವಾಠ ಅವರ ಜತೆ ಹಲವರು ಗಾಯಗೊಂಡಿದ್ದು, ಅವರಿಗೆಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡವರ ಆರೋಗ್ಯದ ಬಗ್ಗೆ ಜಿಲ್ಲಾಡಳಿತ ಮಾಹಿತಿ ಸಂಗ್ರಹಿಸುತ್ತಿದೆ.