ಬೆಂಗಳೂರು ರಸ್ತೆಬದಿ ಪಾರ್ಕಿಂಗ್ ಶುಲ್ಕ ಪ್ರಸ್ತಾವನೆ ಮರುಪರಿಶೀಲಿಸುವಂತೆ ಮುಖ್ಯಮಂತ್ರಿಗೆ ಸಚಿವ ರಾಮಲಿಂಗಾರೆಡ್ಡಿ ಪತ್ರ

ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ವಾಹನ ನಿಲುಗಡೆಗೆ ವಾರ್ಷಿಕವಾಗಿ ₹15,000 ದಿಂದ ₹25,000 ವರೆಗೆ ಶುಲ್ಕ ವಿಧಿಸುವ ಪ್ರಸ್ತಾವನೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಅವರು ಈ ಪ್ರಸ್ತಾವನೆಯನ್ನು ಮರುಪರಿಶೀಲಿಸುವಂತೆ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸುವ ಅಗತ್ಯವಿದ್ದರೂ, ಇಂತಹ ಹೆಚ್ಚುವರಿ ಶುಲ್ಕವು ಸಾಮಾನ್ಯ ಜನರ ಆರ್ಥಿಕ ಪರಿಸ್ಥಿತಿಯ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಅವರು ಪತ್ರದಲ್ಲಿ ಎಚ್ಚರಿಸಿದ್ದಾರೆ.

ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆ, ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ಹಾಗೂ ಜಿಎಸ್‌ಟಿ ಹೊರೆಯಿಂದ ಮಧ್ಯಮ ವರ್ಗದ ಕುಟುಂಬಗಳು ಈಗಾಗಲೇ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿವೆ ಎಂದು ಸಚಿವರು ಉಲ್ಲೇಖಿಸಿದ್ದಾರೆ. ಇಂತಹ ಸಂದರ್ಭದಲ್ಲಿ ವಾಹನ ಹೊಂದಿರುವುದಕ್ಕಾಗಿ ₹15,000 ದಿಂದ ₹25,000 ವರೆಗೆ ವಾರ್ಷಿಕ ಶುಲ್ಕ ವಿಧಿಸುವುದು ಜನಸಾಮಾನ್ಯರಿಗೆ ಮತ್ತೊಂದು ಅನಿವಾರ್ಯ ಆರ್ಥಿಕ ಹೊರೆಯಾಗಲಿದೆ.

ಬೆಂಗಳೂರಿನ ಹಳೆಯ ಬಡಾವಣೆಗಳು, ಕಿರಿದಾದ ವಸತಿ ಪ್ರದೇಶಗಳು ಮತ್ತು ಸಣ್ಣ ಅಪಾರ್ಟ್‌ಮೆಂಟ್‌ಗಳಲ್ಲಿ ಸ್ವಂತ ಆವರಣದೊಳಗೆ ಪಾರ್ಕಿಂಗ್ ಸೌಲಭ್ಯಗಳ ಕೊರತೆ ಇರುವುದರಿಂದ ಜನರು ರಸ್ತೆ ಬದಿಯಲ್ಲಿ ವಾಹನಗಳನ್ನು ನಿಲ್ಲಿಸುವುದು ಅನಿವಾರ್ಯವಾಗಿದೆ ಎಂದು ಅವರು ವಿವರಿಸಿದ್ದಾರೆ.

ಅಕ್ರಮ ಹಾಗೂ ದೀರ್ಘಾವಧಿಯ ರಸ್ತೆಬದಿ ಪಾರ್ಕಿಂಗ್ ನಿಯಂತ್ರಿಸುವುದು ಸ್ವಾಗತಾರ್ಹವಾಗಿದ್ದರೂ, ತಮ್ಮ ಕಟ್ಟಡಗಳಲ್ಲಿ ಪಾರ್ಕಿಂಗ್ ಸ್ಥಳಾವಕಾಶವಿಲ್ಲದ ಸಾಮಾನ್ಯ ಕುಟುಂಬಗಳಿಗೆ ಈ ಶುಲ್ಕದಿಂದ ವಿನಾಯಿತಿ ನೀಡಬೇಕು ಎಂದು ರಾಮಲಿಂಗಾರೆಡ್ಡಿ ಆಗ್ರಹಿಸಿದ್ದಾರೆ.

ಸಾರ್ವಜನಿಕ ಹಿತದೃಷ್ಟಿಯಿಂದ ಬೆಂಗಳೂರು ನಗರದ ಶಾಸಕರು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು (RWA) ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಗ್ರ ಸಮಾಲೋಚನೆ ನಡೆಸಿ, ವಾಸ್ತವಿಕ ಪರಿಸ್ಥಿತಿಗೆ ಅನುಗುಣವಾಗಿ ಸಮತೋಲಿತ ತೀರ್ಮಾನ ಕೈಗೊಳ್ಳುವಂತೆ ಅವರು ಮುಖ್ಯಮಂತ್ರಿಗಳಿಗೆ ಕೋರಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು