Home ರಾಜ್ಯ ಬೆಂಗಳೂರಿನ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುತ್ತಿಗೆಗೆ ಯತ್ನ: ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ, ಕೆ.ಆರ್. ವೃತ್ತದಲ್ಲಿ ಉದ್ವಿಗ್ನತೆ!

ಬೆಂಗಳೂರಿನ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುತ್ತಿಗೆಗೆ ಯತ್ನ: ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ, ಕೆ.ಆರ್. ವೃತ್ತದಲ್ಲಿ ಉದ್ವಿಗ್ನತೆ!

0

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ತಕ್ಷಣದ ರಾಜೀನಾಮೆಗೆ ಆಗ್ರಹಿಸಿ ಹಾಗೂ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ನಗರದ ಮುಖ್ಯ ಚುನಾವಣಾಧಿಕಾರಿಗಳ (CEO) ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ಸೋಮವಾರ ಮಧ್ಯಾಹ್ನ ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ. ಈ ಘಟನೆಯಿಂದಾಗಿ ಕೆ.ಆರ್. ವೃತ್ತ ಹಾಗೂ ಸಿಇಒ ಕಚೇರಿ ಸುತ್ತಮುತ್ತ ಕೆಲಕಾಲ ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಪ್ರತಿಭಟನಾಕಾರರ ಗುಂಪು ಕಚೇರಿಯ ಆವರಣವನ್ನು ಪ್ರವೇಶಿಸಿ ಗೇಟ್ ಒಳನುಗ್ಗಲು ಯತ್ನಿಸಿದಾಗ ಸ್ಥಳದಲ್ಲಿ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿ ತಡೆದರು. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ತಳ್ಳಾಟ, ನೂಕಾಟ ಉಂಟಾಗಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಯಿತು. ತಮ್ಮನ್ನು ಬಲವಂತವಾಗಿ ಎಳೆದುಕೊಂಡು ಹೋಗಿ ಬಲಪ್ರಯೋಗ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಫ್ರೀಡಂ ಪಾರ್ಕ್‌ನಲ್ಲೇ ಪ್ರತಿಭಟಿಸಲು ಡಿಸಿಪಿ ಮನವಿ:

ಘಟನೆಯ ಕುರಿತು ಸ್ಪಷ್ಟನೆ ನೀಡಿದ ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್ ಎಂ., “ಯಾವುದೇ ಪೂರ್ವಾನುಮತಿ ಅಥವಾ ಮುನ್ಸೂಚನೆ ನೀಡದೆ ಪ್ರತಿಭಟನಾಕಾರರು ಕೆ.ಆರ್. ವೃತ್ತದ ಬಳಿ ದಿಢೀರನೆ ಜಮಾಯಿಸಿದ್ದರು. ಹೈಕೋರ್ಟ್ ಆದೇಶದ ಪ್ರಕಾರ ಪ್ರತಿಭಟನೆಗಳನ್ನು ಕೇವಲ ನಿಗದಿತ ಸ್ಥಳದಲ್ಲಿ ಮಾತ್ರ ನಡೆಸಬೇಕಿದೆ. ಮೊದಲಿಗೆ ಅವರನ್ನು ಫ್ರೀಡಂ ಪಾರ್ಕ್‌ಗೆ ತೆರಳಿ ಪ್ರತಿಭಟಿಸುವಂತೆ ವಿನಂತಿಸಲಾಯಿತು. ಆದರೆ ಅವರು ಒಪ್ಪದ ಕಾರಣ, ಕಾನೂನಿನ ಪ್ರಕಾರ ಮುನ್ನೆಚ್ಚರಿಕಾ ಕ್ರಮವಾಗಿ ವಶಕ್ಕೆ ಪಡೆದು, ನಂತರ ಬಿಡುಗಡೆ ಮಾಡಲಾಯಿತು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಸಂಯಮದಿಂದಲೇ ವರ್ತಿಸಿದ್ದಾರೆ,” ಎಂದು ತಿಳಿಸಿದರು.

ಸಾರ್ವಜನಿಕ ಶಾಂತಿ ಮತ್ತು ಸಂಚಾರಕ್ಕೆ ತೊಂದರೆಯಾಗದಂತೆ ಹೈಕೋರ್ಟ್ ನಿರ್ದೇಶನದಂತೆ ಫ್ರೀಡಂ ಪಾರ್ಕ್‌ನಲ್ಲಿ ಮಾತ್ರ ಶಾಂತಿಯುತ ಪ್ರತಿಭಟನೆಗಳನ್ನು ನಡೆಸಬೇಕೆಂದು ಬೆಂಗಳೂರು ನಗರ ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಪತ್ರಕರ್ತರೊಂದಿಗೆ ಪೊಲೀಸರ ವಾಗ್ವಾದ:

ಘಟನೆಯ ವರದಿಗಾರಿಕೆಯಲ್ಲಿ ತೊಡಗಿದ್ದ ಮಾಧ್ಯಮ ಪ್ರತಿನಿಧಿಗಳು ಹಾಗೂ ಸ್ಥಳದಲ್ಲಿದ್ದ ಕೆಲ ಪೊಲೀಸರ ನಡುವೆ ವಾಗ್ವಾದ ನಡೆದು ಪರಿಸ್ಥಿತಿ ವಿಕೋಪಕ್ಕೆ ಹೋಗುವ ಹಂತ ತಲುಪಿತ್ತು. ತಕ್ಷಣವೇ ಸ್ಥಳದಲ್ಲಿದ್ದ ಡಿಸಿಪಿ ಅಕ್ಷಯ್ ಎಂ. ಮಧ್ಯಪ್ರವೇಶಿಸಿ, ಪತ್ರಕರ್ತರೊಂದಿಗೆ ಮಾತನಾಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

You cannot copy content of this page

Exit mobile version