ಬೆಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 4ರ ಶುಕ್ರವಾರದಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಾದ್ಯಂತ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಪ್ರಾಧಿಕಾರದ ಪಶುಪಾಲನಾ ವಿಭಾಗದ ಉಪ ನಿರ್ದೇಶಕರ ಕಚೇರಿಯಿಂದ ಈ ಅಧಿಕೃತ ಸುತ್ತೋಲೆ ಜಾರಿಯಾಗಿದ್ದು, ನಗರದ ಎಲ್ಲ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಹಾಗೂ ಅಂಗಡಿ-ಮುಂಗಟ್ಟುಗಳಲ್ಲಿ ಮಾಂಸ ಮಾರಾಟ ಮಾಡುವುದನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ. ನಿಯಮ ಉಲ್ಲಂಘಿಸಿ ಮಾಂಸ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.
